ಖಾಸಗಿ ರಂಗದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು: ಹೆಚ್ಚುತ್ತಿರುವ ಗೊಂದಲದ ಬಗ್ಗೆ ಎಂಬಿ ಪಾಟೀಲ್ ಹೇಳಿದ್ದೇನು
ಬೆಂಗಳೂರು, ಜುಲೈ 17: ಖಾಸಗಿ ವಲಯದಲ್ಲಿ ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವುದನ್ನು ಕಡ್ಡಾಯಗೊಳಿಸಿ ಮಸೂದೆಯನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ. ಈ ಮಸೂದೆಗೆ ಕೆಲವು ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ಕೈಗಾರಿಕೆ ವಲಯದಲ್ಲಿನ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ವಿರೋಧ ಹಾಗೂ ಗೊಂದಲಗಳಿಗೆ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ತೆರೆ ಎಳೆದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ (ಎಕ್ಸ್) ಮಾಡಿರುವ ಅವರು, ಖಾಸಗಿ ಉದ್ಯಮಗಳಲ್ಲಿ ಶೇಕಡಾ 100 ಕನ್ನಡಗಿರ ನೇಮಕಾತಿ ಬಗ್ಗೆ ಸಿದ್ದರಾಮಯ್ಯರ ಹೇಳಿಕೆ ಪೋಸ್ಟ್ ಮಾಡಿದ್ದಾರೆ. ಖಾಸಗಿ ಉದ್ಯಮಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು. ಇದೇ ಸಂದರ್ಭದಲ್ಲಿ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಸಂಬಂಧ ರಾಜ್ಯ ಸರ್ಕಾರ ವಿಧೇಯಕಕ್ಕೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ-ಬಿಟಿ, ಕಾನೂನು ಮತ್ತು ಕಾರ್ಮಿಕ ಸಚಿವರುಗಳ ಜೊತೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು ಎಂದರು.
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ತಯಾರಿಕಾ ವಲಯ ಮತ್ತು ಕೈಗಾರಿಕಾ ಕ್ರಾಂತಿಯ ಉಜ್ವಲ ಅವಕಾಶಗಳನ್ನು ನಾವು ಕಳೆದುಕೊಳ್ಳುವಂತಿಲ್ಲ ಎಂದು ಅವರು ಪ್ರತಿಪಾದಿಸಿದರು.

ಉದ್ಯಮಿಗಳ ಹಿತಾಸಕ್ತಿ ಸಹ ಕಾಯುತ್ತೇವೆ: ಚರ್ಚೆ ಮಾಡುತ್ತೇವೆ
ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಹಾಗೆಯೇ ಉದ್ಯಮ ವಲಯದವರ ಹಿತಾಸಕ್ತಿಗೂ ಧಕ್ಕೆಯಾಗದಂತೆ ನಿಗಾ ವಹಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಎಲ್ಲರ ಜೊತೆಗೂ ಮಾತುಕತೆ ನಡೆಸಲಾಗುವುದು. ಈ ವಿಷಯದಲ್ಲಿ ಯಾವುದೇ ಆತಂಕ ಬೇಕಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕವು ಪುರೋಗಾಮಿ ರಾಜ್ಯವಾಗಿದೆ. 'ಗ್ಲೋಬಲ್ ಚೈನಾ ಒನ್' ನೀತಿಯಿಂದ ಒದಗಿ ಬಂದಿರುವ ಸದವಕಾಶವನ್ನು ನಾವು ಕಳೆದುಕೊಳ್ಳುವಂತಿಲ್ಲ. ಇದು ಶತಮಾನಕ್ಕೊಮ್ಮೆ ಒದಗಿ ಬರುವ ಅವಕಾಶ ಎಂದು ಪಾಟೀಲ ಬಣ್ಣಿಸಿದ್ದಾರೆ.
ಕೌಶಲ ಇಲ್ಲದ ಕನ್ನಡಿಗ ಉದ್ಯೋಗಿಗಳನ್ನು ತರಬೇತಿ ಮೂಲಕ ಸಜ್ಜುಗೊಳಿಸುವ ಕೆಲಸವನ್ನೂ ಸರ್ಕಾರ ಮಾಡಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ರಾಜ್ಯದಲ್ಲಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ವಿಚಾರವಾಗಿ ಉದ್ಯಮಿಪತಿಗಳ ವಿರೋಧಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ತಾಂತ್ರಿಕ ಸಮಸ್ಯೆಗಳನ್ನು ನಾವು ಕೂಡ ಅರ್ಥ ಮಾಡಿಕೊಳ್ಳುತ್ತೇವೆ. ಆದರೆ ವಿರೋಧ ಮಾಡಿದ ಉದ್ಯಮಿಗಳು ಕೂಡ ರಾಜ್ಯದಿಂದಲೇ ಬೆಳೆದಿರುವವರು ಎಂದರು.
ಕನ್ನಡಿಗರಿಗೆ ಕರ್ನಾಟಕದಲ್ಲಿ 50 ಶೇ ಮೀಸಲಾತಿ ನೀಡಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡ ನಿರ್ಧಾರಕ್ಕೆ ಮೋಹನ್ ದಾಸ್ ಪೈ ಹಾಗೂ ಕಿರಣ್ ಮಜುಂದಾರ್ ಶಾ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಪ್ರತಿಕ್ರಿಯೆ ನೀಡಿ ತಾಂತ್ರಿಕತೆ ವಿಚಾರ ಬಂದಾಗ ಅಗತ್ಯವಿದ್ದ ಕಡೆ ರಿಯಾಯಿತಿ ನೀಡುತ್ತೇವೆ ಎಂದು ಹೇಳಿದರು.












Click it and Unblock the Notifications