ಕೊರೊನಾವೈರಸ್ ನಿಯಂತ್ರಣಕ್ಕೆ ಅಮಿತ್ ಶಾ ಮೂರು ಮಂತ್ರ!
ನವದೆಹಲಿ, ನವೆಂಬರ್.24: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಮತ್ತು ಲೆಫ್ಟಿನೆಂಟ್ ಗವರ್ನರ್ ಜೊತೆ ನಡೆಸಿದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಕ್ ಸಂದೇಶ ರವಾನಿಸಿದ್ದಾರೆ.
ದೇಶದ ಕೊವಿಡ್-19 ಪರಿಸ್ಥಿತಿ ಸಮಾಲೋಚನೆ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಕೇಂದ್ ಗೃಹ ಸಚಿವ ಅಮಿತ್ ಶಾ ಕೂಡಾ ಹಾಜರಾಗಿದ್ದರು. ಈ ವೇಳೆ ಮಾತನಾಡಿದ ಅಮಿತ್ ಶಾ, ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಿಎಂ ಹಾಗೂ ಲೆಫ್ಟಿನೆಂಟ್ ಗವರ್ನರ್ ಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ.
"ಕೇಂದ್ರದ ಆಸ್ಪತ್ರೆಗಳಲ್ಲಿ ಕೊವಿಡ್-19 ರೋಗಿಗಳಿಗೆ ಹಾಸಿಗೆ ಮೀಸಲಿರಿಸಿ"
ದೇಶದಲ್ಲಿ ಕೊವಿಡ್-19 ಸೋಂಕಿನಿಂದ ಮೃತಪಡುತ್ತಿರುವವರ ಪ್ರಮಾಣ ಶೇ.1ರಷ್ಟಿದೆ. ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆಯು ಈಗಿರುವುದಕ್ಕಿಂತ ಶೇ.5ರಷ್ಟು ಕೂಡಾ ಏರಿಕೆಯಾಗದ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಕಂಟೇನ್ಮೆಂಟ್ ಝೋನ್ ಗಳ ರಚನೆ
ದೇಶದ ಪ್ರತಿಯೊಂದು ರಾಜ್ಯಗಳಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಹೆಚ್ಚಾಗಿರುವ ಪ್ರದೇಶವನ್ನು ಕಂಟೇನ್ಮೆಂಟ್ ಝೋನ್ ಗಳಾಗಿ ಪರಿವರ್ತಿಸಬೇಕು. ನಿರ್ದಿಷ್ಟ ಪ್ರದೇಶದ ಸ್ಥಿತಿಗತಿಗಳಲ್ಲಿ ಬದಲಾವಣೆ ಮಾಡಬೇಕು. ಈ ಪ್ರದೇಶಗಳ ಮೇಲೆ ವಿಶೇಷ ಲಕ್ಷ್ಯ ವಹಿಸಬೇಕು. ಪ್ರಸ್ತುತ ಪ್ರತಿ 15 ದಿನಗಳಿಗೊಮ್ಮೆ ಕಂಟೇನ್ಮೆಂಟ್ ಝೋನ್ ಗಳಲ್ಲಿನ ಅಂಕಿ-ಅಂಶಗಳನ್ನು ಸಂಗ್ರಹಿಸಲಾಗುತ್ತಿದೆ. ಆದರೆ ಇನ್ಮುಂದೆ ಪ್ರತಿವಾರಕ್ಕೊಮ್ಮೆ ಕೆಂಪು ವಲಯಗಳಲ್ಲಿ ಕೊವಿಡ್-19 ಸೋಂಕಿನ ಕುರಿತು ಅಂಕಿ-ಅಂಶಗಳನ್ನು ಸಂಗ್ರಹಿಸಬೇಕು. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ವ್ಯಾಪ್ತಿಯಲ್ಲಿ ಸಾಧ್ಯವಾದಷ್ಟು ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದ ಸುಪ್ರೀಂಕೋರ್ಟ್
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 91 ಲಕ್ಷದ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಚಾಟಿ ಬೀಸಿತ್ತು. ದೆಹಲಿ, ಮಹಾರಾಷ್ಟ್ರ, ಗುಜರಾತ್ ಮತ್ತು ಅಸ್ಸಾಂನಲ್ಲಿ ಕೊವಿಡ್-19 ಸಂಖ್ಯೆ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗುವ ಅಪಾಯವಿದೆ. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ನಿಟ್ಟಿನಲ್ಲಿ ಹೇಗೆ ಸಿದ್ಧತೆಗಳನ್ನು ಮಾಡಿಕೊಂಡಿವೆ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿತ್ತು. ನ್ಯಾ. ಅಶೋಕ್ ಭೂಷಣ್ ನೇತೃತ್ವದ ತ್ರಿಸದಸ್ಯ ಪೀಠವು ಎರಡು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು.

ಪ್ರಧಾನಿ ಮೋದಿ ಎದುರಿಗೆ ಅರವಿಂದ್ ಕೇಜ್ರಿವಾಲ್ ಪ್ರಸ್ತಾವನೆ
ಕೊರೊನಾವೈರಸ್ ಸೋಂಕಿನ ಮೂರನೇ ಅಲೆಯಲ್ಲಿ ನವದೆಹಲಿ ತತ್ತರಿಸಿ ಹೋಗಿರುವ ಬಗ್ಗೆ ಪ್ರಧಾನಿಯವರಿಗೆ ಸಿಎಂ ಅರವಿಂದ್ ಕೇಜ್ರಿವಾಲ್ ಮಾಹಿತಿ ನೀಡಿದರು. ಕಳೆದ ನವೆಂಬರ್.10ರಂದು ಒಂದೇ ದಿನ 8600 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ 1000 ಹೆಚ್ಚುವರಿ ತುರ್ತು ನಿಗಾ ಘಟಕದ ಹಾಸಿಗೆಗಳನ್ನು ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಮೀಸಲು ಇರಿಸುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೋರಿದ್ದಾರೆ. ಕೊರೊನಾವೈರಸ್ ಜೊತೆಗೆ ವಾಯುಮಾಲಿನ್ಯ ಸಮಸ್ಯೆ ಕೂಡಾ ಹೆಚ್ಚಾಗಿ ಕಾಡುತ್ತಿದೆ. ಅಕ್ಕಪಕ್ಕದ ರಾಜ್ಯಗಳಲ್ಲಿ ಬೆಳೆಗಳನ್ನು ಸುಡುವುದರಿಂದ ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯ ಹೆಚ್ಚುತ್ತಿದ್ದು, ಜನರು ಉಸಿರಾಡುವುದಕ್ಕೂ ಕಷ್ಟ ಎನ್ನುವಂತಾ ಸ್ಥಿತಿ ನಿರ್ಮಾಣವಾಗುತ್ತಿದೆ. ನೆರೆರಾಜ್ಯಗಳಲ್ಲಿ ಬೆಳೆಗಳನ್ನು ಸುಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಕೋರಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ಇದ್ದವರು?
ಮಂಗಳವಾರ ಎರಡು ಹಂತಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳ ಜೊತೆಗೆ ಸಮಾಲೋಚನೆ ನಡೆಸಿದರು. ಮೊದಲ ಹಂತದಲ್ಲಿ ಕೊವಿಡ್-19 ನಿಂದ ಅಪಾಯಕ್ಕೆ ಸಿಲುಕಿರುವ ಪ್ರಮುಖ 8 ರಾಜ್ಯಗಳ ಸಿಎಂಗಳ ಜೊತೆಗೆ ಚರ್ಚಿಸಿದರು. 2ನೇ ಹಂತದಲ್ಲಿ ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಚರ್ಚಿಸಿದರು. ಪ್ರಧಾನಿ ಮೋದಿ ಜೊತೆಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆಲ್, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.