ಅಲೆಗಳ ಆಟ: ಭಾರತದಲ್ಲಿ ಹೆಚ್ಚಾದ ಕೊರೊನಾವೈರಸ್ ಆತಂಕ!
ನವದೆಹಲಿ, ಜುಲೈ 16: ಕೊರೊನಾವೈರಸ್ ಡೆಲ್ಟಾ ರೂಪಾಂತರದಿಂದ ಎರಡನೇ ಅಲೆ ಹಾಗೂ ಡೆಲ್ಟಾ ಪ್ಲಸ್ ರೂಪಾಂತರದಿದ ಮೂರನೇ ಅಲೆ ಅಪಾಯ ಹೆಚ್ಚಾಗಿದೆ. ಭಾರತದಲ್ಲಿ ಮೂರನೇ ಅಲೆ ಶುರುವಾದ ಮುನ್ನಚ್ಚರಿಕೆ ಬೆನ್ನಲ್ಲೇ ಹೊಸ ಪ್ರಕರಣಗಳ ಸಂಖ್ಯೆ ಕ್ರಮೇಣ ಏರಿಕೆಯಾಗುತ್ತಿದೆ.
ದೇಶದಲ್ಲಿ ಜುಲೈ 4ರಿಂದಲೇ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಶುರುವಾಗಿದೆ ಎಂದು ಸಾಂಕ್ರಾಮಿಕ ರೋಗ ಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 38,000 ಗಡಿ ದಾಟಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 38,949 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 542 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 40,026 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಭಾರತದಲ್ಲಿ ಒಟ್ಟು 3,10,26,829 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 3,01,83,876 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 4,12,531 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 4,30,422 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊವಿಡ್-19 ಚೇತರಿಕೆ ಪ್ರಮಾಣ ಶೇ.97.28
"ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಕ್ಕಿಂತ ಚೇತರಿಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. 100ರಲ್ಲಿ ಶೇಕಡಾ 98.28ರಷ್ಟು ಸೋಂಕಿತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ದೇಶದಲ್ಲಿ ಕೇವಲ ಶೇಕಡಾ 1.39ರಷ್ಟು ಸಕ್ರಿಯ ಪ್ರಕರಣಗಳಿವೆ. ಪ್ರಸ್ತುತ ಒಂದು ವಾರದಲ್ಲಿ ಪಾಸಿವಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಕಡಿಮೆಯಾಗಿದ್ದು, ಶೇಕಡಾ 2.14ರಷ್ಟಿದೆ. ಕಳೆದೊಂದು ದಿನದಲ್ಲಿ ಪಾಟಿವಿಟಿವಿಟಿ ದರವು ಶೇಕಡಾ 3ಕ್ಕಿಂತಲೂ ಕಡಿಮೆಯಾಗಿದ್ದು, ಶೇಕಡಾ 1.99ರಷ್ಟಿದೆ," ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

19 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಪರೀಕ್ಷೆ
ದೇಶದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ಸಂಖ್ಯೆ ಹೆಚ್ಚಾದಂತೆ ಸೋಂಕಿತ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 19,55,910 ಜನರ ಮಾದರಿ ಪರೀಕ್ಷೆಗೊಳಪಡಿಸಿದಾಗ 41,806 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ದೇಶದಲ್ಲಿ ಈವರೆಗೂ 44,00,23,239 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಭಾರತದಲ್ಲಿ ಕೊವಿಡ್-19 ನಿಯಂತ್ರಿಸಲು ಲಸಿಕೆ ವಿತರಣೆ ಅಭಿಯಾನ
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ

ಲಸಿಕೆ ಪಡೆದ ಫಲಾನುಭವಿಗಳ ಸಂಖ್ಯೆ ಎಷ್ಟಿದೆ?
ದೇಶದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾಗಿ 181 ದಿನಗಳೇ ಕಳೆದಿವೆ. ಈವರೆಗೂ 39 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಗುರುವಾರ ರಾತ್ರಿ 7 ಗಂಟೆ ವೇಳೆಗೆ 35,15,093 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 39,49,78,565 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಅನುಮೋದನೆ ಪಡೆದ ಲಸಿಕೆ
ಭಾರತದಲ್ಲಿ ಒಟ್ಟು ನಾಲ್ಕು ಕಂಪನಿಗಳ ಕೊರೊನಾವೈರಸ್ ಲಸಿಕೆಯ ವಿತರಣೆಗೆ ಅನುಮೋದನೆ ನೀಡಲಾಗಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆ. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್, ರಷ್ಯಾದಲ್ಲಿ ಸಂಶೋಧಿಸಿ ಭಾರತದ ರೆಡ್ಡೀಸ್ ಕಂಪನಿ ಜೊತೆಗಿನ ಸಹಭಾಗಿತ್ವದಲ್ಲಿ ಉತ್ಪಾದನೆ ಆಗುತ್ತಿರುವ ಸ್ಪುಟ್ನಿಕ್-ವಿ ಹಾಗೂ ಮಾಡೆರ್ನಾ ಲಸಿಕೆಯನ್ನು ವಿತರಿಸುವುದಕ್ಕೆ ಕೇಂದ್ರ ವೈದ್ಯಕೀಯ ಔಷಧೀಯ ನಿಯಂತ್ರಣ ಪ್ರಾಧಿಕಾರವು ಅನುಮೋದನೆ ನೀಡಿದೆ.












Click it and Unblock the Notifications