Siddaramaiah: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ: ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ
ನವದೆಹಲಿ, ಜನವರಿ 15: ರಾಜ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಕೈ ಪಾಳಯದಲ್ಲಿ ಹಲವು ದಿನಗಳಿಂದ ಗುಸು ಗುಸು ಚರ್ಚೆ ನಡೆಯುತ್ತಿತ್ತು. ಇದೀಗ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಬದಲಾಗಬೇಕು ಎಂದು ಅಭಿಪ್ರಾಯಪಟ್ಟಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.
ಬುಧವಾರ ನವದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಕುರಿತು ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಭಾಷಣ ಉತ್ತಮವಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಶಂಕುಸ್ಥಾಪನೆಗೊಂಡಿದ್ದ ಕಟ್ಟಡ , ಇಂದು ಸುಸಜ್ಜಿತ ಕಟ್ಟಡವಾಗಿ ಉದ್ಘಾಟನೆಗೊಂಡಿದೆ ಎಂದು ತಿಳಿಸಿದರು.
ಆರ್ ಎಸ್ ಎಸ್ ಪ್ರಮುಖ ಮೋಹನ್ ಭಾಗವತ್ ಅವರು ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿಯೂ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದೇ ಆರ್ ಎಸ್ ಎಸ್ ಹಾಗೂ ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು. ಮೋಹನ್ ಭಾಗವತರ ಹೇಳಿಕೆ ಸರಿಯಾದುದಲ್ಲ ಎಂದರು.
ಕಿಯೋನಿಕ್ಸ್ ಅಸೋಸಿಯೇಷನ್ ಅವರು ಬಾಕಿ ಇರುವ ಬಿಲ್ಲುಗಳು ಪಾವತಿಯಾಗದಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದಿನ ಬಿಜೆಪಿ ಸರ್ಕಾರದವರು ದೊಡ್ಡ ಮೊತ್ತದ ಬಿಲ್ಲುಗಳನ್ನು ಪಾವತಿ ಮಾಡದೇ ಬಾಕಿ ಉಳಿಸಿದ್ದಾರೆ. ಈ ಬಿಲ್ಲುಗಳನ್ನು ಹಂತ ಹಂತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಹದಿನೈದನೇ ಹಣಕಾಸು ಆಯೋಗ ಕರ್ನಾಟಕದ ತೆರಿಗೆ ಪಾಲನ್ನು ಶೇ.4.73ರಿಂದ ಶೇಕಡಾ 3.64ಕ್ಕೆ ಇಳಿಸಿದೆ. ಇದರಿಂದ ಕಳೆದ ಐದು ವರ್ಷಗಳಲ್ಲಿ 79,770 ಕೋಟಿ ರೂಪಾಯಿಯನ್ನು ಕರ್ನಾಟಕ ಕಳೆದುಕೊಂಡಿದೆ. ಈ ಅನ್ಯಾಯಕ್ಕೆ ಪರಿಹಾರವಾಗಿ ರೂ.5,495 ಕೋಟಿ ವಿಶೇಷ ಅನುದಾನ ನೀಡಬೇಕೆಂಬ ಹಣಕಾಸು ಆಯೋಗದ ಶಿಫಾರಸನ್ನು ಕೂಡಾ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ತಿರಸ್ಕರಿಸಿ ಕರ್ನಾಟಕಕ್ಕೆ ಅನ್ಯಾಯ ಎಸಗಿದ್ದಾರೆ.
ಇದು ಕರ್ನಾಟಕದ ಪ್ರಾಮಾಣಿಕ ತೆರಿಗೆದಾರರಿಗೆ ಮಾಡಿರುವ ಘೋರ ಅನ್ಯಾಯವಲ್ಲವೇ? ಈ ಅನ್ಯಾಯವನ್ನು ಖಂಡಿಸಬೇಕಾಗಿರುವ ರಾಜ್ಯದ ಬಿಜೆಪಿ ನಾಯಕರು ನಿರ್ಲಜ್ಜರಾಗಿ ಸಮರ್ಥಿಸುತ್ತಿರುವುದು ಕನ್ನಡಿಗರಿಗೆ ಬಗೆಯುತ್ತಿರುವ ದ್ರೋಹವಾಗಿದೆ. ಇವರ ಆರ್ಭಟವೇನಿದ್ದರೂ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಲು ಮತ್ತು ಬೀದಿಗಳಲ್ಲಿ ಪರಸ್ಪರ ಕಚ್ಚಾಡಲು ಸೀಮಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.












Click it and Unblock the Notifications