Remal Cyclone; ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ
ನವದೆಹಲಿ, ಮೇ 26: ಭಾರತದಲ್ಲಿ ನೈಋತ್ಯ ಮುಂಗಾರು ಮಳೆ ಆರಂಭಕ್ಕೂ ಮುನ್ನ ರೆಮಲ್ ಚಂಡಮಾರುತ ಅಪ್ಪಳಿಸಲಿದೆ. ವಿವಿಧ ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.
ಭಾನುವಾರ ಪ್ರಧಾನಿ ನರೇಂದ್ರ ಮೋದಿ ರೆಮಲ್ ಚಂಡಮಾರುತ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಉನ್ನತ ಮಟ್ಟದ ಸಭೆಯನ್ನು ನಡೆಸಿದರು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮಧ್ಯರಾತ್ರಿ ಚಂಡಮಾರುತ ದೇಶಕ್ಕೆ ಆಗಮಿಸಲಿದೆ.

ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ನಡುವಿನ ಸಮುದ್ರಕ್ಕೆ ಭಾನುವಾರ ಮಧ್ಯರಾತ್ರಿ ರೆಮಲ್ ಚಂಡಮಾರುತ ಅಪ್ಪಳಿಸಲಿದೆ. ತ್ರಿಪುರ ರಾಜ್ಯದಲ್ಲಿಯೂ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಪ್ರಧಾನಿ ಮೋದಿ ಸಭೆ: ರೆಮಲ್ ಚಂಡಮಾರುತ ಎದುರಿಸಲು ಪಶ್ಚಿಮ ಬಂಗಾಳ ಸರ್ಕಾರ ಈಗಾಗಲೇ ಸಿದ್ಧತೆಗಳನ್ನು ಕೈಗೊಂಡಿದೆ. ಗಂಟೆಗೆ ಸುಮಾರು 80 ರಿಂದ 90 ಕಿ. ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 26, 27ರಂದು ಭಾರೀ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ಹಲವು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಸಮುದ್ರ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಜನರ ಸಂಚಾರ ನಿರ್ಬಂಧಿಸಲಾಗಿದೆ.
ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಲ್ಲಿ ಭಾನುವಾರ ಮತ್ತು ಸೋಮವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೋಲ್ಕತ್ತಾ, ಹೌರಾ, ನಾಡಿಯಾ, ಪುರ್ಬಾ, ಮೇದಿನಿಪುರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರೆಮಲ್ ಚಂಡಮಾರುತದ ಪರಿಣಾಮ ಈಶಾನ್ಯ ಭಾರತದ ಕೆಲವು ರಾಜ್ಯಗಳಲ್ಲಿಯೂ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಬಾಂಗ್ಲಾದೇಶದ ಮತ್ತು ಪಶ್ಚಿಮ ಬಂಗಾಳ ಗಡಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗುವ ಮುನ್ಸೂಚನೆ ನೀಡಲಾಗಿದೆ.
ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆಯನ್ನು ನಡೆಸಿದ ಪ್ರಧಾನಿ ನರೇಂದ್ರ ಮೋದಿ ರಾಜ್ಯಗಳು ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಮಾಹಿತಿ ಪಡೆದರು. ವಿದ್ಯುತ್, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು. ಚುನವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಹ ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಪರಿಹಾರ ಕಾರ್ಯಕ್ಕೆ ಅದು ಅಡ್ಡಿಯಾಗುವುದಿಲ್ಲ ಎಂದು ಸೂಚಿಸಿದರು.
ರೆಮಲ್ ಚಂಡಮಾರುತದಿಂದ ಒಡಿಶಾ, ಮೇಘಾಲಯ, ತ್ರಿಪುರಾ, ಅಸ್ಸಾಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ದಕ್ಷಿಣ ಮಣಿಪುರದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಮೇಲೆಯೂ ಚಂಡಮಾರುತ ಪ್ರಭಾವ ಬೀರಿದ್ದು, ಪೂರ್ವ ಮುಂಗಾರು ಮಳೆ ಕಡಿಮೆಯಾಗಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಗಾಳಿ ಸಹಿತ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಮಾನಗಳು ರದ್ದು: ರೆಮಲ್ ಚಂಡಮಾರುತದ ಹಿನ್ನಲೆಯಲ್ಲಿ ಕೋಲ್ಕತ್ತಾ-ಅಗರ್ತಾಲ ನಡುವಿನ ವಿಮಾನಗಳನ್ನು ಮೇ 27ರ ತನಕ ರದ್ದುಗೊಳಿಸಲಾಗಿದೆ. ಈ ಕುರಿತು ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಮಾಹಿತಿ ನೀಡಿವೆ. ಕೋಲ್ಕತ್ತಾಗೆ ಬೆಂಗಳೂರು, ದೆಹಲಿ, ಗೌಹಾತಿಯಿಂದ ಬರುವ ವಿಮಾನಗಳಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಮಾಡಿಲ್ಲ.
ಬಾಂಗ್ಲಾದೇಶದಲ್ಲಿ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿ ಅದು ಚಂಡಮಾರುತವಾಗಿ ಪರಿವರ್ತನೆಯಾಗಿದೆ. ಪೂರ್ವ ಮುಂಗಾರು ಋತುವಿನಲ್ಲಿ ಬಾಂಗ್ಲಾದೇಶದಲ್ಲಿ ಉಂಟಾಗಿರುವ ಮೊದಲ ಚಂಡಮಾರುತ ಇದಾಗಿದೆ. ಜೂನ್ 1ರಿಂದ ಕೇರಳದಲ್ಲಿ ನೈಋತ್ಯ ಮುಂಗಾರು ಮಳೆ ಆರಂಭವಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿದೆ.












Click it and Unblock the Notifications