ಮಹಾರಾಷ್ಟ್ರದಿಂದ ಆಗಮಿಸಿದ 7 ಪ್ರಯಾಣಿಕರು ಕರ್ನಾಟಕದಲ್ಲಿ ಕ್ವಾರೆಂಟೈನ್!
ಧಾರವಾಡ, ಆಗಸ್ಟ್ 8: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗೆ ಕಡಿವಾಣ ಹಾಕುವುದಕ್ಕಾಗಿ ಗಡಿಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಮಹಾರಾಷ್ಟ್ರ ಮತ್ತು ಕೇರಳ ಗಡಿ ಜಿಲ್ಲೆಗಳಲ್ಲಿ ವಿಶೇಷವಾಗಿ ಹದ್ದಿನ ಕಣ್ಣು ಇರಿಸಲಾಗಿದೆ.
ಮಹಾರಾಷ್ಟ್ರದಿಂದ ಸಂಚರಿಸುವ ವಾಹನಗಳ ಮೇಲೆ ವಿಶೇಷ ಲಕ್ಷ್ಯ ವಹಿಸಲಾಗಿದೆ. ಈ ಹಂತದಲ್ಲಿ ಕೊವಿಡ್-19 ಸೋಂಕಿನ ತಪಾಸಣೆ ನಡೆಸಿಕೊಂಡು RT-PCR ನೆಗೆಟಿವ್ ವರದಿಯನ್ನು ಸಲ್ಲಿಸುವಲ್ಲಿ ವಿಫಲರಾದ 7 ಮಂದಿ ಮಹಾರಾಷ್ಟ್ರದ ಪ್ರಯಾಣಿಕರನ್ನು ಹುಬ್ಬಳ್ಳಿಯಲ್ಲಿ ಕ್ವಾರೆಂಟೈನ್ ಕೇಂದ್ರಕ್ಕೆ ಕಳುಹಿಸಲಾಗಿದೆ.
ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಅತಿಹೆಚ್ಚು ಕೊವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆ ಈ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರು 72 ಗಂಟೆಗಳೊಳಗೆ ನಡೆಸಿದ RT-PCR ಪರೀಕ್ಷೆಯ ನೆಗೆಟಿವ್ ವರದಿಯನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮಹಾರಾಷ್ಟ್ರದೊಂದಿಗೆ ಹುಬ್ಬಳ್ಳಿ ಮತ್ತು ಧಾರವಾಡ ನಗರಗಳು ವಿಶೇಷವಾಗಿ ಹೆಚ್ಚು ನಂಟು ಬೆಸೆದುಕೊಂಡಿವೆ. ಪ್ರತಿನಿತ್ಯ ನೂರಾರು ವಾಹನಗಳು ಮಹಾರಾಷ್ಟ್ರದಿಂದಈ ಅವಳಿ ನಗರಕ್ಕೆ ಸಂಚರಿಸುತ್ತವೆ. ಇದರ ಜೊತೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಸೇರಿದಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತವೆ. ಈ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ಮಹಾರಾಷ್ಟ್ರದ ಬಸ್ಸುಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದ್ದು, ಪ್ರಯಾಣಿಕನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಪ್ರಯಾಣಿಕರ ನೆಗೆಟಿವ್ ವರದಿ ಪರೀಕ್ಷೆ:
ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಿಂದ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರಿಂದ RT-PCR ನೆಗೆಟಿವ್ ವರದಿಯನ್ನು ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಕಳೆದ ವಾರ ಮಹಾರಾಷ್ಟ್ರದಿಂದ ಆಗಮಿಸಿದ ಏಳು ಮಂದಿ ಪ್ರಯಾಣಿಕರು ನೆಗೆಟಿವ್ ವರದಿಯಲ್ಲು ಸಲ್ಲಿಸಲು ವಿಫಲರಾದ ಹಿನ್ನೆಲೆ ಅವರನ್ನು ಒಂದು ವಾರಗಳವರೆಗೂ ಅಂಜುಮನ್ ಆಸ್ಪತ್ರೆಯಲ್ಲಿ ಸಾಂಸ್ಥಿಕ ಕ್ವಾರೆಂಟೈನ್ ಗೆ ಒಳಪಡಿಸಲಾಗಿತ್ತು. ವೈದ್ಯಕೀಯ ಸೇವೆ ಒದಗಿಸುವ ಉದ್ದೇಶಕ್ಕಾಗಿ ಆಗಮಿಸುವವರಿಗೆ ಮಾತ್ರ RT-PCR ವರದಿ ಕಡ್ಡಾಯ ನಿಯಮದಿಂದ ವಿನಾಯಿತಿ ನೀಡಲಾಗಿದೆ.
