ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ: ಬಿಜೆಪಿಯಲ್ಲೇ ಇರುತ್ತೇನೆ ಎಂದ ಪ್ರದೀಪ್ ಶೆಟ್ಟರ್
ಹುಬ್ಬಳ್ಳಿ, ಏಪ್ರಿಲ್ 17: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಘೋಷಣೆ ವಿಳಂಬವಾದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಸುಮಾರು ಮೂವತ್ತಕ್ಕೂ ಹೆಚ್ಚು ವರ್ಷಗಳ ಕಾಲ ಬಿಜೆಪಿಯಲ್ಲಿ ಸೇವೆ ಸಲ್ಲಿಸಿದ್ದ ಜಗದೀಶ್ ಶೆಟ್ಟರ್ ಸದ್ಯ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದ್ದು, ಜಗದೀಶ್ ಶೆಟ್ಟರ್‌ಗೆ ಟಿಕೆಟ್ ಘೋಷಣೆ ಮಾಡಿರಲಿಲ್ಲ. ಈ ಬಗ್ಗೆ ಹೈಮಾಂಡ್ ಜೊತೆ ಸಭೆ ನಡೆಸಿದ್ದ ಜಗದೀಶ್ ಶೆಟ್ಟರ್ ಕೊನೆಗೂ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಜಗದೀಶ್ ಶೆಟ್ಟರ್ ನಿರ್ಧಾರದ ಬಗ್ಗೆ ಸಹೋದರ ಎಂಎಲ್‌ಸಿ ಪ್ರದೀಪ್ ಶೆಟ್ಟರ್ ಮಾತನಾಡಿದ್ದು, 'ನಾನು ಭಾರತೀಯ ಜನತಾ ಪಕ್ಷದಲ್ಲಿಯೇ ಇರುತ್ತೇನೆ. ಅವರ ರಾಜಕೀಯ ನಿರ್ಧಾರವೇ ಬೇರೆ, ನಮ್ಮ ವೈಯಕ್ತಿಕ ಸಂಬಂಧವೇ ಬೇರೆ. ನಾನು ದಿನಾ ಅವರ ಮನೆಗೆ ಬರುತ್ತೇನೆ. ಊಟ ಮಾಡಿ ಹೋಗುತ್ತೇನೆ. ಆದರೆ ವೈಯಕ್ತಿಕ ಬೇರೆ ಪಕ್ಷವೇ ಬೇರೆ' ಎಂದಿದ್ದಾರೆ.
ನಮ್ಮ ನಿಲುವು ನಾನು ಬಿಜೆಪಿಯಲ್ಲಿ ಇರುತ್ತೇನೆ. ಆದರೆ ನನಗೆ. ಕಾಂಗ್ರೆಸ್‌ನವರು ಹಾಗೂ ಜೆಡಿಎಸ್‌ನವರು ಆಹ್ವಾನ ಕೊಟ್ಟಿದ್ದಾರೆ. ಬೇರೆ ಪಕ್ಷಗಳಿಗೆ ಹೋಗುವುದು ಅದು ಜಗದೀಶ್ ಶೆಟ್ಟರ್ ಅವರಿಗೆ ಬಿಟ್ಟ ನಿರ್ಧಾರ. ಈ ಬಗ್ಗೆ ನಾನು ಇನ್ನೂ ಅವರ ಜೊತೆ ಮಾತನಾಡಿಲ್ಲ. ಆದರೆ ನಾನು ಬಿಜೆಪಿಯಲ್ಲೇ ಇರುತ್ತೇನೆ ಎಂದು ತಮ್ಮ ನಿರ್ಧಾರ ಸ್ಪಷ್ಟಪಡಿಸಿದ್ದಾರೆ.

ಇನ್ನು ಈಗಾಗಲೇ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದಾರೆ. ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಪಕ್ಷ ಟಿಕೆಟ್ ನೀಡುವಲ್ಲಿ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 16 ಸದಸ್ಯರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಶನಿವಾರ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಪಕ್ಷದ 16 ಸದಸ್ಯರು ರಾಜೀನಾಮೆ ಪತ್ರ ಬರೆದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಸಲ್ಲಿಸಿದ್ದರು.
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ
ಇನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೋಮವಾರ ಬೆಳಗ್ಗೆ ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದರು. ಕಾಂಗ್ರೆಸ್ ಶಾಲು ಹಾಕಿ, ಧ್ವಜ ನೀಡುವ ಮೂಲಕ ಕೆ. ಸಿ. ವೇಣುಗೋಪಾಲ್ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು. ಅಧೀಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.












Click it and Unblock the Notifications