ಕಲಘಟಗಿ ಕ್ಷೇತ್ರವನ್ನು ಸಿದ್ದರಾಮಯ್ಯಗೆ ಬಿಟ್ಟು ಕೊಡುತ್ತೇನೆ ಎಂದ ಸಂತೋಷ್ ಲಾಡ್
ಹುಬ್ಬಳ್ಳಿ, ಡಿಸೆಂಬರ್ 4 :ಸಿದ್ದರಾಮಯ್ಯ ಕಲಘಟಗಿ ಕ್ಷೇತ್ರಕ್ಕೆ ಬಂದರೆ ನಾನು ಬಿಟ್ಟು ಕೊಡುತ್ತೇನೆ ಎಂದು ಮಾಜಿ ಸಚಿವ ಸಂತೋಷ್ ಲಾಡ್ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಮ್ಮ ಕ್ಷೇತ್ರ ಬಿಟ್ಟುಕೊಡುವುದಾಗಿ ಹೇಳಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ಎಲ್ಲಾ ಕಡೆಗಳಲ್ಲಿ ಕರೆಯುತ್ತಿದ್ದಾರೆ. ಹೀಗಾಗಿ ಅವರು ಕಲಘಟಗಿಗೆ ಬಂದರೂ ಸ್ವಾಗತ ಎಂದು ಸಂತೋಷ್ ಲಾಡ್ ತಿಳಿಸಿದ್ದಾರೆ.
ಸುಳ್ಳೇ.. ಬಿಜೆಪಿ ನಾಯಕರ ಮನೆ ದೇವರು: ರಾಮನಗರದಲ್ಲಿ ಸಂಸದ ಡಿ.ಕೆ.ಸುರೇಶ್ ಗಂಭೀರ ಆರೋಪ
ಕಲಘಟಗಿ ವಿಧಾನಸಭಾ ಕ್ಷೇತ್ರದ ಟಿಕೆಟ್ಗಾಗಿ ನಾಗರಾಜ್ ಛಬ್ಬಿ ಕೂಡಾ ಪ್ರಯತ್ನ ಮಾಡುತ್ತಿದ್ದಾರೆ. ನಾಗರಾಜ್ ಛಬ್ಬಿ ಕಳೆದ ಕೆಲ ವರ್ಷಗಳಿಂದಲೂ ಟಿಕೆಟ್ಗಾಗಿ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಸಮಸ್ಯೆ ಬಗೆಹರಿಸಿಕೊಳ್ಳಲು ನಮಗೇನೂ ಹೇಳಿಲ್ಲ ಎಂದರು.
ಇನ್ನು ಕ್ಷೇತ್ರದಲ್ಲಿ 4 ಸಾವಿರ ಜೋಡಿ ಸಾಮೂಹಿಕ ಮದುವೆ ಮಾಡುವ ವಿಚಾರವಾಗಿ ಮಾತನಾಡಿದ ಅವರು, ಇದು ರಾಜಕೀಯಕ್ಕಾಗಿ ಅಲ್ಲ. ಕಳೆದ ಕೆಲ ವರ್ಷಗಳಿಂದ ಮದುವೆ ಮಾಡುತ್ತಿದ್ದೇವೆ. ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾಮೂಹಿಕ ಮದುವೆಗೆ ಕರೆ ಮಾಡಿದ್ದಾರೆ ಎಂದು ಸಂತೋಷ್ ಲಾಡ್ ಹೇಳಿದರು.
ಇನ್ನು ಬಿಜೆಪಿಯಲ್ಲಿ ರೌಡಿಶೀಟರ್ಗಳು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರೌಡಿಶೀಟರ್ಗಳು ಬಿಜೆಪಿ ಸೇರ್ಪಡೆ ಸರಿಯಲ್ಲ. ಅವರು ತತ್ವ ಸಿದ್ಧಾಂತದ ಬಗ್ಗೆ ಮಾತನಾಡುತ್ತಾರೆ. ಹೀಗಿದ್ದೂ, ರೌಡಿಶೀಟರ್ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಯಾವ ಲೆಕ್ಕ ಎಂದು ಸಂತೋಷ್ ಲಾಡ್ ಪ್ರಶ್ನಿಸಿದ್ದಾರೆ.
ಇನ್ನು ಈ ಹಿಂದೆ ಕಾಂಗ್ರೆಸ್ ನಾಯಕ ಸಂತೋಷ ಲಾಡ್ , ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಬೇಡ. ಅವರು ಚುನಾವಣಾ ಸಂದರ್ಭದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕಾಗಿದೆ. ಸಿದ್ದರಾಮಯ್ಯನವರು ರಾಜ್ಯ ನಾಯಕರು ಅವರು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರು ಗೆಲ್ಲುತ್ತಾರೆ. ಪ್ರಸ್ತುತ ದಿನಗಳಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆ ಅಗತ್ಯವಿದೆ. ಆದ್ದರಿಂದ ಸಿದ್ದರಾಮಯ್ಯ ಅವರು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸದೆ ಪಕ್ಷ ಸಂಘಟನೆ ಮಾಡುವುದು ಒಳ್ಳೆಯದು. ಸಿದ್ದರಾಮಯ್ಯ ಒಂದೇ ಕ್ಷೇತ್ರಕ್ಕೆ ಸೀಮೀತ ಆಗುವುದು ಬೇಡ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯಾದ್ಯಂತ ಪ್ರವಾಸ ಮಾಡಬೇಕು. ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಎಂದು ಒತ್ತಾಯಿಸಿದ್ದರು. ಈ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಚುನಾವಣೆಗೆ ನಿಲ್ಲಬಾರದು ಎನ್ನುವುದು ನನ್ನ ವೈಯಕ್ತಿಕ ಹೇಳಿಕೆ ಇದಕ್ಕೆ ನಾನು ಬದ್ಧ ಎಂದರು.