Breaking: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿಗೆ ಗಂಟೆಗೆ ಇಬ್ಬರು ಸಾವು!
ನವದೆಹಲಿ, ಜುಲೈ 28: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಯಿತು ಎನ್ನುವಷ್ಟರಲ್ಲೇ 20 ಸಾವಿರ ಗಡಿ ದಾಟಿದೆ. ಹೊಸ ಪ್ರಕರಣಗಳ ಸಂಖ್ಯೆಯಲ್ಲಿನ ಏರಿಳಿತ ಜನರಲ್ಲಿ ಆತಂಕ ಹೆಚ್ಚಿಸುತ್ತಿದ್ದರೆ, ಗಂಟೆಗೆ ಇಬ್ಬರು ಸೋಂಕಿನಿಂದ ಪ್ರಾಣ ಬಿಡುತ್ತಿದ್ದಾರೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20557 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 44 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 19,216 ಸೋಂಕಿತರು ಗುಣಮುಖರಾಗಿದ್ದಾರೆ.
ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,959,321ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,286,787 ಸೋಂಕಿತರು ಗುಣಮುಖರಾಗಿದ್ದು, 526,211 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 146,323ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ವೈರಸ್ ಪಾಸಿಟಿವಿಟಿ ದರ ಶೇ. 5.81ರಷ್ಟಿದೆ:
ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 3,96,783 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 87,40,08,037 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಈ ಹಂತದಲ್ಲಿ ಕಳೆದ ಒಂದು ದಿನದಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ. 5.81ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೊರೊನಾ ವೈರಸ್ ಸೋಂಕಿನಿಂದ ರಕ್ಷಣೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಲಸಿಕೆಯನ್ನು ವಿತರಣೆ ಮಾಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 42,20,625 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ದೇಶದಲ್ಲಿ ಒಟ್ಟು ಇದುವರೆಗೂ 203,21,82,347 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications