ಕರ್ನಾಟಕಕ್ಕೆ ಮತ್ತೆ ಶಾಕ್: ಅ.15ರವರೆಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ
ದೆಹಲಿ ಸೆಪ್ಟೆಂಬರ್ 29: ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಇದರ ನಡುವೆ ತಮಿಳುನಾಡಿಗೆ ಅಕ್ಟೋಬರ್ 15ರವರೆಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಬಿದ್ದಿದೆ.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. CWRC ಆದೇಶ ಪಾಲಿಸುವಂತೆ ಕರ್ನಾಟಕಕ್ಕೆ CWMA ಸೂಚನೆ ನೀಡಿದೆ. ಆದೇಶದಂತೆ ತಮಿಳುನಾಡಿಗೆ ನಿತ್ಯ ಅಂದರೆ ಅಕ್ಟೋಬರ್ 15ರವರೆಗೆ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಲಾಗಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಇಂದು ಕನ್ನಡ ಪರ ಸಂಘಟನೆಗಳು ಮತ್ತು ರೈತರು ಸೇರಿದಂತೆ ಹಲವಾರು ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ಒಂದು ವಾರದಲ್ಲಿ ನಡೆದ ಎರಡನೇ ಬಂದ್ ಇದಾಗಿದೆ. ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು ಇಂದು (ಸೆ.29) ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ತುರ್ತು ಸಭೆಯನ್ನು ಕರೆದಿತ್ತು.
ಈ ವೇಳೆ ಅ.15ರವರೆಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶ ಹೊರಡಿಸಲಾಗಿದೆ. ಕರ್ನಾಟಕದ ಜನರಿಗೆ ಕುಡಿಯಲು ನೀರು ಇಲ್ಲ. ಹೀಗಿರುವಾಗ ತಮಿಳುನಾಡಿಗೆ ಬೆಳೆ ಬೆಳೆಯಲು ನೀರು ಬಿಡಲಾಗುವುದಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ತಮಿಳುನಾಡಿಗೆ ಮನವರಿಕೆ ಮಾಡುವಲ್ಲಿ ವಿಫಲವಾಗಿದೆ ಎಂದು ಕರ್ನಾಟಕದಲ್ಲಿ ಜನ ಬೀದಿಗಿಳಿದು ಇಂದು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೂ ಕರ್ನಾಟಕಕ್ಕೆ ಇಂದು ಜಯ ಸಿಗಲೇ ಇಲ್ಲ. ಉರಿಯೂ ಬೆಂಕಿಗೆ ತುಪ್ಪ ಸುರಿದಂತೆ ಮತ್ತೆ ತಮಿಳುನಾಡಿಗೆ ನೀರು ಹರಿಸಬೇಕು ಎನ್ನುವ ಆದೇಶ ಬಂದಿದೆ. ಈ ಆದೇಶ ಕರುನಾಡಿನ ಜನತೆಯ ತಾಳ್ಮೆಯನ್ನು ಕೆಡಿಸಿದೆ.
ತಮಿಳುನಾಡು ಮತ್ತು ಕರ್ನಾಟಕ ನಡುವೆ ಕಾವೇರಿ ನೀರು ಹಂಚಿಕೆ ಸಮಸ್ಯೆ ತೀವ್ರಗೊಂಡಿದೆ. ಕಾವೇರಿ ನ್ಯಾಯಮಂಡಳಿ ಮತ್ತು ಸುಪ್ರೀಂ ಕೋರ್ಟ್‌ನ ಅಂತಿಮ ತೀರ್ಪಿನ ಆಧಾರದ ಮೇಲೆ ಕರ್ನಾಟಕ ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕು ಎನ್ನುವ ಒತ್ತಾಯ ತಮಿಳುನಾಡು ಹೇರಿದೆ.
ಕರ್ನಾಟಕ ಸರ್ಕಾರ ತಮಿಳುನಾಡಿಗೆ ಸರಿಯಾದ ರೀತಿಯಲ್ಲಿ ನೀರು ಬಿಟ್ಟಿಲ್ಲ ಎಂದು ತಮಿಳುನಾಡು ವಾದಿಸಿದೆ. ಆದರೆ ಇದಕ್ಕೆ ಸರಿಯಾಗಿ ಪ್ರತಿವಾದ ಕರ್ನಾಟಕ ಸರ್ಕಾರ ಮಾಡಿಲ್ಲ ಎನ್ನುವ ಆರೋಪದ ಮೇಲೆ ಪ್ರತಿಭಟನೆಗಳು ಕರ್ನಾಟಕದಲ್ಲಿ ಭಗಿಲೆದ್ದಿವೆ.

ಕೆಆರ್ ಎಸ್ ಸೇರಿದಂತೆ ಕಾವೇರಿ ನೀರಿನ ಮೂಲವಾಗಿರುವ 4 ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಕುಸಿದಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸೆ.13ರಿಂದ 15 ದಿನಗಳ ಕಾಲ ತಮಿಳುನಾಡಿಗೆ ಸೆಕೆಂಡಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಲಾಗಿದೆ. ಇದನ್ನು ಪರಿಶೀಲನೆ ಮಾಡುವಂತೆ ಕರ್ನಾಟಕ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು, ಆದರೆ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ. ಇದರಿಂದ ಕರ್ನಾಟಕದಲ್ಲಿ ಜನರ ತಾಳ್ಮೆಯ ಕಟ್ಟೆ ಒಡೆದಿದೆ.
ಈ ಆದೇಶಗೆ ನಿನ್ನೆ ಅಂತ್ಯಗೊಂಡಿದೆ. ಈ ನಡುವೆ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆ ನಿನ್ನೆ ವಿಡಿಯೋ ಮೂಲಕ ನಡೆದಿದೆ. ಈ ಸಭೆಯಲ್ಲಿ ತಮಿಳುನಾಡು ಸರ್ಕಾರದ ಪರವಾಗಿ ಕಾವೇರಿಯಿಂದ ಸರಿಯಾಗಿ ನೀರು ಬಿಡುವಂತೆ ಒತ್ತಾಯಿಸಲಾಯಿತು. ಆದರೆ ಕರ್ನಾಟಕ ನಿರಾಕರಿಸಿತು. ಮತ್ತು ಕರ್ನಾಟಕದಲ್ಲಿ ನೀರಿಲ್ಲ ಎಂದು ವಾದಿಸಿದೆ.
ಎರಡೂ ಕಡೆಯ ವಾದಗಳನ್ನು ಆಲಿಸಿದ ಕಾವೇರಿ ನೀರು ನಿರ್ವಹಣಾ ಸಮಿತಿಯು ಅಕ್ಟೋಬರ್ 15ರವರೆಗೆ ತಮಿಳುನಾಡಿಗೆ ಸೆಕೆಂಡಿಗೆ 3,000 ಕ್ಯೂಸೆಕ್ ನೀರನ್ನು ಕರ್ನಾಟಕ ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಶಿಫಾರಸು ಮಾಡಿದೆ. ಇದರಿಂದಾಗಿ ಕಾವೇರಿ ನೀರು ನಿಯಂತ್ರಣ ಆಯೋಗದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಇಂದು (ಸೆ.29) ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆ ನಡೆಯಿತು. ತಮಿಳುನಾಡು, ಕರ್ನಾಟಕ, ಕೇರಳ ಪುದುಚೇರಿಯ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಸಮಿತಿ ಶಿಫಾರಸನ್ನು ಪರಿಶೀಲಿಸಿ ಅ.15ರವರೆಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಬಂದಿದೆ.












Click it and Unblock the Notifications