Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
ಹುಬ್ಬಳ್ಳಿ, ಏಪ್ರಿಲ್ 19: ಹುಬ್ಬಳ್ಳಿಯಲ್ಲಿ ನಡೆದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಕೊಲೆ ಆರೋಪಿ ಫಯಾಜ್ ಕಠಿಣ ಶಿಕ್ಷೆಯಾಗಬೇಕು ಎಂದು ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಪ್ರತಿಕ್ರಿಯೆ ಬಗ್ಗೆ ನೇಹಾ ತಂದೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಗಳ ಸಾವಿನ ನ್ಯಾಯಕ್ಕಾಗಿ ಆಗ್ರಹಿಸುತ್ತಿರುವ ಅವರು, " ಇದು ವೈಯಕ್ತಿಕ ಕಾರಣಕ್ಕೆ ಆಗಿರುವ ಕೊಲೆ ಅಲ್ಲ. ನಾನು ಕಾರ್ಪೊರೇಟರ್, ನನಗೆ ಹೀಗಾದರೆ ಬೇರೆಯವರ ಕಥೆ ಏನು? ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಕೆ ಹೀಗೆ ಹೇಳಿಕೆ ನೀಡುತ್ತಿದ್ದಾರೆ. ನಮಗೂ ಅವರ ಕುಟುಂಬಕ್ಕೂ ಏನು ಸಂಬಂಧ? ತನಿಖೆ ದಿಕ್ಕು ತಪ್ಪಿಸಬೇಡಿ, ಇದು ವೈಯಕ್ತಿಕ ಕಾರಣಕ್ಕೆ ಆದ ಹತ್ಯೆಯಲ್ಲ" ಎಂದು ನೇಹಾ ತಂದೆ ನಿರಂಜನ್ ಹಿರೇಮಠ ಸ್ಪಷ್ಟವಾಗಿ ವಿವರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, 'ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರುವಂತದ್ದು. ಕಾನೂನು ಸುವ್ಯವಸ್ಥೆ ಕರ್ನಾಟಕದಲ್ಲಿ ಚೆನ್ನಾಗಿದೆ. ಇದು ಲವ್ ಜಿಹಾದ್ ಅಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ. ಯಾವುದೇ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಕೆಲಸ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತೆ ಎಂದರು.
ಪ್ರಕರಣದ ಹಿನ್ನೆ ಏನು..?
ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ (24) ಕೆಎಲ್‌ಇ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದಳು. ಆರೋಪಿ ಫಯಾಜ್ ಅದೇ ಕಾಲೇಜಿನ ಹಳೇ ವಿದ್ಯಾರ್ಥಿ. ಇಬ್ಬರು ಬಿಸಿಎ ಓದುವಾಗ ಸಹಪಾಠಿಗಳಾಗಿದ್ದರಂತೆ. ಈತ ಬಿಸಿಎನಲ್ಲಿ ಅನುತ್ತೀರ್ಣನಾಗಿದ್ದನಂತೆ. ಆದರೆ ನೇಹಾ ಉತ್ತೀರ್ಣಳಾಗಿ ಎಂಸಿಎ ಮಾಡುತ್ತಿದ್ದಳು.

ಗುರುವಾರ ಸಂಜೆ ತರಗತಿ ಮುಗಿಸಿಕೊಂಡು ನೇಹಾ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಬಂದ ಹಂತಕ ನೇಹಾಳಿಗೆ 9 ಬಾರಿ ಚಾಕು ಇರಿದು ಕೊಲೆ ಮಾಡಿದ್ದಾನೆ. ಪ್ರೀತಿಸಲು ನಿರಾಕರಿಸಿದ ನೇಹಾಳನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ತಕ್ಷಣ ಅಲರ್ಟ್ ಆದ ಪೊಲೀಸರು ಕಿಮ್ಸ್ ಹಿಂಬದಿಯಲ್ಲಿ ಅವಿತುಕೊಂಡಿದ್ದ ಫಯಾಜ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ನೇಹಾ ಹತ್ಯೆ ಪ್ರಕರಣ ಸಂಬಂಧ ಆರೋಪಿ ಸದ್ಯ ಫಯಾಜ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.












Click it and Unblock the Notifications