Breaking: ಪ್ರಮುಖ ಹುದ್ದೆಗೆ ಕಾಂಗ್ರೆಸ್‌ನ ಆನಂದ್ ಶರ್ಮಾ ರಾಜೀನಾಮೆ
ಶಿಮ್ಲಾ, ಆಗಸ್ಟ್ 21: ಹಿಮಾಚಲ ವಿಧಾನಸಭಾ ಚುನಾವಣೆಯ ಉಸ್ತುವಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು ರಾಜೀನಾಮೆ ಸಲ್ಲಿಸಿದ್ದಾರೆ.
ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಮುನ್ನಾ ನಿರ್ಧಾರ ಕೈಗೊಂಡಿರುವ ಅವರು ಚುನಾವಣೆಯ ಉಸ್ತುವಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಆದರೆ, ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಪಾಲ್ಗೊಳ್ಳುವುದಾಗಿ ಆನಂದ್ ಶರ್ಮಾ ಭರವಸೆ ನೀಡಿದ್ದಾರೆ.

ಇತ್ತಿಚೆಗೆ "ಜಿ-23" ಎಂದು ಕರೆಯಲ್ಪಡುವ ಭಿನ್ನಮತೀಯರ ಗುಂಪಿನ ಇನ್ನೊಬ್ಬ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಕೆಲವು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸಮಾಲೋಚನೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿರುವ ಆನಂದ್ ಶರ್ಮಾ, ರಾಜ್ಯದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮುಂದುವರಿಸುವುದಾಗಿ ಕಾಂಗ್ರೆಸ್ ಮುಖ್ಯಸ್ಥರಿಗೆ ತಿಳಿಸಿದ್ದಾರೆ.
ಮಾಜಿ ಕೇಂದ್ರ ಸಚಿವರು ಮತ್ತು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಉಪ ನಾಯಕರಾಗಿರುವ ಅವರನ್ನು ಏಪ್ರಿಲ್ 26 ರಂದು ಹಿಮಾಚಲ ಪ್ರದೇಶದ ಚುನಾವಣೆಯ ಉಸ್ತುವಾರಿ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.
ಗುಲಾಂ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಇಬ್ಬರೂ G-23 ಗುಂಪಿನ ಪ್ರಮುಖ ನಾಯಕರಾಗಿದ್ದು, ಪಕ್ಷದ ನಾಯಕತ್ವದ ನಿರ್ಧಾರಗಳನ್ನು ಟೀಕಿಸಿದ್ದಾರೆ.
ಭೂಪಿಂದರ್ ಸಿಂಗ್ ಹೂಡಾ ಮತ್ತು ಮನೀಶ್ ತಿವಾರಿ ಸೇರಿದಂತೆ ಪ್ರಮುಖ ಅನುಭವಿಗಳನ್ನು ಒಳಗೊಂಡಿರುವ ಈ ಗುಂಪು ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ನಿಜವಾದ ಚುನಾವಣೆ ನಡೆಸುವಂತೆ ಒತ್ತಾಯಿಸುತ್ತಿದೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಗೌರವಾನ್ವಿತ ನಾಯಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಆನಂದ್ ಶರ್ಮಾ, ಪಕ್ಷದ ಯಾವುದೇ ಸಭೆಗಳಿಗೆ ತಮ್ಮನ್ನು ಆಹ್ವಾನಿಸದಿರುವುದು ಮತ್ತು ಸಮಾಲೋಚನೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಿರುವುದರಿಂದ ಆತ್ಮಗೌರವಕ್ಕೆ ಧಕ್ಕೆಯಾಗಿದೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಕಾಂಗ್ರೆಸ್ ಅಧ್ಯಕ್ಷರಿಗೆ ತಿಳಿಸಿದ್ದಾರೆ.
ಈ ವರ್ಷಾಂತ್ಯದಲ್ಲಿ ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಳ್ಳುವ ಭರವಸೆಯನ್ನು ಕಾಂಗ್ರೆಸ್ ಹೊಂದಿದೆ.
ಆನಂದ್ ಶರ್ಮಾ 1982 ರಲ್ಲಿ ಮೊದಲ ಬಾರಿಗೆ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. 1984 ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರಿಂದ ರಾಜ್ಯಸಭಾ ಟಿಕೆಟ್ ಪಡೆದ ಆನಂದ್ ಶರ್ಮಾ, ಅಂದಿನಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಲವಾರು ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದಾರೆ.












Click it and Unblock the Notifications