Women’s Reservation Bill: ಮಹಿಳಾ ಮೀಸಲಾತಿ ಮಸೂದೆಗೆ ಅಸಾದುದ್ದೀನ್ ಓವೈಸಿ ವಿರೋಧ
ನವದೆಹಲಿ, ಸೆಪ್ಟೆಂಬರ್ 19: ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ ಮಹಿಳಾ ಮೀಸಲಾತಿ ಮಸೂದೆಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ವಿರೋಧ ವ್ಯಕ್ತಪಡಿಸಿದ್ದಾರೆ.
ಮಸೂದೆಯಲ್ಲಿ ಮುಸ್ಲಿಮರು ಮತ್ತು ಒಬಿಸಿ ಸಮುದಾಯಗಳಿಗೆ ಯಾವುದೇ ಪ್ರಾತಿನಿಧ್ಯವಿಲ್ಲ. ಈ ಕಾರಣ ಮಸೂದೆಯನ್ನು ವಿರೋಧಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಸಂಸತ್ತಿನ ಹೊರಗೆ ಸುದ್ದಿಸಂಸ್ಥೆ 'ಎಎನ್‌ಐ' ಜೊತೆ ಮಾತನಾಡಿದ ಅವರು, 'ನೀವು ಕಾನೂನನ್ನು ಮಾಡುತ್ತೀರಿ. ದೇಶದಲ್ಲಿ ಇಲ್ಲಿಯವರೆಗೆ 17 ಲೋಕಸಭಾ ಚುನಾವಣೆಗಳು ನಡೆದಿವೆ. 8,990 ಸಂಸದರು ಆಯ್ಕೆಯಾಗಿದ್ದಾರೆ. ಅದರಲ್ಲಿ ಕೇವಲ 520 ಸಂಸದರು ಮುಸ್ಲಿಮರು.

520 ಮುಸಲ್ಮಾನರಲ್ಲಿ ಬೆರಳೆಣಿಕೆಯಷ್ಟು ಮುಸ್ಲಿಂ ಮಹಿಳೆಯರೂ ಕಾಣಿಸುವುದಿಲ್ಲ. ಹಾಗಾದರೆ ಪ್ರಾತಿನಿಧ್ಯ ಎಲ್ಲಿದೆ? ಮಸೂದೆಯ ಪ್ರಮುಖ ದೋಷವೆಂದರೆ ಮುಸ್ಲಿಂ ಮತ್ತು ಒಬಿಸಿ ಮಹಿಳೆಯರಿಗೆ ಯಾವುದೇ ಕೋಟಾ ಇಲ್ಲ' ಎಂದು ಅವರು ಪ್ರತಿಪಾದಿಸಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33 ರಷ್ಟು ಸ್ಥಾನಗಳನ್ನು ಮೀಸಲಿಡುತ್ತದೆ. ಇದನ್ನು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಕೆಳಮನೆಯಲ್ಲಿ ಮಂಡಿಸಿದರು. ಮಸೂದೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಗುತ್ತದೆ. ಮಸೂದೆಯು SC/ST ಗಳಿಗೆ ಇರಿಸಲಾದ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮತ್ತು ಸಾಮಾನ್ಯ ವರ್ಗಕ್ಕೆ ಮೂರನೇ ಒಂದು ಭಾಗವನ್ನು ಮೀಸಲಿಡುತ್ತದೆ.
ಡಿಲಿಮಿಟೇಶನ್ ನಂತರವೇ ಮಸೂದೆ ಜಾರಿಗೆ ಬರಲಿದೆ. ಕಾಯಿದೆಯ ಪ್ರಾರಂಭದಿಂದ 15 ವರ್ಷಗಳ ಕಾಲ ಮೀಸಲಾತಿಯನ್ನು ಕಡ್ಡಾಯಗೊಳಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಹೊಸ ಸಂಸತ್ತಿನ ಕಟ್ಟಡದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಾಗಿದೆ. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯನ್ನು ಸಾಧಿಸಲು ಈ ಮಸೂದೆ ಸಹಾಯ ಮಾಡುತ್ತದೆ ಎಂದು ಸರ್ಕಾರ ಹೇಳಿದೆ. ಮಸೂದೆಗೆ ನಾರಿ ಶಕ್ತಿ ವಂದನ್ ಅಧಿನಿಯಂ ಎಂದು ಹೆಸರಿಡಲಾಗಿದೆ.
ಲೋಕಸಭೆಯಲ್ಲಿ ಈ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಸಂಪುಟ ಸೋಮವಾರ ಮಸೂದೆಗೆ ಅನುಮೋದನೆ ನೀಡಿದೆ. ದೇಶದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಹೆಚ್ಚು ಹೆಚ್ಚು ಮಹಿಳೆಯರು ಭಾಗವಹಿಸುವುದನ್ನು ಸರ್ಕಾರ ಬಯಸುತ್ತದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿ ಪ್ರಕ್ರಿಯೆಯನ್ನು ಜಗತ್ತು ಗುರುತಿಸಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.












Click it and Unblock the Notifications