ಕೊನೆಗೂ ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್
ನವದೆಹಲಿ, ಜೂನ್ 24: ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿರುವ ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (Market Intervention Scheme-MIS) ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿದ್ದಕ್ಕಾಗಿ ಕೇಂದ್ರದ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನರೇಂದ್ರ ಮೋದಿ ಅವರ ಆಡಳಿತದಲ್ಲಿ ರೈತರ ಉತ್ಪನ್ನಗಳಿಗೆ ಸ್ಥಿರ ಬೆಲೆಯ ಖಾತರಿ ಸದಾ ಇರುತ್ತದೆ ಎಂಬುದನ್ನು ಈ ಉಪಕ್ರಮವು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದ ಒಟ್ಟು 2,50,000 ಮೆಟ್ರಿಕ್ ಟನ್ ಮಾವಿಗೆ ಇದೀಗ ಪರಿಹಾರ ಘೋಷಣೆ ಮಾಡಿದ್ದಾರೆ. ಪ್ರತಿ ಕ್ವಿಂಟಲ್ ಮಾವಿಗೆ 1,616 ರೂಪಾಯಿ ಘೋಷಣೆ ಮಾಡಿದ್ದಾರೆ. ಎಂ ಎಸ್ ಐ ಯೋಜನೆಯ ಅಡಿ ಪರಿಹಾರ ನೀಡಲು ಅನುಮೋದನೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಘೋಷಣೆ ಮಾಡಿದ್ದಾರೆ.
ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಹೆಚ್ ಡಿ ಕುಮಾರಸ್ವಾಮಿ
ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ. ನಫೆಡ್ ಮೂಲಕ ಮಾವು ಖರೀದಿ ಮಾಡಬೇಕು ಹಾಗೂ ತಕ್ಷಣವೇ ಕನಿಷ್ಠ ಬೆಂಬಲ ಬೆಲೆ ಘೊಷಣೆ ಮಾಡಬೇಕು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಕೃಷಿ ಸಚಿವರಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಮಾವು ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾದ ಬೆಲೆ ಸಿಗದ ಕಾರಣಕ್ಕೆ ಮಾವನ್ನು ರಸ್ತೆಗೆ ಸುರಿಯುತ್ತಿದ್ದಾರೆ. ಇಂಥ ಕಷ್ಟಕಾಲದಲ್ಲಿ ತಾವು ರೈತರ ನೆರವಿಗೆ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಕೋರಿದ್ದಾರೆ.
ಸದ್ಯಕ್ಕೆ ಕೇಂದ್ರ ಸರಕಾರ ನೆರವಿಗೆ ಬಾರದಿದ್ದರೆ ಬೆಳೆಗಾರರಿಗೆ ಬೇರೆ ನೆರವಿನ ಖಾತರಿ ಇಲ್ಲ. ಕೂಡಲೇ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ನಫೆಡ್ ಮತ್ತು ಎನ್‍ಸಿಸಿಎಫ್ ಮೂಲಕ ಕೂಡಲೇ ಮಾವು ಖರೀದಿ ಆರಂಭಿಸಬೇಕು, ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ವಿನಂತಿ ಮಾಡಿದ್ದಾರೆ.
ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ. ಮಾವನ್ನು ರಾಜ್ಯದಲ್ಲಿ ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ, ಹೆಚ್ಚಾಗಿ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ರಬಿ ಋತುವಿನಲ್ಲಿ ಅಂದಾಜು 8ರಿಂದ 10 ಲಕ್ಷ ಟನ್ ಮಾವು ಈ ಜಿಲ್ಲೆಗಳಲ್ಲಿ ಬೆಳೆಯಲ್ಪಡುತ್ತದೆ. ದುರದೃಷ್ಟದ ಸಂಗತಿ ಎಂದರೆ, ಹವಾಮಾನ ವೈಪರೀತ್ಯದಿಂದ ರೋಗರುಜಿನ ತಗುಲಿ ಪ್ರಸಕ್ತ ವರ್ಷದಲ್ಲಿ ಮಾವಿನ ಇಳುವರಿ ಶೇ.30ರಷ್ಟು ಕಡಿಮೆಯಾಗಿದೆ ಎಂಬ ಅಂಶವನ್ನು ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.












Click it and Unblock the Notifications