ಭಾರತದಲ್ಲಿ ಒಂದೇ ದಿನ 48,786 ಮಂದಿಗೆ ಕೊರೊನಾವೈರಸ್!
ನವದೆಹಲಿ, ಜುಲೈ 01: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ನಡುವೆ ಪ್ರತಿನಿತ್ಯ 45,000ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 48,786 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ದೇಶದಲ್ಲಿ ಒಂದೇ ದಿನದಲ್ಲಿ 1,005 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದೇ ಅವಧಿಯಲ್ಲಿ 61,588 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಗುರುವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 3,04,11,634 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,94,88,918 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 3,99,459 ಮಂದಿ ಬಲಿಯಾಗಿದ್ದಾರೆ. ಇದರ ಹೊರತಾಗಿ 5,23,257 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

33,57,16,019 ಜನರಿಗೆ ಕೊವಿಡ್-19 ಲಸಿಕೆ:
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.
ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ. ದೇಶದಲ್ಲಿ ಈವರೆಗೂ 33,57,16,019 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.












Click it and Unblock the Notifications