ಜಮ್ಮು & ಕಾಶ್ಮೀರ: ಮತದಾನದ ದಿನವೇ ಪಕ್ಷದ ನಾಯಕರಿಗೆ ಕಾಂಗ್ರೆಸ್ ಶಾಕ್
ಶ್ರೀನಗರ, ಸೆಪ್ಟೆಂಬರ್ 18: ಜಮ್ಮು ಮತ್ತು ಕಾಶ್ಮೀರದ 24 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಮತದಾನ ನಡೆಯುತ್ತಿದೆ. 90 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತದಲ್ಲಿ ಮತದಾನ ನಡೆಯುತ್ತಿದ್ದು, ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ಮತದಾನದ ದಿನವೇ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಪಕ್ಷದ ನಾಯಕರಿಗೆ ಶಾಕ್ ನೀಡಿದೆ.
ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಘಟಕ ಜಿಲ್ಲಾಧ್ಯಕ್ಷರು ಮತ್ತು ಇತರ ಇಬ್ಬರು ನಾಯಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆಗೊಳಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಈ ನಾಯಕರು ಪಕ್ಷದ ಶಿಸ್ತು ಉಲ್ಲಂಘನೆ ಮಾಡಿ, ಪಕ್ಷದ ಅಭ್ಯರ್ಥಿ ವಿರುದ್ಧವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಕಾಂಗ್ರೆಸ್ ಪಕ್ಷ ಬುಧವಾರ ಶ್ರೀನಗರ ಜಿಲ್ಲಾ ಅಧ್ಯಕ್ಷ ಇಮ್ತಿಯಾಜ್ ಅಹಮದ್ ಖಾನ್ ಮತ್ತು ಇಬ್ಬರು ನಾಯಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ. ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿ ಮಾಡಿಕೊಂಡು ಸೀಟು ಹಂಚಿಕೊಂಡಿವೆ. ಆದರೆ ಈ ನಾಯಕರು ಪಕ್ಷದ ನಿಯಮಕ್ಕೆ ವಿರುದ್ಧವಾಗಿ ನಡೆದು, ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು.
ಹೇಗಿದೆ ಸೀಟು ಹಂಚಿಕೆ?; ಜಮ್ಮು ಮತ್ತು ಕಾಶ್ಮೀರದಲ್ಲಿ 90 ವಿಧಾನಸಭಾ ಕ್ಷೇತ್ರಗಳಿವೆ. ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1ರಂದು ಮೂರು ಹಂತದಲ್ಲಿ ಮತದಾನ ನಡೆಯುತ್ತಿದೆ. ಚುನಾವಣೆಗೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಚುನಾವಣಾ ಪೂರ್ವ ಮೈತ್ರಿಯನ್ನು ಮಾಡಿಕೊಂಡಿವೆ. ಕಾಂಗ್ರೆಸ್ 32 ಮತ್ತು ನ್ಯಾಷನಲ್ ಕಾನ್ಫರೆನ್ಸ್ 51 ಸೀಟುಗಳನ್ನು ಹಂಚಿಕೆ ಮಾಡಿಕೊಂಡಿವೆ.
2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟದ ಭಾಗವಾಗಿದ್ದ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಂಡು ಬಿಜೆಪಿಯನ್ನು ಎದುರಿಸುತ್ತಿದೆ. ಆದರೆ ಕಾಂಗ್ರೆಸ್‌ನ ಕೆಲವು ನಾಯಕರು ಈ ಮೈತ್ರಿಕೂಟದ ವಿರುದ್ಧವಾಗಿ ಹೋಗಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
ಚುನಾವಣಾ ಪೂರ್ವ ಮೈತ್ರಿಯ ಹೊರತಾಗಿಯೂ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು 5 ಸೀಟುಗಳು ಶಿಸ್ತು ಮತ್ತು ಸ್ನೇಹಯುತವಾಗಿ ಕಣಕ್ಕಿಳಿದಿವೆ. ಎರಡೂ ಪಕ್ಷಗಳು ತಲಾ ಒಂದು ಸೀಟನ್ನು ಸಿಪಿಐ(ಎಂ) ಮತ್ತು ಪಿಪಿ ಪಕ್ಷಕ್ಕೆ ಬಿಟ್ಟುಕೊಟ್ಟಿವೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶ್ರೀನಗರಕ್ಕೆ ತೆರಳಿ ಫಾರೂಕ್ ಅಬ್ದುಲ್ಲಾ ಮತ್ತು ಉಮರ್ ಅಬ್ದುಲ್ಲಾ ಜೊತೆ ಮಾತುಕತೆ ನಡೆಸಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳ ಮೈತ್ರಿಯನ್ನು ಘೋಷಣೆ ಮಾಡಿದ್ದರು. ಬಳಿಕ ಸೀಟು ಹಂಚಿಕೆ ನಡೆದಿತ್ತು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರ 2019ರ ಆಗಸ್ಟ್ 5ರಂದು ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಕಲ್ಪಿಸಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿತ್ತು. ಬಳಿಕ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂದು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆ ಮಾಡಲಾಗಿದೆ.
ಈ ಐತಿಹಾಸಿಕ ತೀರ್ಮಾನದ ಬಳಿಕ ಮೊದಲ ಬಾರಿಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಆದ್ದರಿಂದ ಬಿಜೆಪಿ ಮತ್ತು ಕಾಂಗ್ರೆಸ್ ಪ್ರತಿಷ್ಠೆಯಾಗಿ ಚುನಾವಣೆಯನ್ನು ತೆಗೆದುಕೊಂಡಿವೆ. ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ. ಬಿಜೆಪಿ ಪಕ್ಷೇತರ ಅಭ್ಯರ್ಥಿಗಳ ಬೆಂಬಲ ಪಡೆಯುವ ಆಯ್ಕೆಯನ್ನು ಇಟ್ಟುಕೊಂಡಿದೆ.












Click it and Unblock the Notifications