ಬಿಜೆಪಿ ಮುಂದಿನ ರಾಷ್ಟ್ರೀಯ ಅಧ್ಯಕ್ಷರು ಯಾರು? ಈ ಮಹಿಳೆಗೆ ಒಲಿಯುತ್ತಾ ಪಟ್ಟ?: ರೇಸ್‌ನಲ್ಲಿ ಮೂವರು ದಿಗ್ಗಜರು!
ನವದೆಹಲಿ, ಜುಲೈ 04: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಬಹುದಿನಗಳಿಂದ ವಿರೋಧಿ ಬಣ ಬಹಿರಂಗವಾಗಿ ಹೇಳಿಕೆ ನೀಡುತ್ತಿದೆ. ಇತ್ತ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿಯಲ್ಲಿನ ಬಂಡಾಯವನ್ನ ಶಮನಗೊಳಿಸಲು ಸಾಲು ಸಾಲು ಸಭೆ ನಡೆಸುತ್ತಿದ್ದು, ಕೆಲ ರಾಜ್ಯದ ರಾಜ್ಯಾಧ್ಯಕ್ಷರ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ. ಈ ನಡುವೆ ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಹಲವು ಸಭೆಗಳನ್ನ ನಡೆಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿ ಜನವರಿ 2023ಕ್ಕೇ ಕೊನೆಗೊಂಡಿತ್ತು. ಆದರೆ, 2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಜೆ ಪಿ ನಡ್ಡಾ ಅವರ ಅಧಿಕಾರವನ್ನು ಜೂನ್ 2024ರವರೆಗೆ ವಿಸ್ತರಿಸಲಾಗಿತ್ತು. ಚುನಾವಣೆ ಮುಗಿದು ಹಲವು ತಿಂಗಳಾದ ಬಳಿಕ ಇದೀಗ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ ನಡ್ಡಾ, ಕೇಂದ್ರದ ಆರೋಗ್ಯ ಖಾತೆ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದಾರೆ. ಜೆ ಪಿ ನಡ್ಡಾ ಅವರಿಗೆ ಕೇಂದ್ರದ ಸಚಿವ ಸ್ಥಾನದಲ್ಲೇ ಮುಂದುವರಿಯುವ ಇಚ್ಛೆ ಇದೆ. ಹೀಗಾಗಿ ಬಿಜೆಪಿ ರಾಷ್ಟ್ರೀಯ ಘಟಕಕ್ಕೆ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಬಿಜೆಪಿಯ ಘಟಾನುಘಟಿ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ಕುರಿತು ಸಾಲು ಸಾಲು ಸಭೆಗಳನ್ನ ಬಿಜೆಪಿ ಹಾಗೂ ಆರ್ ಎಸ್ ಎಸ್ ನಡೆಸಿದೆ ಎಂಬ ಮಾಹಿತಿ ಲಭ್ಯವಾಗುದ್ದು, ಈ ತಿಂಗಳಲ್ಲೇ ಬಿಜೆಪಿ ರಾಷ್ಟ್ರೀಯ ಘಟಕಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ.

ಬಹುದಿನಗಳಿಂದ ಬಿಜೆಪಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯೇ ಕಗ್ಗಂಟಾಗಿ ಪರಿಣಮಿಸಿದೆ. ರಾಷ್ಟ್ರೀಯ ಅಧ್ಯಕ್ಷರ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಅನ್ನೋ ಗೊಂದಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಮುಳುಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಕರ್ನಾಟಕದವರಾದ ಪ್ರಹ್ಲಾದ್ ಜೋಶಿಯವರಿಗೆ ಪಟ್ಟ ಕಟ್ಟಲು ಬಿಜೆಪಿ ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಇದರ ನಡೆವೆ ಪ್ರಹ್ಲಾದ್ ಜೋಶಿ ಸೇರಿದಂತೆ ಧರ್ಮೇಂದ್ರ ಪ್ರಧಾನ್, ಮನೋಹರ್ ಲಾಲ್ ಖಟ್ಟರ್, ಶಿವರಾಜ್ ಸಿಂಗ್ ಚೌಹಾಣ್ ಒಟ್ಟು 11 ಮಂದಿ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿದ್ದರು. ಆದರೆ, ಬಿಜೆಪಿಯ ಲೆಕ್ಕಾಚಾರವೇ ಬೇರೆ ಇದೆ.
ಹೌದು, ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷ ಹೊಸ ಇತಿಹಾಸ ಬರೆಯಲು ಮುಂದಾಗಿದೆ. ಮೊದಲ ಬಾರಿಗೆ ಮಹಿಳೆಯೊಬ್ಬರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಲು ಬಿಜೆಪಿ ಹೈಕಮಾಂಡ್ ಗಂಭೀರವಾಗಿ ಚಿಂತನೆ ನಡೆಸಿದೆ, ಇದಕ್ಕೆ ಆರ್‌ಎಸ್‌ಎಸ್ ಕೂಡ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಅಧ್ಯಕ್ಷ ಪಟ್ಟದ ರೇಸ್‌ನಲ್ಲಿ ಪ್ರಮುಖವಾಗಿ ಮೂವರು ಮಹಿಳೆಯರ ಹೆಸರು ಕೇಳಿಬರುತ್ತಿದೆ. ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ನಾಯಕತ್ವವು ಮೂವರು ಮಹಿಳೆಯರ ಹೆಸರುಗಳನ್ನು ಪರಿಗಣಿಸಿದೆ ಎಂದು ತಿಳಿದುಬಂದಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಆರ್ ಎಸ್ ಎಸ್ ಸಹ ಮಹಿಳೆಯರಿಗೆ ರಾಷ್ಟ್ರೀಯ ಅಧ್ಯಕ್ಷ ಪಟ್ಟ ಕಟ್ಟಲು ಮುಂದಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ. ಹೊಸ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಮಹಿಳೆಯನ್ನು ಆಯ್ಕೆ ಮಾಡುವಲ್ಲಿ ಕೇವಲ ರಾಜಕೀಯ ಲೆಕ್ಕಾಚಾರ ಮಾತ್ರವಲ್ಲ, ಆರ್‌ಎಸ್‌ಎಸ್ ಸಮ್ಮತಿಯೂ ಇದೆ ಎಂದು ಹೇಳಲಾಗಿದೆ. ಅದರಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಂಸದೆ ಪುರಂದೇಶ್ವರಿ ಮತ್ತು ವನತಿ ಶ್ರೀನಿವಾಸನ್ ಹೆಸರುಗಳು ಮುಂಚೂಣಿಯಲ್ಲಿವೆ.
ಇನ್ನೂ ಈ ಕುರಿತು ಪಕ್ಷದ ಪ್ರಧಾನ ಕಚೇರಿಯಲ್ಲಿ ಪ್ರಸ್ತುತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಈ ವೇಳೆ ಯಾರ ಆಯ್ಕೆ ಉತ್ತಮ ಎಂಬುದನ್ನೂ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಒಟ್ನಾಲಿ ಈ ತಿಂಗಳಲ್ಲಿ ನೂತನ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಯಾರಿಗೆ ಅದೃಷ್ಟ ಒಲಿದು ಬರಲಿದೆ ಎಂಬುದನ್ನ ಕಾದುನೋಡ್ಬೇಕಾಗಿದೆ.












Click it and Unblock the Notifications