ಹುಬ್ಬಳ್ಳಿ ರೈಲ್ವೆ ಮತ್ತು ವಿಮಾನ ನಿಲ್ದಾಣದಲ್ಲಿ ತಪಾಸಣೆ:
ಹುಬ್ಬಳ್ಳಿ ರೈಲ್ವೆ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಲ್ಲೂ ಕೂಡ RT-PCR ವರದಿ ಸಲ್ಲಿಕೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಅಕ್ಕಪಕ್ಕದ ಜಿಲ್ಲೆಗಳಿಂದ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಕೊವಿಡ್-19 ಸೋಂಕು ತಪಾಸಣೆ ಮತ್ತು ವರದಿಗಳ ಪರಿಶೀಲನೆಯನ್ನು ನಡೆಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಮತ್ತು ಆರೋಗ್ಯ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಯು ಪ್ರತಿಯೊಬ್ಬ ಪ್ರಯಾಣಿಕರ ಚಲನವಲನಗಳ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.
ಖಾಸಗಿ ಸಾರಿಗೆ ಬಸ್ ಮಾಲೀಕರಿಗೆ ಎಚ್ಚರಿಕೆ:
ಕೊರೊನಾವೈರಸ್ ಸೋಂಕು ತಪಾಸಣೆಯ ಋಣಾತ್ಮಕ ವರದಿ ಇಲ್ಲದ ಯಾವುದೇ ಪ್ರಯಾಣಿಕರಿಗೆ ಅನುಮತಿ ನೀಡುವಂತಿಲ್ಲ ಎಂದು ಖಾಸಗಿ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್ ಹೇಳಿದ್ದಾರೆ. ಒಂದು ವೇಳೆ ಕೊವಿಡ್-19 RT-PCR ನೆಗೆಟಿವ್ ವರದಿ ಇಲ್ಲದ ಪ್ರಯಾಣಿಕರನ್ನು ನಿಮ್ಮ ಬಸ್ಸಿನಲ್ಲಿ ಪ್ರಯಾಣಿಸಲು ಅವಕಾಶ ನೀಡಿದರೆ, ಸಾಂಕ್ರಾಮಿಕ ವಿಪತ್ತು ಕಾಯ್ದೆ ಅಡಿಯಲ್ಲಿ ಸಂಸ್ಥೆಯ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಕೊರೊನಾವೈರಸ್:
ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ 5508 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಮಹಾಮಾರಿಗೆ 151 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 13,39,96ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 63,53,328ಕ್ಕೆ ಏರಿಕೆಯಾಗಿದೆ. ಇದುವರೆಗೂ 4895 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 61,44,388ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 71,510 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ. ಇದರ ಹೊರತಾಗಿ 4,22,996 ಸೋಂಕಿತರು ಗೃಹ ದಿಗ್ಬಂಧನದಲ್ಲಿದ್ದರೆ, 2,749 ಮಂದಿ ಸಾಂಸ್ಥಿಕ ದಿಗ್ಬಂಧನದಲ್ಲಿದ್ದಾರೆ.












Click it and Unblock the Notifications