Jharkhand Election: ಎರಡನೇ ಹಂತದ ಚುನಾವಣೆ; ಕಣದಲ್ಲಿ 528 ಅಭ್ಯರ್ಥಿಗಳು
ಜಾರ್ಖಂಡ್ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು ಘಟಾನುಘಟಿ ನಾಯಕರು ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಸಜ್ಜಾಗಿದ್ದಾರೆ. 81 ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 13 ರಂದು ಮೊದಲ ಹಂತದಲ್ಲಿ 43 ಕ್ಷೇತ್ರಗಳು ಮತ್ತು ಎರಡನೇ ಹಂತದಲ್ಲಿ 38 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಮತ್ತು ಎರಡನೇ ಹಂತಕ್ಕೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದೆ. ಮೊದಲ ಹಂತದಲ್ಲಿ 43 ಕ್ಷೇತ್ರಗಳಲ್ಲಿ 685 ಅಭ್ಯರ್ಥಿಗಳು ಕಣದಲ್ಲಿದ್ದರೆ, ಎರಡನೇ ಹಂತದಲ್ಲಿ 528 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಶುಕ್ರವಾರ 32 ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದು ಚುನಾವಣಾ ಕಣದಿಂದ ಹಿಂದೆ ಸರಿದರು. ಇದೀಗ ಒಟ್ಟು 528 ಅಭ್ಯರ್ಥಿಗಳು ಅಂತಿಮವಾಗಿ 38 ಕ್ಷೇತ್ರಗಳಿಂದ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಚುನಾವಣಾ ಅಧಿಕಾರಿ ಕೆ.ರವಿ ಕುಮಾರ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.

38 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 20 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 22ರಿಂದ 29ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು, 634 ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಿದ್ದರು, ಪರಿಶೀಲನೆ ಬಳಿಕ 74 ನಾಮಪತ್ರಗಳು ತಿರಸ್ಕೃತಗೊಂಡಿದ್ದವು. ಶುಕ್ರವಾರ 32 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, 528 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಕೆ.ರವಿ ಕುಮಾರ್ ಮಾಹಿತಿ ನೀಡಿದ್ದಾರೆ.
ಧನ್ವಾರ್ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಅಭ್ಯರ್ಥಿಗಳು 24 ಮಂದಿ ಸ್ಪರ್ಧೆ ಮಾಡುತ್ತಿದ್ದು, ದಿಯೋಘರ್ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ 7 ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಇದೇ 38 ಕ್ಷೇತ್ರಗಳಲ್ಲಿ 583 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು, ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ ಈ ಬಾರಿ ಅಭ್ಯರ್ಥಿಗಳ ಸಂಖ್ಯೆ ಕಡಿಮೆಯಾಗಿದೆ.
ಅತೃಪ್ತರಿಂದ ನಾಮಪತ್ರ ವಾಪಸ್
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಭೇಟಿ ಮಾಡಿದ ಬಳಿಕ ಬಿಜೆಪಿಯಿಂದ ಟಿಕೆಟ್ ಸಿಗದೆ ಅತೃಪ್ತಗೊಂಡು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಜಾರ್ಖಂಡ್ ಮಾಜಿ ಸಚಿವ ಸತ್ಯಾನಂದ್ ಝಾ ಶುಕ್ರವಾರ ನಾಮಪತ್ರ ಹಿಂಪಡೆದಿದ್ದಾರೆ.
ಎರಡೂ ಹಂತದ ಚುನಾವಣೆಯಲ್ಲಿ 81 ಕ್ಷೇತ್ರಗಳಿಗೆ 1,211 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಮೊದಲ ಹಂತದಲ್ಲಿ 43 ಕ್ಷೇತ್ರಗಳಲ್ಲಿ 73 ಮಹಿಳೆಯರು ಮತ್ತು ಒಬ್ಬ ತೃತೀಯಲಿಂಗಿ ಸೇರಿದಂತೆ 683 ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿರುವುದು ವಿಶೇಷ.
ಜಾರ್ಖಂಡ್ ವಿಧಾನಸಭಾ ಚುನಾವಣೆ ಘೋಷಣೆಯಾದ ಬಳಿಕ ಈವರೆಗೂ ಚುನಾವಣಾ ಅಕ್ರಮಕ್ಕೆ ಸಂಬಂಧಪಟ್ಟಂತೆ 135.70 ಕೋಟಿ ರೂಪಾಯಿ ನಗದು ಮತ್ತು ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಕ್ಕಾಗಿ ಈವರೆಗೂ ಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.












Click it and Unblock the Notifications