Neha Murder Case: ವೈಯಕ್ತಿಕ ಕಾರಣಕ್ಕೆ ವಿದ್ಯಾರ್ಥಿನಿ ನೇಹಾ ಕೊಲೆ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು/ಹುಬ್ಬಳ್ಳಿ, ಏಪ್ರಿಲ್. 19: ಹುಬ್ಬಳ್ಳಿಯ ತನ್ನ ಕಾಲೇಜು ಕ್ಯಾಂಪಸ್‌ನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್‌ನ ಮಗಳನ್ನು ಆಕೆಯ ಮಾಜಿ ಸಹಪಾಠಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಆರೋಪಿ ಫಯಾಜ್ (23)ನನ್ನು ಬಂಧಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದರ ಬೆನ್ನಲ್ಲೇ ಘಟನೆಗೆ ರಾಜಕೀಯ ಬಣ್ಣ ಮತ್ತು ಲವ್ ಜಿಹಾದ್ ಬಣ್ಣ ಮೆತ್ತಿಕೊಂಡಿದೆ. ಬಿಜೆಪಿ ನಾಯಕರು ಘಟನೆಯನ್ನು ಲವ್ ಜಿಹಾದ್ ಆಯಾಮದಲ್ಲೇ ನೋಡಬೇಕು ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಯ್ಯ ಈ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿದೆ ಎಂದು ಹೇಳಿಕೆ ನೀಡಿದ್ದಾರೆ.

ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆ!
ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದೀರ್ಘ ಚರ್ಚೆ ನಡೆಸಿದ್ದರು. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಮಾಧ್ಯಮಗಳ ಜೊತೆಗೆ ಘಟನೆ ಬಗ್ಗೆ ಮಾತನಾಡಿರುವ ಸಿಎಂ ಸಿದ್ದಾರಾಮಯ್ಯ, "ಕೊಲೆಯಾಗಿರುವುದು ವೈಯಕ್ತಿಕ ಕಾರಣಕ್ಕೆ ಆಗಿರುವಂತದ್ದು. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ. ಯಾವುದೇ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಕೆಲಸ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತೆ. ಇದು ಲವ್ ಜಿಹಾದ್ ಅಲ್ಲ" ಎಂದಿದ್ದಾರೆ.
ಇನ್ನು, ಘಟನೆ ಬಗ್ಗೆ ಟ್ವೀಟ್ ಮಾಡಿದ್ದ ಅವರು, "ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ" ಎಂದಿದ್ದರು.
"ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲೀ ಅಥವಾ ಸಮಾಜದ ಶಾಂತಿ ಕದಡುವ ಪ್ರಯತ್ನಕ್ಕೆ ಮುಂದಾಗಬಾರದು. ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಕರ್ತವ್ಯ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಕ್ತಿಮೀರಿ ಶ್ರಮಿಸಲಿದೆ" ಎಂದು ತಿಳಿಸಿದ್ದರು.
ನೇಹಾ, ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಅವರ ಪುತ್ರಿ, ಬಿವಿಬಿ ಕಾಲೇಜಿನಲ್ಲಿ (ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯ) ಮಾಸ್ಟರ್ಸ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (ಎಂಸಿಎ) ಮೊದಲ ವರ್ಷ ವ್ಯಾಸಂಗ ಮಾಡುತ್ತಿದ್ದರು. ಆರೋಪಿ ಫಯಾಜ್ ಪದೇ ಪದೇ ನೇಹಾಗೆ ಚಾಕುವಿನಿಂದ ಪದೇ ಪದೇ ಇರಿದಿರುವುದು ಕ್ಯಾಂಪಸ್‌ನಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.












Click it and Unblock the Notifications