ಭಾರತದಲ್ಲಿ ಒಂದೇ ದಿನ 91,702 ಮಂದಿಗೆ ಕೊರೊನಾವೈರಸ್
ನವದೆಹಲಿ, ಜೂನ್ 11: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಪ್ರಾಣ ಬಿಟ್ಟವರ ಸಂಖ್ಯೆಯು ಒಂದೇ ದಿನದಲ್ಲಿ ಅರ್ಧಕರ್ಧ ಇಳಿಮುಖವಾಗಿದೆ. ಗುರುವಾರ ಒಂದೇ ದಿನ 6,100ಕ್ಕೂ ಹೆಚ್ಚಾಗಿದ್ದ ಸಾವಿನ ಸಂಖ್ಯೆ 3,403ಕ್ಕೆ ತಗ್ಗಿದೆ.
ಕಳೆದ 24 ಗಂಟೆಗಳಲ್ಲಿ 3,403 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಒಂದೇ ದಿನ 91,702 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,34,580 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಭಾರತದಲ್ಲಿ ಒಟ್ಟು 2,92,74,823 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ2,77,90,073 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,63,079 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 11,21,671 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ 24.24 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ
ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿದ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯು ಹೈದ್ರಾಬಾದ್ ನಲ್ಲಿ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸುವುದಕ್ಕೆ ಭಾರತದಲ್ಲಿ ಅನುಮೋದನೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 146 ದಿನಗಳಲ್ಲಿ24,60,85,649 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications