ಬಿಹಾರ ಉಪಚುನಾವಣೆ: ಬಿಜೆಪಿ ಪರ ಪ್ರಚಾರ ಎಂದ ಚಿರಾಗ್ ಪಾಸ್ವಾನ್
ಪಾಟ್ನಾ, ಅ.30: ಬಿಹಾರದಲ್ಲಿ ಮುಂದಿನ ವಾರ ನಡೆಯಲಿರುವ ಒಂದೆರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಘೋಷಿಸಿದ್ದಾರೆ.
ದೆಹಲಿಯಿಂದ ಬಿಹಾರಕ್ಕೆ ಆಗಮಿಸಿದ ಚಿರಾಗ್ ಪಾಸ್ವಾನ್ ಅವರು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮೊಕಾಮಾ ಮತ್ತು ಗೋಪಾಲ್‌ಗಂಜ್‌ನಲ್ಲಿ ಬಿಜೆಪಿಯ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ. ಈ ಕ್ಷೇತ್ರಗಳಲ್ಲಿ ಆರ್‌ಜೆಡಿ ಮತ್ತು ಬಿಜೆಪಿ ನಡುವೆ ತೀವ್ರ ಸ್ಪರ್ಧೆಯಿದೆ.
ಎರಡು ತಿಂಗಳ ಹಿಂದೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್‌ಡಿಎಯನ್ನು ಬಿಟ್ಟು ಆರ್‌ಜೆಡಿ, ಕಾಂಗ್ರೆಸ್ ಜೊತೆಗೆ ಸೇರಿದ್ದಾರೆ. ಹೀಗಾಗಿ ರಾಜ್ಯದಲ್ಲಿ ದುರ್ಬಲಗೊಂಡಿರುವ ಬಿಜೆಪಿಗೆ ಉಪಚುನಾವಣೆ ಮೊದಲ ಶಕ್ತಿ ಪರೀಕ್ಷೆ ಎಂದು ಪರಿಗಣಿಸಲಾಗಿದೆ.

ಇನ್ನು, ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ದ ನಾಯಕ ಚಿರಾಗ್ ಪಾಸ್ವಾನ್, ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.
ಎರಡು ರಾಜ್ಯಗಳಲ್ಲಿ ಸ್ಪರ್ಧಿಸುವ ಸ್ಥಾನಗಳ ಬಗ್ಗೆ ಪಕ್ಷವು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಪಾಸ್ವಾನ್ ಹೇಳಿದ್ದು, ಈ ಸಂಬಂಧ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದ ನಂತರ ಬಿಜೆಪಿ ಆಡಳಿತದ ಎರಡು ರಾಜ್ಯಗಳಲ್ಲಿ ಚುನಾವಣಾ ಕಣಕ್ಕೆ ಇಳಿಯುವ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

''ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಲೋಕ ಜನಶಕ್ತಿ ಪಕ್ಷವು ನಿರ್ಧರಿಸಿದೆ. ಗುಜರಾತ್‌ನಲ್ಲಿ ಪಕ್ಷವು ಸ್ಪರ್ಧಿಸುವ ಸ್ಥಾನಗಳ ಸಂಖ್ಯೆ ಮತ್ತು ಅಭ್ಯರ್ಥಿಗಳ ಪಟ್ಟಿಯ ಕುರಿತು ನಾವು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಚಿರಾಗ್ ಪಾಸ್ವಾನ್ ಹೇಳಿದ್ದಾರೆ.












Click it and Unblock the Notifications