Bengal Recruitment Scam: ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಗಂಗೋಪಾಧ್ಯಾಯ
ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣದ ವಿಚಾರಣೆಯಿಂದ ಹಿಂದೆ ಸರಿದಿದ್ದು, ವಿಚಾರಣೆಯನ್ನು ಇನ್ನೊಬ್ಬ ನ್ಯಾಯಾಧೀಶರಿಗೆ ಹಸ್ತಾಂತರಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ ಪ್ರಕರಣದ ವಿಚಾರಣೆಯನ್ನು ಕಲ್ಕತ್ತಾ ಹೈಕೋರ್ಟ್ ನಡೆಸುತ್ತಿದೆ. ಶಾಲೆಗಳಲ್ಲಿ ಸಿಬ್ಬಂದಿ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಿಗೆ ಸಂಬಂಧಿಸಿದ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದರು. ನಂತರ ಸುಪ್ರೀಂ ಕೋರ್ಟ್ ಈ ಕ್ರಮ ಕೈಗೊಂಡಿದೆ.

ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದ ವರದಿಯನ್ನು ಪರಿಶೀಲಿಸಿದ ನಂತರ ಪಶ್ಚಿಮ ಬಂಗಾಳ ಶಾಲಾ ಉದ್ಯೋಗ ಹಗರಣ ಪ್ರಕರಣವನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ಮರು ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಗೆ ಸುಪ್ರೀಂ ಕೋರ್ಟ್ ಇಂದು ಸೂಚಿಸಿದೆ.
ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಮನವಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ಕಲ್ಕತ್ತಾ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅವರ ವರದಿಯನ್ನು ಗಮನಕ್ಕೆ ತೆಗೆದುಕೊಂಡಿತು. ಪ್ರಕರಣವನ್ನು ಬೇರೊಬ್ಬ ನ್ಯಾಯಾಧೀಶರ ನೇತೃತ್ವದ ಪೀಠಕ್ಕೆ ವರ್ಗಾಯಿಸಬೇಕು ಎಂದು ಹೇಳಿದೆ.
"ಪಶ್ಚಿಮ ಬಂಗಾಳ ಶಾಲಾ ನೇಮಕಾತಿ ಹಗರಣದ ವಿಚಾರಣೆಗೆ ಬೇರೆ ನ್ಯಾಯಾಧೀಶರನ್ನು ಮರು-ನಿಯೋಜಿಸಲು ನಿರ್ದೇಶಿಸುತ್ತೇವೆ. ಈ ನಿಟ್ಟಿನಲ್ಲಿ ಯಾರಿಗೆ ವಿಚಾರಣೆಯನ್ನು ನಿಯೋಜಿಸಲಾಗಿದೆಯೋ ಆ ನ್ಯಾಯಾಧೀಶರು ಸಂಬಂಧಪಟ್ಟ ಎಲ್ಲಾ ಅರ್ಜಿಗಳನ್ನು ತೆಗೆದುಕೊಳ್ಳಲು ಸ್ವತಂತ್ರರಾಗಿರುತ್ತಾರೆ'' ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಈ ಹಿಂದೆ ಪಶ್ಚಿಮ ಬಂಗಾಳದ ಶಾಲಾ ಉದ್ಯೋಗಗಳ ಹಗರಣ ಪ್ರಕರಣದ ಬಗ್ಗೆ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದಾರೆಯೇ ಎಂಬ ಬಗ್ಗೆ ಕಲ್ಕತ್ತಾ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ನಿಂದ ವರದಿ ಕೇಳಲಾಗಿತ್ತು.
ಕಲ್ಕತ್ತಾ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ನಿಂದ ವರದಿಯನ್ನ ಪರಿಶೀಲನೆ ಮಾಡಿದ ಬಳಿಕ ಸುಪ್ರೀಂ ಕೋರ್ಟ್ ಈ ಆದೇಶವನ್ನು ನೀಡಿದೆ. ಇದಕ್ಕೂ ಮುನ್ನ, ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರ ಏಕಸದಸ್ಯ ಪೀಠವು ಆಪಾದಿತ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಿಸದಂತೆ ಪಶ್ಚಿಮ ಬಂಗಾಳ ಪೊಲೀಸರಿಗೆ ನಿರ್ದೇಶನ ನೀಡಿತ್ತು.












Click it and Unblock the Notifications