ಭಾರತದಲ್ಲಿ 103 ದಿನಗಳ ನಂತರ ಕೊರೊನಾವೈರಸ್ ಹೊಸ ದಾಖಲೆ!
ನವದೆಹಲಿ, ಮಾರ್ಚ್ 19: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ಭೀತಿ ಎದುರಾಗಿದೆ. ಕಳೆದ 103 ದಿನಗಳಲ್ಲೇ ಅತಿಹಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ಕಳೆದ 24 ಗಂಟೆಗಳಲ್ಲೇ ವರದಿಯಾಗಿವೆ.
ಭಾರತದಲ್ಲಿ ಒಂದೇ ದಿನ 39726 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 154 ಜನರು ಮಹಾಮಾರಿಗೆ ಬಲಿಯಾಗಿದ್ದರೆ, 20,654 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು 1,15,14,331 ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 1,10,83,679 ಸೋಂಕಿತರು ಗುಣಮುಖರಾಗಿದ್ದರೆ, 1,59,370 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 2,71,282 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಸೋಂಕಿಗೆ ಲಸಿಕೆ:
ದೇಶದಲ್ಲಿ ಈವರೆಗೂ 3,93,39,817 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.
ವಿಶ್ವದಲ್ಲಿ ಕೊರೊನಾವೈರಸ್ ಅಲೆ:
ವಿಶ್ವದಲ್ಲಿ ಒಂದೇ ದಿನ ಒಟ್ಟು 5,40,431 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,23,52,446ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 10413 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 27,02,269ಕ್ಕೆ ಏರಿಕೆಯಾಗಿದೆ. ಇದುವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 9,86,43,907 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,10,06,270 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.












Click it and Unblock the Notifications