ಭಾರತ: ಕೊರೊನಾದಿಂದ ಮೃತಪಟ್ಟವರ ಸಂಖ್ಯೆಯಲ್ಲಿ ದಾಖಲೆ ಇಳಿಕೆ
ನವದೆಹಲಿ, ಫೆಬ್ರವರಿ.09: ಭಾರತದಲ್ಲಿ ಕೊರೊನಾವೈರಸ್ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕಳೆದ 8 ದಿನಗಳಲ್ಲಿ ಎರಡನೇ ಬಾರಿ ಸಾವಿನ ಸಂಖ್ಯೆ 80ಕ್ಕಿಂತ ಕಡಿಮೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 78 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 1,55,158ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 9110 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 14,016 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,08,47,304ಕ್ಕೆ ಏರಿಕೆಯಾಗಿದೆ. 1,05,48,521 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 1,43,625 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

6,87,138 ಜನರಿಗೆ ಕೊರೊನಾವೈರಸ್ ಪರೀಕ್ಷೆ:
ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 6,87,138 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 20,25,87,752 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಇದುವರೆಗೂ 62,59,008 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.












Click it and Unblock the Notifications