ಮೇಘಾಲಯ, ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ: ಬಹುಕೋನ ಸ್ಪರ್ಧೆಗೆ ಸಾಕ್ಷಿಯಾಗಲಿರುವ ರಾಜ್ಯಗಳು
ಮೇಘಾಲಯದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಕಾನ್ರಾಡ್ ಸಂಗ್ಮಾ ಅವರ ಎನ್‌ಪಿಪಿ (ನ್ಯಾಷನಲ್ ಪೀಪಲ್ಸ್ ಪಾರ್ಟಿ), ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಕಣದಲ್ಲಿವೆ.
ಶಿಲ್ಲಾಂಗ್, ಫೆಬ್ರವರಿ. 27: ಮೇಘಾಲಯ ಮತ್ತು ನಾಗಾಲ್ಯಾಂಡ್, ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಆಡಳಿತ ನಡೆಸುತ್ತಿದೆ. ಮೇಘಾಲಯದಲ್ಲಿ, ಕಾನ್ರಾಡ್ ಸಂಗ್ಮಾ ಅವರ ಎನ್‌ಪಿಪಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾದ ಬಳಿಕರ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸುತ್ತಿದ್ದು, ತನ್ನ ಅದೃಷ್ಟ ಪರೀಕ್ಷೆಗೆ ಇಳಿದಿದೆ.
ಮೇಘಾಲಯ ವಿಧಾನಸಭಾ ಚುನಾವಣೆ ಬಹುಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಕಾನ್ರಾಡ್ ಸಂಗ್ಮಾ ಅವರ ಎನ್‌ಪಿಪಿ (ನ್ಯಾಷನಲ್ ಪೀಪಲ್ಸ್ ಪಾರ್ಟಿ), ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಕಣದಲ್ಲಿವೆ. ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಮತ್ತು ಇತರ ಹಲವಾರು ಕಾಂಗ್ರೆಸ್ ಶಾಸಕರ ಪಕ್ಷಾಂತರದ ನಂತರ ತೃಣಮೂಲ ರಾಜ್ಯದಲ್ಲಿ ಅತಿದೊಡ್ಡ ವಿರೋಧ ಪಕ್ಷವಾಗಿದೆ. ಕಳೆದ ಬಾರಿ 21 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಕಾಂಗ್ರೆಸ್ ತನ್ನ ಮತದಾರರನ್ನು ಕಳೆದುಕೊಂಡಂತಿದೆ.

2018 ರಲ್ಲಿ, ಬಿಜೆಪಿ ಕೇವಲ ಎರಡು ಸ್ಥಾನಗಳನ್ನು ಗೆದ್ದಿತು, ಆದರೆ ಎನ್‌ಪಿಪಿಯೊಂದಿಗೆ ಸರ್ಕಾರವನ್ನು ರಚಿಸುವಲ್ಲಿ ಯಶಸ್ವಿಯಾಯಿತು. ಭ್ರಷ್ಟಾಚಾರದ ಆರೋಪದ ಮೇಲೆ ಕಾನ್ರಾಡ್ ಸಂಗ್ಮಾ ಅವರ ಪಕ್ಷದೊಂದಿಗೆ ಭಿನ್ನಾಭಿಪ್ರಾಯದ ನಂತರ ಈ ಬಾರಿ ಅದು 60 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕಾನ್ರಾಡ್ ಸಂಗ್ಮಾ ಅವರ ಪಕ್ಷವು ಮಣಿಪುರದಲ್ಲಿ ಕಳೆದ ವರ್ಷದ ಚುನಾವಣೆಯಲ್ಲಿ ಸ್ಪರ್ಧಿಸಿದ್ದು. ತನ್ನ ಮತ ಹಂಚಿಕೆಯನ್ನು ಸುಧಾರಿಸಿಕೊಂಡಿದೆ. ಇದು ಅರುಣಾಚಲ ಪ್ರದೇಶದಲ್ಲೂ ಸ್ವಲ್ಪ ಅಸ್ತಿತ್ವವನ್ನು ಹೊಂದಿದ್ದು, ನಾಗಾಲ್ಯಾಂಡ್‌ಗೆ ವಿಸ್ತರಿಸಲು ಯೋಜಿಸುತ್ತಿದೆ.
ನಾಗಾಲ್ಯಾಂಡ್‌ನ 60 ವಿಧಾನಸಭಾ ಕ್ಷೇತ್ರಗಳ ಪೈಕಿ 59 ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 2018 ರಲ್ಲಿ ರಾಜ್ಯದ 60 ಸ್ಥಾನಗಳ ಪೈಕಿ 12 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಎನ್‌ಡಿಪಿಪಿ (ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ. ಸೀಟು ಹಂಚಿಕೆ ಒಪ್ಪಂದದ ಪ್ರಕಾರ ಎನ್‌ಡಿಪಿಪಿ 40 ಮತ್ತು ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.
ಆದರೆ, ಬಿಜೆಪಿ ಈಗಾಗಲೇ ತನ್ನ ಖಾತೆಯನ್ನು ತೆರೆದಿದೆ, ಅವರ ಏಕೈಕ ಎದುರಾಳಿ ತನ್ನ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡ ನಂತರ ಅದರ ಅಭ್ಯರ್ಥಿ ಕಜೆಟೊ ಕಿನಿಮಿ ಅಕುಲುಟೊ ವಿಧಾನಸಭಾ ಕ್ಷೇತ್ರದಿಂದ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ಮತ್ತು ನಾಗಾ ಪೀಪಲ್ಸ್ ಫ್ರಂಟ್ 23 ಮತ್ತು 22 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಅಗತ್ಯವಿದ್ದರೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳಬಹುದು ಎಂದು ಕಾಂಗ್ರೆಸ್ ಹೇಳಿದೆ.

ನಾಗಾಲ್ಯಾಂಡ್ ರಾಜ್ಯದಲ್ಲಿ 60 ವಿಧಾನಸಭಾ ಕ್ಷೇತ್ರಗಳು ಇವೆ. ಇಲ್ಲಿ ಪುರುಷರು ಹಾಗೂ ಮಹಿಳೆಯರು ಸೇರಿ ಸರಿ ಸುಮಾರು 13,09,651 ಮತದಾರರು ಇದ್ದಾರೆ. ಅದೇ ರೀತಿ ಮೇಘಾಲಯ ರಾಜ್ಯದಲ್ಲಿ 60 ವಿಧಾನಸಭಾ ಕ್ಷೇತ್ರಗಳಲ್ಲಿ 21,61,129 ಒಟ್ಟು ಮತದಾರರು ಇದ್ದಾರೆ. ಇಲ್ಲಿ 81,443 ಹೊಸ ಮತದಾರರಿದ್ದಾರೆ. ನಾಗಾಲ್ಯಾಂಡ್‌ನಲ್ಲಿ ಈ ಬಾರಿ ನಾಲ್ವರು ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಬಿಗಿ ಭದ್ರತೆಯಲ್ಲಿ ಎರಡೂ ರಾಜ್ಯಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 4ರ ವರೆಗೆ ನಡೆಯಲಿದೆ. ಮಾರ್ಚ್ 2 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬರಲಿದೆ.












Click it and Unblock the Notifications