"ಜೀವನ ಪರ್ಯಂತ ಬಿಜೆಪಿಯಲ್ಲಿರುತ್ತೇವೆ; ಯಾವುದೇ ಕಾರಣಕ್ಕೂ ಕಾಂಗ್ರೆಸ್'ಗೆ ಮರಳಲ್ಲ''
ಹುಬ್ಬಳ್ಳಿ, ಜನವರಿ 7: ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಬಂದವರು ಮತ್ತೆ ಮರಳಿ ಸ್ವಪಕ್ಷಕ್ಕೆ ಮರಳುತ್ತಾರೆಂಬುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರ ಭ್ರಮೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿದ್ದವರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಮರಳುವುದಿಲ್ಲ. ಜೀವನ ಪರ್ಯಂತ ನಾವು ಬಿಜೆಪಿಯಲ್ಲಿಯೇ ಇರುತ್ತೇವೆ, ಬಿಜೆಪಿಯೇ ನಮ್ಮ ಪಕ್ಷ ಎಂದರು.
ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಲು ಅವರೇನು ಜ್ಯೋತಿಷ್ಯರಾ? ಸಿದ್ದರಾಮಯ್ಯ ಯಾವಾಗ ಜ್ಯೋತಿಷ್ಯರಾದರು? ಇನ್ನುಳಿದ ಎರಡೂವರೆ ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದರು.

ಇನ್ನು ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಟ್ಟಿದ್ದು. ಬೇರೆ ಪಕ್ಷದಿಂದ ಬಂದವರಿಗೆ ಸಚಿವ ಸ್ಥಾನ ನೀಡುವಂತೆ ನಾವೂ ಸಹ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದು, ಯಾರಿಗೂ ಅನ್ಯಾಯವಾಗುವದಿಲ್ಲ ಎಂದು ಸಚಿವ ಭೈರತಿ ಬಸವರಾಜ್ ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications