Accident: ಲಾರಿ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ: 8 ಮಂದಿ ಸ್ಥಳದಲ್ಲೇ ಸಾವು
Accident News: ಲಾರಿ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ 8 ಜನ ಸಾವನ್ನಪ್ಪಿದ್ದ, 33 ಮಂದಿ ಭೀಕರವಾಗಿ ಗಾಯಗೊಂಡ ಘಟನೆ ಶುಕ್ರವಾರ (ಸೆಪ್ಟೆಂಬರ್ 13) ಆಂಧ್ರಪ್ರದೇಶದಲ್ಲಿ ನಡೆದಿದೆ. ಅಷ್ಟಕ್ಕೂ ಆಗಿದ್ದೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮೊಘಲಿ ಘಾಟ್ ರಸ್ತೆಯಲ್ಲಿ ಎರಡು ಲಾರಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಚಿತ್ತೂರು ಜಿಲ್ಲೆಯ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದರು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಗುತ್ತಿದೆ. ಇನ್ನು ತನಿಖೆ ಆರಂಭಿಸಲು ಪ್ರಕರಣ ದಾಖಲಿಸಲಾಗಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಈ ಭೀಕರ ಅಪಘಾತ ಸಂಭವಿಸಿದ್ದು, ಪ್ರತ್ಯಕ್ಷದರ್ಶಿಗಳ ಪ್ರಕಾರ, ಪಲಮನೇರು ಕಡೆಯಿಂದ ಚಿತ್ತೂರು ಕಡೆಗೆ ಹೋಗುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಮೊಗಿಲಿ ಘಾಟ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಳಿಕ ಅದೇ ರಸ್ತೆಯಲ್ಲಿ ಕಬ್ಬಿಣದ ಲೋಡ್‌ನೊಂದಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಎರಡು ವಾಹನಗಳು ಮತ್ತೊಂದು ಟೆಂಪೋಗೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತದ ತೀವ್ರತೆ ಹೆಚ್ಚಿದೆ ಎನ್ನಲಾಗಿದೆ.
ಮೂವರು ಸ್ಥಳದಲ್ಲಿ ಸಾವು: ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚಿಕ್ಕಬೆನ್ನೂರು ಬಳಿ ಈ ಘಟನೆ ನಡೆದಿದ್ದು, ಅಪಘಾತ ರಭಸಕ್ಕೆ ಮೂವರು ಸ್ಥಳದಲ್ಲಿ ಅಸುನಿಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪ್ರಜ್ವಲ್ ರೆಡ್ಡಿ (30 ವರ್ಷ), ಹರ್ಷಿತಾ (28 ವರ್ಷ) ಮತ್ತು ಮಗು ಸೋಹನ್ (2 ವರ್ಷ) ಮೃತ ದುರ್ದೈವಿಗಳಾಗಿದ್ದಾರೆ. ಗಾಯಗೊಂಡವರನ್ನು ಶಿಲ್ಪ, ಸ್ವರ್ಣ ಜಾರ್ಜ್, ಮಧುಮಿತ, ವಿಜಯ್ ರೆಡ್ಡಿ, ಕೃಷ್ಣ, ಎಂದು ಗುರುತಿಸಲಾಗಿದೆ.
ಚಲಿಸುತ್ತಿದ್ದ ಲಾರಿಯ ಟಯರ್ ಬ್ಲಾಸ್ಟ್ ಆಗುತ್ತಿದ್ದಂತೆ, ವೇಗವಾಗಿ ಹಿಂಬದಿಯಿಂದ ಬಂದ ಫಾರ್ಚೂನರ್ ಕಾರು ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಚಲಿಸುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಪ್ರಕರಣ ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.












Click it and Unblock the Notifications