NEET Update: ವಿದ್ಯಾರ್ಥಿಗಳ ಹಿತ ರಕ್ಷಣೆಗೆ ಕೇಂದ್ರ ಸರ್ಕಾರ ಬದ್ದ: ಬಸವರಾಜ ಬೊಮ್ಮಾಯಿ
ನವದೆಹಲಿ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ರಾಜಕಾರಣ ಹಾಗೂ ಹಿಂಸಾಚಾರ ಅತ್ಯಂತ ಖಂಡನೀಯ. ಇದು ಯಾವುದೇ ವಿದ್ಯಾರ್ಥಿಗೆ ನ್ಯಾಯ ಕೊಡಿಸುವ ಉದ್ದೇಶವನ್ನು ಹೊಂದಿಲ್ಲ. ನ್ಯಾಯ ಕೊಡಿಸಲು ಸಾಧ್ಯವಿಲ್ಲ. ಈ ಸೂಕ್ಷ್ಮ ಸಮಸ್ಯೆಯನ್ನು ಇಟ್ಟುಕೊಂಡು ಪ್ರತಿಪಕ್ಷಗಳು ರಾಜಕೀಯ ರೊಟ್ಟಿ ಬೇಯಿಸಿಕೊಳ್ಳುವ ಪ್ರಯತ್ನ ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಶ್ನೆ ಪತ್ರಿಕೆ ಸೋರಿಕೆಯು ಹಲವು ರಾಜ್ಯಗಳಲ್ಲಿ ಈ ಹಿಂದೆಯೂ ನಡೆದಿದೆ. ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಮುಖ್ಯಮಂತ್ರಿಯಾಗಿದ್ದಾಗ ಹಾಗೂ ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಆಡಳಿತದಲ್ಲಿದ್ದಾಗಲೂ ಹಲವಾರು ಬಾರಿ ಪ್ರಶ್ನೆ ಪತ್ರಿಕೆಗಳು ಲೀಕ್ ಆಗಿದ್ದವು. ಕರ್ನಾಟಕದಲ್ಲಿಯೂ ಕೆಪಿಎಸ್ ಸಿ ಹಾಗೂ ಸಿಇಟಿ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು "ಅಂದು ಯಾರಾದರೂ ರಾಜೀನಾಮೆ ನೀಡಿದ್ದರೇ?" ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ ಪ್ರತಿಯೊಬ್ಬರಿಗೂ ಶಿಕ್ಷೆಯಾಗಲೇಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 'ಎನ್‌ಟಿಎ' ನ 13ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ವ್ಯಕ್ತಿಗಳು ಜೈಲಿನಲ್ಲಿದ್ದಾರೆ. ಇಷ್ಟೊಂದು ವೇಗವಾಗಿ ಕ್ರಮ ಕೈಗೊಂಡಿರುವುದು ಕೇಂದ್ರ ಸರ್ಕಾರವೇ ಮೊದಲು ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಕ್ಕೆ ಯಾವುದೇ ಕೊರತೆಯಾಗದಂತೆ ಅತ್ಯಂತ ವೇಗವಾಗಿ ನೀಟ್ ಮರುಪರೀಕ್ಷೆ ನಡೆಸಲಾಗಿದೆ. ಎರಡನೇ ಬಾರಿ ಪರೀಕ್ಷೆ ನಡೆಸಿದಾಗ ಯಾವುದೇ ಸಣ್ಣ ದೂರು ಕೂಡ ಬಂದಿಲ್ಲ. ಇದು ಪ್ರಧಾನಮಂತ್ರಿಯವರ ಪಾರದರ್ಶಕತೆ ಹಾಗೂ ವಿದ್ಯಾರ್ಥಿಗಳ ಮೇಲಿರುವ ಕಾಳಜಿಗೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.
ಮೆಡಿಕಲ್ ಸೀಟ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ
ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೊಸ ಮೆಡಿಕಲ್ ಕಾಲೇಜುಗಳನ್ನು ಪ್ರಾರಂಭಿಸುವ ಮೂಲಕ ಎಂ.ಬಿ.ಬಿ.ಎಸ್ ಸೀಟ್‌ಗಳ ಸಂಖ್ಯೆಯನ್ನು ನಾಲ್ಕು ಪಟ್ಟು ಹೆಚ್ಚು ಮಾಡಲಾಗಿದೆ. ಇದರಿಂದ ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಅವಕಾಶ ಸಿಕ್ಕಿದೆ. ಅಲ್ಲದೆ, ಶಿಕ್ಷಣಕ್ಕಾಗಿ ಬ್ಯಾಂಕುಗಳಿಂದ ಹಣಕಾಸಿನ ನೆರವು (ಎಜುಕೇಶನ್ ಲೋನ್) ಕೂಡ ಸಿಗುವಂತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ವಿರೋಧ ಪಕ್ಷಗಳಿಗೆ ಸಲಹೆ
ಪ್ರವೇಶ ಪರೀಕ್ಷೆಗಳ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ದಂಧೆ ಮಾಡುತ್ತಿರುವವರೇ ಈ ಪ್ರಶ್ನೆ ಪತ್ರಿಕೆ ಲೀಕ್ ಹಿನ್ನೆಲೆಯಲ್ಲಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿರೋಧ ಪಕ್ಷಗಳು ಈ ವಿಷಯದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು, ಭವಿಷ್ಯದಲ್ಲಿ ಇಂತಹ ಲೋಪಗಳು ಆಗದಂತೆ ತಡೆಯಲು ಹೊಸ ತಂತ್ರಜ್ಞಾನದ ಬಳಕೆ ಹಾಗೂ ಸೂಕ್ತ ಸಲಹೆಗಳನ್ನು ನೀಡಲಿ. ಈ ಹಿಂದೆ ಹಲವಾರು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಆದಾಗ ಈ ಮಟ್ಟದ ಗಲಾಟೆ ಆಗಿರಲಿಲ್ಲ, ಇದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ದೇಶದ ಹಿತದೃಷ್ಟಿಯಿಂದ ಒಳ್ಳೆಯದಲ್ಲ, ವಿದ್ಯಾರ್ಥಿಗಳ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.


Click it and Unblock the Notifications
