ಕಾವೇರಿ ನಿರ್ವಹಣಾ ಮಂಡಳಿ ರಚನೆ : ಸರ್ಕಾರಕ್ಕೆ ಮೇ 3ರ ಗಡುವು
ಬೆಂಗಳೂರು, ಏಪ್ರಿಲ್ 09 : ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಗಡುವು ನೀಡಿದೆ. ಮೇ 3ರೊಳಗೆ ಸರ್ಕಾರ ತನ್ನ ನಿಲುವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿದೆ.
ತಮಿಳುನಾಡು ಸರ್ಕಾರ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಸೋಮವಾರ ನಡೆಯಿತು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಮೇ 3ರೊಳಗೆ ಕೇಂದ್ರ ಸರ್ಕಾರ ಕರಡು ಸಲ್ಲಿಸಬೇಕು ಎಂದು ಸೂಚನೆ ನೀಡಿತು.
ಕೇಂದ್ರ ಸರ್ಕಾರ ಸಲ್ಲಿಸಲಿರುವ ಕರಡು ಪ್ರತಿಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳಿಗೆ ಕಾವೇರಿ ನದಿ ನೀರನ್ನು ಹೇಗೆ ಹಂಚಿಕೆ ಮಾಡಲಾಗುತ್ತದೆ ಎಂದು ವಿವರಣೆ ನೀಡಬೇಕಾಗಿದೆ. ಕೇಂದ್ರ ಸರ್ಕಾರದ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ.

ಫೆ.16ರಂದು ಕಾವೇರಿ ವಿವಾದದ ಕುರಿತು ಅಂತಿಮ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಸೂಚನೆ ನೀಡಿತ್ತು. ಆದರೆ, ಕೇಂದ್ರ ಸರ್ಕಾರ ಮಂಡಳಿ ರಚನೆ ಮಾಡಲು ವಿಫಲವಾಗಿದೆ ಎಂದು ತಮಿಳುನಾಡು ಸರ್ಕಾರ ನ್ಯಾಯಾಂಗ ನಿಂದೆನ ಅರ್ಜಿ ಸಲ್ಲಿಸಿತ್ತು.
ತಮಿಳುನಾಡಿನಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ಪ್ರತಿಭಟನೆಗಳು ನಡೆಯುತ್ತಿವೆ. ಹೊಸ ರಾಜಕೀಯ ಪಕ್ಷಗಳ್ನು ಸ್ಥಾಪನೆ ಮಾಡಿರುವ ನಟ ರಜನಿಕಾಂತ್, ಕಮಲ್ ಹಾಸನ್ ಅವರು ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.












Click it and Unblock the Notifications