ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಅಭಿವೃದ್ಧಿ ಕಾಮಗಾರಿ, ತೋಳಕನಕೆರೆಯಲ್ಲಿ 3ಡಿ ಚಿತ್ರ!
ಬೆಂಗಳೂರಿನ ನಂತರ ಅತ್ಯಂತ ವೇಗವಾಗಿ ಅಭಿವೃದ್ಧಿ ಆಗುತ್ತಿರುವ ಪ್ರದೇಶಗಳಲ್ಲಿ ಹುಬ್ಬಳ್ಳಿ - ಧಾರವಾಡ ಪಾಲಿಕೆಯು ಪ್ರಮುಖವಾಗಿದೆ. ಹುಬ್ಬಳ್ಳಿ - ಧಾರವಾಡದಲ್ಲಿ ಸ್ಮಾರ್ಟ್ ಸಿಟಿ ಅಡಿಯಲ್ಲಿ ಹಲವು ಪ್ರಮುಖ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಹುಬ್ಬಳ್ಳಿಯ ಕ್ರೀಡಾ ಸಂಕೀರ್ಣ ಕಾಮಗಾರಿ ನಡೆದಿದೆ.
ಇದರೊಂದಿಗೆ ತೋಳನಕೆರೆ ಉದ್ಯಾನವನ ಅಭಿವೃದ್ಧಿಯಾಗಿದ್ದು, ಇಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳಿಗೆ ಪ್ಲಾನ್ ಮಾಡಿಕೊಳ್ಳಲಾಗುತ್ತಿದೆ. ಇಲ್ಲಿ ಐತಿಹಾಸಿಕ ಕಥೆಗಳನ್ನು ಒಳಗೊಂಡ 3ಡಿ ಚಿತ್ರಗಳ ಅಳವಡಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ. ವಿಮಾನ ನಿಲ್ದಾಣದಲ್ಲಿ ಇರುವಂತೆ ಉದ್ಯಾನವನದಲ್ಲಿ ಸ್ವಯಂ ಚಾಲಿತ ಪ್ರವೇಶ ವ್ಯವಸ್ಥೆ ಕಲ್ಪಿಸುವ ಬಗ್ಗೆ ಸೂಚನೆ ನೀಡಲಾಗಿದೆ.

ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಸ್ಮಾರ್ಟ್ ಸಿಟಿ ಅಡಿಯಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದೆ. ಇದೀಗ ಹುಬ್ಬಳ್ಳಿ - ಧಾರವಾಡದಲ್ಲೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ.
ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ವಿ.ರಾಮಪ್ರಸಾದ ಮನೋಹರ್ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಹುಬ್ಬಳ್ಳಿಯ ಕ್ರೀಡಾ ಸಂಕೀರ್ಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈಗಾಗಲೇ ಇಲ್ಲಿನ ತೋಳನಕೆರೆ ಉದ್ಯಾನವನ ಅಭಿವೃದ್ಧಿಪಡಿಸಲಾಗಿದೆ. ಉದ್ಯಾನವನದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಮೂಲಭೂತ ಸೌಕರ್ಯಗಳ ಬಗ್ಗೆ ನಿಗಾ ವಹಿಸಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ. ಜನಾಕರ್ಶಕ ದೀಪಗಳು, ವಿವಿಧ ಬಗೆಯ ಕಾರ್ಯಕ್ರಮಗಳು, ಐತಿಹಾಸಿಕ ಕಥೆಗಳನ್ನು ಒಳಗೊಂಡ 3ಡಿ ಚಿತ್ರಗಳ ಅಳವಡಿಸಲು ಮುಂದಾಗಬೇಕು.
ಆ ಮೂಲಕ ಉದ್ಯಾನಕ್ಕೆ ಹೆಚ್ಚು ಹೆಚ್ಚು ಜನರು ಆಗಮಿಸುವಂತೆ ಪೂರಕ ವಾತಾವರಣ ನಿರ್ಮಿಸಬೇಕು. ಯೋಗಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ. ವಿಮಾನ ನಿಲ್ದಾಣದಲ್ಲಿ ಇರುವಂತೆ ಉದ್ಯಾನವನದಲ್ಲಿ ಸ್ವಯಂ ಚಾಲಿತ ಪ್ರವೇಶ ವ್ಯವಸ್ಥೆ ಕಲ್ಪಿಸಿ ಎಂದು ಅಧಿಕಾರಿಗಳಿಗೆ ಹೇಳಲಾಗಿದೆ.
ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣದಲ್ಲೂ ಅಭಿವೃದ್ಧಿ ಕೆಲಸಗಳು ನಡೆದಿವೆ. ಇಲ್ಲಿಗೆ ಭೇಟಿ ನೀಡಿದ ಅವರು, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕುಡಿಯುವ ನೀರು, ಕುಳಿತುಕೊಳ್ಳುವ ಆಸನಗಳ ಸ್ವಚ್ಛತೆ, ಸೂಚನಾ ಫಲಕಗಳು ಸೇರಿದಂತೆ ವಿವಿಧ ಮೂಲ ಸೌಕರ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಲಿಮಿಟೆಡ್ ಕಚೇರಿಗೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಹುಬ್ಬಳ್ಳಿ - ಧಾರವಾಡದಲ್ಲಿ ವಿವಿಧ ಕಾಮಗಾರಿಗಳನ್ನು ಬೇಗ ಮುಗಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ರುದ್ರೇಶ ಗಾಳಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಹುಬ್ಬಳ್ಳಿ ಶಹರ ತಹಶೀಲ್ದಾರ್ ಕಲಗೌಡ ಪಾಟೀಲ್ ಸೇರಿದಂತೆ ಹಲವರು ಇದ್ದರು.












Click it and Unblock the Notifications