Airport: ಕರ್ನಾಟಕದ ಈ ವಿಮಾನದ ನಿಲ್ದಾಣದಲ್ಲಿ ಸ್ವಚ್ಛತೆ ಕೊರತೆ: ಸಿ.ಎಂ ಕಚೇರಿಯಿಂದ ವರದಿ
ಕರ್ನಾಟಕದ ಪ್ರಮುಖ ವಿಮಾನ ನಿಲ್ದಾಣದ ಬಗ್ಗೆ ಗಂಭೀರ ಆರೋಪವೊಂದು ಕೇಳಿ ಬಂದಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಿಂದಲೇ ಪರಿಶೀಲನೆ ನಡೆಸಲಾಗಿದೆ. ದೇಶದ ಪ್ರಮುಖ ನಿಲ್ದಾಣಗಳಿಗೆ ಪೈಪೋಟಿ ನೀಡುವ ಹಂತಕ್ಕೆ ಕರ್ನಾಟಕದ ವಿಮಾನ ನಿಲ್ದಾಣಗಳು ಇವೆ. ಅದರಲ್ಲೂ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಈಗಾಗಲೇ ಹಲವು ದಾಖಲೆಯನ್ನು ಸೃಷ್ಟಿ ಮಾಡಿದೆ. ಇದೀಗ ಉತ್ತರ ಕರ್ನಾಟಕದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಒಂದಾಗಿರುವ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಆರೋಪ ಕೇಳಿ ಬಂದಿದ್ದು, ಇದೀಗ ಅದಕ್ಕೆ ಸ್ಪಷ್ಟನೆ ನೀಡಲಾಗಿದೆ.
ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ವಿಮಾನ ನಿಲ್ದಾಣವು ಅವ್ಯವಸ್ಥೆಗಳಿಂದ ಕೂಡಿದೆ. ಇಲ್ಲಿನ ಶೌಚಾಲಯಗಳು ದುರ್ನಾತ ಬೀರುತ್ತಿವೆ ಹಾಗೂ ಮನಬಂದಂತೆ ಪಾರ್ಕಿಂಗ್ ಶುಲ್ಕಗಳನ್ನು ವಿಧಿಸಲಾಗುತ್ತಿದೆ. ಅಲ್ಲದೆ ಇದರಿಂದ ಪ್ರಯಾಣಿಕರಿಗೆ ನಿರಂತರ ಸಂಕಷ್ಟ ಎದುರಾಗಿದೆ ಎಂದು ವರದಿ ಪ್ರಕಟವಾಗಿದೆ ಎನ್ನಲಾಗಿದೆ. ಈ ವರದಿಯನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದ್ದರು. ತಕ್ಷಣ ಸ್ಪಂದಿಸಿದ ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರು ಮಾಧ್ಯಮ ವರದಿಯಲ್ಲಿ ಉಲ್ಲೇಖಗೊಂಡ ಸಮಸ್ಯೆಗಳ ಕುರಿತು ಪರಿಶೀಲಿಸಿ ವರದಿಯನ್ನು ನೀಡಿದ್ದಾರೆ ಎಂದು ಹೇಳಲಾಗಿದೆ.

ಈ ರೀತಿಯ ಸಮಸ್ಯೆಗಳ ಆರೋಪಗಳು ಸಂಪೂರ್ಣ ಸುಳ್ಳಾಗಿದ್ದು, ವಿಮಾನ ನಿಲ್ದಾಣದ ವರ್ಚಸ್ಸಿನ ಮೇಲೆ ಧಕ್ಕೆ ತರುವಂತಾಗಿದೆ. ವಿಮಾನ ನಿಲ್ದಾಣದ ಸೌಂದರ್ಯೀಕರಣಕ್ಕೆ ಒತ್ತು ನೀಡಲಾಗಿದೆ. ಶೌಚಾಲಯಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಲಾಗುತ್ತಿದೆ. ಸ್ವಯಂ ಚಾಲಿತ ಏರ್ ಫ್ರೆಶ್ನರ್‌ಗಳನ್ನು ಅಳವಡಿಸಲಾಗಿದೆ. ಶೌಚಾಲಯದ ಸ್ವಚ್ಛತೆ ಕುರಿತಂತೆ ಯಾವುದೇ ದೂರುಗಳು ದಾಖಲಾಗಿಲ್ಲ. ಇನ್ನು ವಾಹನ ನಿಲುಗಡೆಗೆ ಸಂಬಂಧಿಸಿ ನಿರ್ವಹಣೆ ಮಾಡುತ್ತಿದ್ದ ಏಜೆನ್ಸಿಯ ಅವಧಿ ನವೆಂಬರ್ 23ಕ್ಕೆ ಕೊನೆಯಾಗಿದೆ.
ಪ್ರಸ್ತುತ ವಿಮಾನ ನಿಲ್ದಾಣದ ಸಿಬ್ಬಂದಿಯೇ ನಿರ್ವಹಿಸುತ್ತಿದ್ದಾರೆ. ನಿಲುಗಡೆ ಶುಲ್ಕವನ್ನು ಪಡೆಯುತ್ತಿಲ್ಲ. ಈ ಕುರಿತಾಗಿ ಯಾವುದೇ ದೂರುಗಳು ಕೇಳಿ ಬಂದಿಲ್ಲ. ಪ್ರಯಾಣಿಕರಿಗೆ ಅನುಕೂಲಕರ ವಾತಾವರಣವನ್ನು ಕಲ್ಪಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನಗಳನ್ನು ವಿಮಾನ ನಿಲ್ದಾಣ ಮಾಡುತ್ತಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕರಾದ ರೂಪೇಶ್ ಕುಮಾರ್ ತಿಳಿಸಿದ್ದಾರೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಧಾರವಾಡ ವಿಭಾಗವು ಪ್ರಕಟಣೆಯಲ್ಲಿ ತಿಳಿಸಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣ ಅಭಿವೃದ್ಧಿ: ಇನ್ನು ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕೆಲವು ದಿನಗಳ ಹಿಂದೆ ಮಾಹಿತಿ ನೀಡಿದ್ದರು. ಈ ನಿಟ್ಟಿನಲ್ಲಿ ಕೆಲಸಗಳು ನಡೆದಿವೆ ಎಂದು ಹೇಳಲಾಗಿದೆ. ಇನ್ನು ಉತ್ತರ ಕರ್ನಾಟಕದ ಭಾಗದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವು ಪ್ರಮುಖವಾಗಿದೆ. ಬೆಂಗಳೂರು ಹಾಗೂ ದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಿಗೆ ಇಲ್ಲಿದ ವಿಮಾನಗಳು ಸಂಚರಿಸುತ್ತವೆ.

ಈ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಕೇಳಿ ಬಂದಿದ್ದ ಆರೋಪಗಳಿಗೆ ಸಂಬಂಧಿಸಿದಂತೆ ಇದೀಗ ಪ್ರತಿಕ್ರಿಯೆ ನೀಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಆ ರೀತಿಯ ಯಾವುದೇ ಸಮಸ್ಯೆಗಳು ಇಲ್ಲ ಎಂದು ವಿಮಾನ ನಿಲ್ದಾಣದ ನಿರ್ದೇಶಕರು ಮಾಹಿತಿ ಹಂಚಿಕೊಂಡಿದ್ದಾರೆ.












Click it and Unblock the Notifications