Haryana assembly election 2024: ಹರ್ಯಾಣದಲ್ಲಿ ಎಎಪಿ, ಕಾಂಗ್ರೆಸ್ ಮೈತ್ರಿ, ಸೀಟು ಹಂಚಿಕೆ ಲೆಕ್ಕಾಚಾರ

ನವದೆಹಲಿ, ಸೆಪ್ಟೆಂಬರ್ 09: 'ಇಂಡಿಯಾ' ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಹರ್ಯಾಣ ವಿಧಾನಸಭೆ ಚುನಾವಣೆ 2024ಕ್ಕೆ ಮೈತ್ರಿ ಮಾಡಿಕೊಳ್ಳಲಿವೆ. ಸೀಟು ಹಂಚಿಕೆ ಕುರಿತು ಸೋಮವಾರ ಅಧಿಕೃತ ಘೋಷಣೆಯಾಗಲಿದೆ. ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಸೆಪ್ಟೆಂಬರ್ 12 ಕೊನೆಯ ದಿನವಾಗಿದೆ. 90 ಕ್ಷೇತ್ರಗಳನ್ನು ಹೊಂದಿರುವ ಹರ್ಯಾಣ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ 32 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಹರ್ಯಾಣ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ.

Congress AAP Alliance For Haryana Assembly Elections 2024 Seat Sharing

ಕಾಂಗ್ರೆಸ್ ಮತ್ತು ಎಎಪಿ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆ ಭಾನುವಾರ ಮುಕ್ತಾಯವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ಸೋಮವಾರ ಈ ಕುರಿತು ಅಧಿಕೃತವಾದ ಘೋಷಣೆಯಾಗಲಿದೆ. ರಾಜ್ಯದಲ್ಲಿ 10 ಸೀಟುಗಳು ಬೇಕು ಎಂದು ಎಎಪಿ ಬೇಡಿಕೆ ಇಟ್ಟಿತ್ತು. ಅಂತಿಮವಾಗಿ ಕಾಂಗ್ರೆಸ್ 5 ಕ್ಷೇತ್ರಗಳನ್ನು ಬಿಟ್ಟುಕೊಡಲು ಒಪ್ಪಿಗೆ ನೀಡಿದೆ ಎಂಬ ಮಾಹಿತಿ ಇದೆ.

ನಾಯಕರ ಮಾತುಕತೆ: ಹರ್ಯಾಣದಲ್ಲಿ ಸೀಟು ಹಂಚಿಕೆ ಕುರಿತು ಎಎಪಿ ನಾಯಕ, ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಮತ್ತು ಹರ್ಯಾಣ ಕಾಂಗ್ರೆಸ್ ಉಸ್ತುವಾರಿ ದೀಪಕ್ ಬಾಬಬರಿಯಾ ಸರಣಿ ಸಭೆಗಳನ್ನು ಭಾನುವಾರ ನಡೆಸಿದ್ದರು. ಸೋಮವಾರ ಮೈತ್ರಿಯ ಸ್ಪಷ್ಟ ಚಿತ್ರಣ ಸಿಗಲಿದ್ದು, ಐದು ಕ್ಷೇತ್ರಗಳು ಎಎಪಿಗೆ ಸಿಲಿವೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.

ರಾಘವ್ ಛಡ್ಡಾ ಭಾನುವಾರ ಮಾತನಾಡಿ, "ಕಾಂಗ್ರೆಸ್ ಮತ್ತು ಎಎಪಿ ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗಿಟ್ಟು, ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿವೆ. ಸೀಟು ಹಂಚಿಕೆ ಬಗ್ಗೆ ಒಮ್ಮತ ಮೂಡದಿದ್ದರೂ ಸಹ, ಸೀಟು ಹಂಚಿಕೆ ಚರ್ಚೆ ಸಕಾರಾತ್ಮಕ ದಿಕ್ಕಿನಲ್ಲಿ ಸಾಗಿದೆ" ಎಂದು ಹೇಳಿದ್ದರು.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಪ್ರಾದೇಶಿಕ ಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಹರ್ಯಾಣದಲ್ಲಿಯೂ ಮೈತ್ರಿ ಮಾಡಿಕೊಳ್ಳಬೇಕು ಎಂದು ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದರು.

ಕಾಂಗ್ರೆಸ್ ಪಕ್ಷ ಈಗಾಗಲೇ ಹರ್ಯಾಣ ವಿಧಾನಸಭೆ ಚುನಾವಣೆಗೆ 32 ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಕಾಂಗ್ರೆಸ್ ಪಕ್ಷಕ್ಕೆ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಸೇರಿದ್ದಾರೆ. ವಿನೇಶ್ ಫೋಗಟ್‌ಗೆ ಜೂಲಾನಾ ಕ್ಷೇತ್ರದಿಂದ ಕಣಕ್ಕಿಳಿಯಲು ಪಕ್ಷ ಟಿಕೆಟ್ ನೀಡಿದೆ.

ಎಎಪಿ ಪಕ್ಷದ ಜೊತೆ ಸೀಟು ಹಂಚಿಕೆ ಲೆಕ್ಕಾಚಾರ ಅಂತಿಮಗೊಂಡರೆ ಕಾಂಗ್ರೆಸ್ ಪಕ್ಷ ಉಳಿದ ಕ್ಷೇತ್ರಗಳಿಗೆ ಸಹ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ರಾಜ್ಯದ ಸರ್ಕಾರ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಅಂದಾಜಿಸಿವೆ.

ಬಿಜೆಪಿ ರಾಜ್ಯದಲ್ಲಿ ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸುತ್ತಿದೆ. ಚುನಾವಣೆಗೆ 67 ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಪಕ್ಷ ಬಿಡುಗಡೆ ಮಾಡಿದೆ. ಆದರೆ ಹಲವು ಹಿರಿಯ ನಾಯಕರಿಗೆ ಟಿಕೆಟ್ ಕೈತಪ್ಪಿದ್ದು, ಕೆಲವು ನಾಯಕರು ಪಕ್ಷವನ್ನು ತೊರೆದಿದ್ದಾರೆ. ಇದು ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಹಿನ್ನಡೆ ಉಂಟು ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+