ಚುನಾವಣೆ ಸೋಲು; ಮಣಿಪುರ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆ
ನವದೆಹಲಿ, ಮಾರ್ಚ್ 16; ಐದು ರಾಜ್ಯಗಳ ಚುನಾವಣೆ ಸೋಲಿನ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಬದಲಾವಣೆಗಳು ಆಗುತ್ತಿವೆ. ಪಂಜಾಬ್ ಮತ್ತು ಮಣಿಪುರ ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬುಧವಾರ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮತ್ತು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಎನ್. ಲೋಕನ್ ಸಿಂಗ್ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಿದರು.
ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಎಲ್ಲಾ 5 ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ರಾಜೀನಾಮೆ ನೀಡುತ್ತಿದ್ದಾರೆ.

ಪಂಜಾಬ್ ಕಾಂಗ್ರೆಸ್‌ನ ಮುಖ್ಯಸ್ಥರಾಗಿದ್ದ ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿಗಳ ಬದಲಾವಣೆಯಾದಾಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಹೈಕಮಾಂಡ್ ನಾಯಕರ ಮನವೊಲಿಕೆ ಬಳಿಕ ರಾಜೀನಾಮೆ ವಾಪಸ್ ಪಡೆದಿದ್ದರು.
2017ರ ಚುನಾವಣೆಯಲ್ಲಿ ಗೆದ್ದು ಪಂಜಾಬ್‌ನಲ್ಲಿ ಅಧಿಕಾರದಲ್ಲಿ ಕಾಂಗ್ರೆಸ್ ಪಕ್ಷ 2022ರ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದೆ. 117 ಸದಸ್ಯ ಬಲದ ವಿಧಾನಸಭೆಯಲ್ಲಿ ಪಕ್ಷ 18 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿತ್ತು.
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ನವಜೋತ್ ಸಿಂಗ್ ಸಿಧು ಬದಲು ಹಾಲಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿಯನ್ನು ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು.
ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋತ ಬಳಿಕ ನವಜೋತ್ ಸಿಂಗ್ ಸಿಧು ಮೌನಕ್ಕೆ ಶರಣಾಗಿದ್ದಾರೆ. ಬುಧವಾರ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಒಂದೇ ಸಾಲಿನ ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿಗೆ ಕಳಿಸಿದ್ದಾರೆ.
ಮಣಿಪುರ ಕಾಂಗ್ರೆಸ್; 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ 5 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿತ್ತು. ಸೋನಿಯಾ ಗಾಂಧಿ ಸೂಚನೆಯಂತೆ ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಎನ್. ಲೋಕನ್ ಸಿಂಗ್ ರಾಜೀನಾಮೆ ನೀಡಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೇವಾಲ ಮಂಗಳವಾರ ಟ್ವೀಟ್ ಮಾಡಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದರು.
ಆದರೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿದ್ದ ನವಜೋತ್ ಸಿಂಗ್ ಸಿಧು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಕೇವಲ 8 ತಿಂಗಳು ಕಳೆದಿತ್ತು. ಆದರೆ ಅವರ ರಾಜೀನಾಮೆಯನ್ನು ಸಹ ಪಕ್ಷ ಪಡೆದಿದೆ.
ಭಾನುವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಮಹತ್ವದ ಸಭೆ ನಡೆದಿತ್ತು. ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ನೀಡುವ ಕುರಿತು ವಿವರವಾದ ಚರ್ಚೆ ನಡೆದಿತ್ತು. ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಮುಂದುವರೆಯಲು ತೀರ್ಮಾನ ಕೈಗೊಳ್ಳಲಾಗಿತ್ತು.
ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬದಲಾವಣೆ ಮಾಡಿ ಚರಣ್‌ಜಿತ್ ಸಿಂಗ್ ಚನ್ನಿಯನ್ನು ಮುಖ್ಯಮಂತ್ರಿಯಾಗಿ ಬದಲಾವಣೆ ಮಾಡಲಾಗಿತ್ತು. ಈ ಸಮಯದಲ್ಲಿ ಪಂಜಾಬ್ ಕಾಂಗ್ರೆಸ್‌ನಲ್ಲಿ ಹಲವಾರು ಗೊಂದಲ ಉಂಟಾಗಿದ್ದವು. ನವಜೋತ್ ಸಿಂಗ್ ಸಿಧು ಪಕ್ಷದ ವರಿಷ್ಠರ ಮೇಲೆ ಅಸಮಾಧಾನಗೊಂಡಿದ್ದರು.
ಮಣಿಪುರ ಕಾಂಗ್ರೆಸ್‌ನಲ್ಲಿ ನಾಯಕರ ನಡುವೆ ಯಾವುದೇ ಭಿನ್ನಾಭಿಪ್ರಾಯ, ಗೊಂದಲ ಇರಲಿಲ್ಲ. ಆದರೆ ವಿಧಾನಸಭೆ ಚುನಾವಣೆಯ ಸೋಲಿನ ಕಾರಣದಿಂದಾಗಿ ರಾಜ್ಯಾಧ್ಯಕ್ಷರು ರಾಜೀನಾಮೆ ನೀಡಿದ್ದಾರೆ. ಇನ್ನೂ 3 ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರು ಸಹ ರಾಜೀನಾಮೆ ಕೊಡಲಿದ್ದಾರೆ.












Click it and Unblock the Notifications