ಭಾರತದಲ್ಲಿ ಕೊರೊನಾವೈರಸ್ ರೂಪಾಂತರ ಭೀತಿ ನಡುವೆ 30,941 ಮಂದಿಗೆ ಸೋಂಕು!
ನವದೆಹಲಿ, ಆಗಸ್ಟ್ 31: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮೊದಲಿನಂತೆ ಮತ್ತೆ 30,000ದ ಗಡಿ ದಾಟುತ್ತಿದೆ. ದೇಶದಲ್ಲಿ ಒಂದೇ ದಿನ 30,941 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 36,275 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 350 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ 4,38,560ಕ್ಕೆ ಏರಿಕೆಯಾಗಿದೆ. ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,70,640ಕ್ಕೆ ಏರಿಕೆಯಾಗಿದ್ದು, ಈವರೆಗೂ 3,19,59,680 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಪತ್ತೆಯಾಗಿರುವ ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಅತಿಹೆಚ್ಚು ಹೊಸ ಪ್ರಕರಣಗಳು ಕೇರಳ ರಾಜ್ಯವೊಂದರಲ್ಲೇ ವರದಿಯಾಗಿವೆ. ದೇಶದಲ್ಲಿನ ಒಟ್ಟು 30,941 ಕೊವಿಡ್-19 ಸೋಂಕಿತ ಪ್ರಕರಣಗಳ ಪೈಕಿ ಕೇರಳದಲ್ಲಿ 19,622 ಪ್ರಕರಣಗಳು ವರದಿಯಾಗಿವೆ.

ದೇಶದಲ್ಲಿ ಕೊರೊನಾವೈರಸ್ ಪರೀಕ್ಷೆಯ ಅಂಕಿ-ಸಂಖ್ಯೆ
ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾದರೂ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 13,94,573 ಜನರಿಗೆ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 52,15,41,098 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

60 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ
ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನವನ್ನು ಆರಂಭಿಸಿ 227 ದಿನಗಳೇ ಕಳೆದು ಹೋಗಿವೆ. ಈ ಅವಧಿಯಲ್ಲಿ 64 ಕೋಟಿಗೂ ಅಧಿಕ ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ಸೋಮವಾರ ರಾತ್ರಿ 7 ಗಂಟೆ ವೇಳೆಗೆ 53,37,042 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 64,05,28,644 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೆ 63,09,30,270 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ.

ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಯುಪಿಗೆ ಅಗ್ರಸ್ಥಾನ
ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಉತ್ತರ ಪ್ರದೇಶದಲ್ಲಿ ಈವರೆಗೂ 7.04 ಕೋಟಿ ಮಂದಿ ಮೊದಲ ಡೋಸ್ ಪಡೆದುಕೊಂಡಿದ್ದು, ಈ ಪೈಕಿ ಶೇ.16ರಷ್ಟು ಅಂದರೆ 1.13 ಕೋಟಿ ಜನರು ಎರಡೂ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಮಹಾರಾಷ್ಟ್ರ ಗುರುತಿಸಿಕೊಂಡಿದ್ದು, ರಾಜ್ಯದಲ್ಲಿ 5.71 ಕೋಟಿ ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, ಅದರಲ್ಲಿ 1.54 ಕೋಟಿ ಜನರು ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಇದರ ಹೊರತಾಗಿ ಗುಜರಾತ್, ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಕರ್ನಾಟಕದಲ್ಲಿ ಒಂದು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.
Recommended Video


ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ
2021ರ ಆಗಸ್ಟ್ 31ರ ಅಂಕಿ-ಅಂಶಗಳ ಪ್ರಕಾರ, 63,09,30,270 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
* ಪೂರೈಕೆಯಾದ ಲಸಿಕೆ ಪ್ರಮಾಣ - 63,09,30,270
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 21,76,930
* ಕೊವಿಡ್-19 ಲಸಿಕೆಯ ಲಭ್ಯತೆ - 4,87,39,946












Click it and Unblock the Notifications