Delhi Fire Accident: ಬಣ್ಣದ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ: 11 ಮಂದಿ ದಾರುಣ ಸಾವು
ದೆಹಲಿ, ಫೆಬ್ರವರಿ 16: ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 11 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ದೆಹಲಿಯ ಅಲಿಪುರದ ಮುಖ್ಯ ಮಾರುಕಟ್ಟೆಯಲ್ಲಿರುವ ಪೇಂಟ್ ಫ್ಯಾಕ್ಟರಿಯಲ್ಲಿ ಈ ದುರಂತ ಸಂಭವಿಸಿದ್ದು, 11 ಜನರ ಸಜೀವ ದಹನವಾಗಿದ್ದು, ನಾಲ್ಕು ಜನರು ಗಂಭೀರ ಗಾಯಗೊಂಡಿದ್ದಾರೆ.
ಅಲಿಪುರದ ಮುಖ್ಯ ಮಾರುಕಟ್ಟೆ ದಯಾಳ್ ಮಾರ್ಕೆಟ್‌ನಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ ನಿನ್ನೆ(ಫೆಬ್ರವರಿ 15)ರ ಸಂಜೆ 5 ಗಂಟೆಯ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಪೇಂಟ್‌ನಲ್ಲಿ ಬಳಸುವ ಯಾವುದೋ ಕೆಮಿಕಲ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಊಹಿಸಲಾಗಿದೆ. ಆಕಸ್ಮಿಕವಾಗಿ ತಗುಲಿದ ಬೆಂಕಿ ನೋಡ ನೋಡುತ್ತಿದ್ದಂತೆ ಸಂಪೂರ್ಣ ಫ್ಯಾಕ್ಟರಿ ಆವರಿಸಿಕೊಂಡಿದೆ.

ಕೆಲಸ ಸಮಯದಲ್ಲೇ ಬೆಂಕಿ ಅವಘಡ ಸಂಭವಿಸಿದ್ದರಿಂದ ಹತ್ತಕ್ಕೂ ಹೆಚ್ಚು ಕಾರ್ಮಿಕರು ಫ್ಯಾಕ್ಟರಿಯಲ್ಲಿ ಸಿಲುಕಿಕೊಂಡಿದ್ದರು ಕ್ಷಣಾರ್ಧದಲ್ಲಿ ಸಂಪೂರ್ಣ ಫ್ಯಾಕ್ಟರಿ ಹೊತ್ತಿ ಉರಿದಿದ್ದು, 11 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೂ ನಾಲ್ವರು ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗಾಯಾಳುಗಳಲ್ಲಿ ಒಬ್ಬರು ಪೊಲೀಸ್ ಸಿಬ್ಬಂದಿ ಎಂದು ಗುರುತಿಸಲಾಗಿದೆ. ಸದ್ಯ ಘಟನೆಯಲ್ಲಿ ಸಾವನ್ನಪ್ಪಿದವರ ಮೃತ ದೇಹವನ್ನು ಬಾಬು ಜಗಜೀವನ್ ರಾಮ್ ಆಸ್ಪತ್ರೆಗೆ ರವಾನಿಸಲಾಗಿದೆ. ಹಾಗೂ ಗಾಯಾಳುಗಳನ್ನು ರಾಜಾ ಹರೀಶ್ ಚಂದ್ರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇನ್ನು ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಬೆಂಕಿ ಆರಿಸುವ ಕಾರ್ಯಾಚರಣೆ ನಡೆಸಿದ್ದು, ಸತತ ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಫ್ಯಾಕ್ಟರಿ ಬೆಂಕಿಯ ಕೆನ್ನಾಲಿಗೆಗೆ ಹತ್ತಿರದ ಕೆಲವು ಮನೆಗಳು, ಅಂಗಡಿಗಳು ಬೆಂಕಿಗಾಹುತಿಯಾಗಿದೆ.












Click it and Unblock the Notifications