Protest for Reservation: ಅಕ್ಟೋಬರ್ 16ರಂದು ರಾಜ್ಯದಲ್ಲಿ ಬೃಹತ್ ಪ್ರತಿಭಟನೆ
ಹುಬ್ಬಳ್ಳಿ, ಸೆಪ್ಟಂಬರ್ 29: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಬೇಕೆಂಬ ಕೂಗು ಶುರುವಾಗಿದೆ. ರಾಜ್ಯ ಸರ್ಕಾರ ವಿಳಂಬ ಮಾಡದೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 16 ರಂದು ರಾಜ್ಯದ ಜಿಲ್ಲೆಗಳ ಆಯಾ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರಮಾಣದ ಹೋರಾಟ ಹಮ್ಮಿಕೊಳ್ಳಲಾಗಿದೆ.
ಹುಬ್ಬಳ್ಳಿಯಲ್ಲಿ ಭಾನುವಾರ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಬೆಳಗಾವಿ ವಿಭಾಗ ಮಟ್ಟದ ಪದಾಧಿಕಾರಿಗಳು, ಸಮಾಜದ ಮುಖಂಡರ ಸಭೆ ನಡೆಯಿತು. ಬಳಿಕ ಸಮಿತಿಯ ಅಧ್ಯಕ್ಷ ಮುತ್ತು ಬನ್ನೂರು ಮಾಹಿತಿ ನೀಡಿದರು.

ಒಳ ಮೀಸಲಾತಿಯ ಜಾರಿ ವಿಚಾರ ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಅನೇಕ ವರ್ಷಗಳ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರಕ್ಕೆ ಅವರು ಮನವಿ ಮಾಡಿದರು.
ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಿ
ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ನೀಡುವಂತೆ ಆಗ್ರಹಿಸಿ ದಶಕದಿಂದ ಹೋರಾಟ ಮಾಡಿದ್ದರ ಫಲವಾಗಿ ಹಿಂದಿನ ಬಿಜೆಪಿ ಸರ್ಕಾರ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಸ್ವೀಕರಿಸಿ ಜೆ.ಮಾಧುಸ್ವಾಮಿ ನೇತೃತ್ವದ ವರದಿಯನ್ನು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡಿತ್ತು.
ಒಳ ಮೀಸಲಾತಿ ಪರ ಇತ್ತೀಚೆಗೆ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುವುದು ರಾಜ್ಯ ಸರ್ಕಾರಕ್ಕೆ ಅವಕಾಶ ಸಿಕ್ಕಿದೆ ಎಂದು ತಿಳಿಸಿ ಹೇಳಿದರು.
101 ಪರಿಶಿಷ್ಟ ಜಾತಿಗಳಿಗೆ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಿಲ್ಲ. ಹೀಗಾಗಿ ಒಳ ಮೀಸಲು ಜಾರಿಗೆ ಮೂರು ದಶಕದಿಂದ ಹೋರಾಟ ಮಾಡುತ್ತಿದ್ದೇವೆ. ಸುಪ್ರೀಂ ಕೋರ್ಟ್ ಇದಕ್ಕೆ ಅನುಮತಿ ನೀಡಿದೆ. ಆದರೂ ರಾಜ್ಯದಲ್ಲಿ ಜಾರಿಗೆ ಪ್ರಯತ್ನಗಳು ನಡೆಯುತ್ತಿಲ್ಲ. ಈ ಮೂಲಕ ಅರ್ಹರಿಗೆ ಮತ್ತೆ ಅನ್ಯಾಯ ಮಾಡಲಾಗುತ್ತಿದೆ. ಸಂವಿಧಾನ ಮತ್ತು ಸವೋರ್ಚ್ಛ ನ್ಯಾಯಾಲಯದ ತೀರ್ಪಿಗೆ ಅಗೌರವ ತೋರುತ್ತಿದೆ. ಪರಿಶಿಷ್ಟರನ್ನು ತುಳಿವ ಕೆಲಸ ಮಾಡುತ್ತಿದೆ ಎಂದು ಸರ್ಕಾರದ ವಿಳಂಬ ಧೋರಣೆಯನ್ನು ಖಂಡಿಸಿದರು.
ಹೋರಾಟ ಸಮಿತಿ ಬೇಡಿಕೆಗಳು ಏನೇನು?
ಸುಪ್ರೀಂ ಕೋರ್ಟ್ ತೀರ್ಪಿನಂತೆ ಪಜಾಗಳ ಒಳ ಮೀಸಲಾತಿ ಜಾರಿ ಮಾಡಬೇಕು. 2023 ಮತ್ತು 25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅನುದಾನ ದುರ್ಬಳಕೆ ಆಗಿದ್ದನ್ನು, ವಾಪಸ್ ನೀಡಬೇಕು. SC ST ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ವಿದ್ಯಾರ್ಥಿ ವೇತನ ನೀಡಬೇಕು. ಒಳ ಮೀಸಲು ಹಂಚಿಕೆ ಆಗುವವರೆಗೆ ರಾಜ್ಯ, ಕೇಂದ್ರದ ನೇಮಕಾತಿ ಪ್ರಕ್ರಿಯೆ ನಿಲ್ಲಿಸಬೇಕು ಎಂದು ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.
ಖಾಸಗಿ ಉದ್ಯೋಗ, ಗುತ್ತಿಗೆ ಪದ್ಧತಿಯಲ್ಲೂ ಎಸ್‌ಸಿ ಎಸ್‌ಟಿ ಮೀಸಲಾತಿ ಕಲ್ಪಿಸಿ. ಕೇಂದ್ರ ಸರ್ಕಾರವೂ ಎಸ್‌ಸಿ ಎಸ್‌ಟಿ ಜನಸಂಖ್ಯೆಗೆ ಅನುಗುಣವಾಗಿ ಕಾಯ್ದೆ ರಚಿಸಿ ಬಜೆಟ್‌ನಲ್ಲಿ ಅನುದಾನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಅವರು ಆಗ್ರಹಿಸಿದರು. ಈ ಸಂಬಂಧ ಸರ್ಕಾರದ ಕಣ್ತೆರೆಸಲು ಹೋರಾಟ ಮಾಡಲಗುತ್ತಿದೆ ಎಂದು ಅವರು ವಿವರಿಸಿದರು.












Click it and Unblock the Notifications