ಬಿಜೆಪಿಗೆ ಗುಡ್ ಬೈ ಹೇಳಿದ ಜಗದೀಶ್ ಶೆಟ್ಟರ್: ಹುಬ್ಬಳ್ಳಿಯಲ್ಲಿ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಗೌಪ್ಯ ಸಭೆ
ಹುಬ್ಬಳ್ಳಿ, ಏಪ್ರಿಲ್, 16: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡುವಲ್ಲಿ ನಿರಾಕರಣೆ ಮಾಡಿತ್ತು. ಇದರಿಂದ ಅಸಮಾಧಾನಗೊಂಡ ಶೆಟ್ಟರ್ ಕೊನೆಗೂ ರಾಜೀನಾಮೆ ನೀಡುವ ಮೂಲಕ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಅಲ್ಲದೇ ನಾನು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡೇ ತೀರುತ್ತೇನೆ ಎಂದು ಪಣತೊಟ್ಟಿದ್ದಾರೆ. ಹಾಗೆಯೆ ಮತ್ತೊಂದೆಡೆ ಇವೆಲ್ಲ ಬೆಳವಣಿಗೆಗಳ ನಡುವೆ ಪ್ರಲ್ಹಾದ್ ಜೋಶಿ ಅವರು ದಿಢೀರ್ ಗೌಪ್ಯ ಸಭೆ ಮಾಡಲು ಮುಂದಾಗಿದ್ದಾರೆ.
ಪಕ್ಷಕ್ಕಾಗಿ ಸಾಕಷ್ಟು ದುಡಿದ ಶೆಟ್ಟರ್ ಅವರಿಗೆ ಈ ಬಾರಿ ಬಿಜೆಪಿ ಹೈಕಮಾಂಡ್ ಮಾತ್ರ ಶೆಟ್ಟರ್ ಅವರಿಗೆ ಟಿಕೆಟ್ ನೀಡುವಲ್ಲಿ ವಿಫಲವಾಗಿದೆ. ಅದಕ್ಕಾಗಿ ಶೆಟ್ಟರ್ ಭಾನುವಾರ (ಏಪ್ರಿಲ್ 16) ಶಿರಸಿಗೆ ತೆರಳಿ ತಮ್ಮ ಶಾಸಕ ಸ್ಥಾನ ಮತ್ತು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆಗಳು ಆದ ತಕ್ಷಣ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನೇತೃತ್ವದಲ್ಲಿ ಗೋಕುಲ ರಸ್ತೆಯಲ್ಲಿರುವ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು, ಪಾಲಿಕೆ ಸದಸ್ಯರು ಒಗ್ಗೂಡಿ ಗೌಪ್ಯ ಸಭೆ ಮಾಡಿದ್ದಾರೆ.

ಅಲ್ಲದೆ ಶೆಟ್ಟರ್ ಅವರಿಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ನೀಡದ ಬಿಜೆಪಿ ಪಕ್ಷ, ಮುಂದಿನ ದಿನಗಳಲ್ಲಿ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಶೆಟ್ಟರ್ ಅಭಿಮಾನಿಗಳು ಕೂಡ ಎಚ್ಚರಿಕೆ ನೀಡಿದ್ದಾರೆ.
ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ
ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೆ ಬಿಜೆಪಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಬದಲಾವಣೆಗಳು ಆಗುತ್ತಲೇ ಇವೆ. ಇದೀಗ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿರುವ ಹಿನ್ನೆಲೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕುತೂಹಲ ಮೂಡಿಸಿದ್ದಾರೆ.
ಇನ್ನು ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿ ಇರುವ ತಮ್ಮ ನಿವಾಸದಲ್ಲಿ ವರಿಷ್ಠರ ಜೊತೆ ಶನಿವಾರ ರಾತ್ರಿ ನಡೆಸಿದ ಮಾತುಕತೆ ವಿಫಲವಾದ ನಂತರ ಸುದ್ದಿಗೋಷ್ಠಿಯಲ್ಲಿ ಜಗದೀಶ್ ಶೆಟ್ಟರ್ ಈ ನಿರ್ಧಾರವನ್ನು ಪ್ರಕಟಿಸಿ ಬಿಜೆಪಿಗೆ ಶಾಕ್ ನೀಡಿದ್ದಾರೆ. ಹಾಗೆಯೇ ಅವರು ಭಾನುವಾರ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.
ಇತ್ತೀಚೆಗಷ್ಟೇ ಅವರು ರಾಜೀನಾಮೆ ನೀಡಿದ ಮೇಲೆ ಮುಂದಿನ ನಿಲುವನ್ನು ತಿಳಿಸುವುದಾಗಿ ಹೇಳಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಜಗದೀಶ್ ಶೆಟ್ಟರ್ ಸಿಎಂ ರೇಸ್‌ಗೆ ಬರುತ್ತಾರೆ ಅನ್ನುವ ಭಯದ ವಾತಾವರಣವಿದೆ ಎನ್ನುವ ಮಾತುಗಳು ಕೂಡ ಕೇಳಿಬಂದಿದ್ದವು. ಹೀಗೆ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ನಾನು ಸ್ಪರ್ಧೆ ಮಾಡುವುದು ನಿಶ್ಚಿತವಾಗಿದೆ. ಪ್ರಮುಖರ ಅಭಿಪ್ರಾಯವನ್ನು ಸಂಗ್ರಹಿಸಿದ ನಂತರ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇನೆ ಎಂದು ಹೇಳಿದ್ದರು.
ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಶನಿವಾರ ರಾತ್ರಿ ಜಗದೀಶ್ ಶೆಟ್ಟರ್ ಅವರ ಮನವೊಲಿಸುವ ಪ್ರಯತ್ನವನ್ನು ಮಾಡಿದ್ದರು. ಆದರೆ ಇದಕ್ಕೆ ಸಮ್ಮತಿ ನೀಡದ ಶೆಟ್ಟರ್ ಕೊನೆಗೂ ರಾಜೀನಾಮೆ ನೀಡುವ ಮೂಲಕ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.












Click it and Unblock the Notifications