ಹುಬ್ಬಳ್ಳಿಯಲ್ಲಿ ರಾಜಕೀಯ ಹೈಡ್ರಾಮ: ಬಿಜೆಪಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ
ಹುಬ್ಬಳ್ಳಿ ಅಕ್ಟೋಬರ್ 31: ಹುಬ್ಬಳ್ಳಿಯಲ್ಲಿ 40% ಕಮಿಷನ್ ಆರೋಪ ಮಾಡಿ ಹುಬ್ಬಳ್ಳಿ ಗುತ್ತಿಗೆಗಾರರೊಬ್ಬರು ದಯಾಮರಣಕ್ಕಾಗಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
40% ಕಮಿಷನ್ ವಿರೋಧಿಸಿ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇಂದು ದೇಶಪಾಂಡೆ ನಗರದ ಭಾರತೀಯ ಜನತಾ ಪಾರ್ಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ವೇಳೆ ಏಕಾಏಕಿ ನುಗ್ಗಿದ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರನ್ನು ತಳ್ಳಿ ಹಾಕಿ 40% ಕಮಿಷನ್ ಸರ್ಕಾರ ಪೋಸ್ಟರ್ ಹರಿದು ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ್ದಾರೆ.
ದೇಶಪಾಂಡೆ ನಗರದ ಭಾರತೀಯ ಜನತಾ ಪಾರ್ಟಿ ಕಚೇರಿ ಮುಂದೆ ಈ ಹೈಡ್ರಾಮಾ ನಡೆದಿದೆ. ಭಾರತೀಯ ಜನತಾ ಪಕ್ಷದ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಸರ್ಕಾರದ ವಿರುದ್ಧ ಘೋಷಣೆ ಕೂಗಲು ಮುಂದಾದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ನಾಯಕರ ಹಾಗೂ ಕಾರ್ಯಕರ್ತರನ್ನು ತಳ್ಳಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ವೇಳೆ ಆಗಮಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.

ಕಾಂಗ್ರೆಸ್ ನಾಯಕರು ಭಾರತೀಯ ಜನತಾ ಪಕ್ಷದ ಕಾರ್ಯಾಲಯದ ಮುಂದೆ ಪ್ರತಿಭಟನೆ ಮಾಡುವುದನ್ನು ಬಿಟ್ಟು, ಕಾಂಗ್ರೆಸ್ ಕಚೇರಿ ಮುಂದೆ ಮಾಡಲಿ ಎಂದು ಭಾರತೀಯ ಜನತಾ ಪಕ್ಷದ ನಾಯಕ ಗೋಪಾಲ ಬದ್ದಿ ಆಕ್ರೋಶ ವ್ಯಕ್ತಪಡಿಸಿದರು. 40% ಕಮಿಷನ್ ಸರ್ಕಾರ ಪೋಸ್ಟರ್ ಹರಿದು ಹಾಕಿದ ಕಾಂಗ್ರೆಸ್ ಕಾರ್ಯಕರ್ತರು, ಕಾಲಿನಿಂದ ತುಳಿದು ಇದೊಂದು ಡೋಂಗಿ ಪ್ರತಿಭಟನೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕಿಡಿಕಾರಿದರು.
ಈ ಸಂದರ್ಭದಲ್ಲಿ ಸಹಸ್ರಾರ್ಜುನ ಜಯಂತಿ ಆಚರಣೆಗೆ ಬಿಜೆಪಿ ಕಚೇರಿಗೆ ಆಗಮಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಪ್ರತಿಭಟನೆಯ ಬಿಸಿ ಮುಟ್ಟಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದರು. ಆದರೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಒಟ್ಟಾರೆ ದೇಶಪಾಂಡೆ ನಗರದ ಭಾರತೀಯ ಜನತಾ ಪಾರ್ಟಿ ಕಚೇರಿ ಮುಂದೆ ರಾಜಕೀಯ ಹೈಡ್ರಾಮ ನಡೆದಿದೆ.












Click it and Unblock the Notifications