Cyclone Shakti: ಮುಂದಿನ 3-4 ದಿನಗಳ ಕಾಲ ಬಿರುಗಾಳಿ ಮಳೆ ಮುನ್ಸೂಚನೆ
Cyclone Shakti: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ರಣಭೀಕರ ಬಿಸಿಲು ಮುಂದುವರೆದಿದೆ. ಈ ನಡುವೆಯೇ ಶಕ್ತಿ ಚಂಡಮಾರುತ ಪರಿಣಾಮ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ 3-4 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎಂದು ಇಲ್ಲಿ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಅಂಡಮಾನ್ ಹಾಗೂ ಬಾಂಗಳಾಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿರುವ ಕಾರಣ ದೇಶದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕೆಲವೆಡೆ ಮಿಂಚು, ಗುಡುಡು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ಈಶಾನ್ಯ ಭಾರತದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಮುಂದಿನ ಮುರ್ನಾಲ್ಕು ದಿನಗಳ ಕಾಲ ದಕ್ಷಿಣ ಭಾರತದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಆಂಧ್ರಪ್ರದೇಶ, ಯಾಣಂ, ರಾಯಲಸೀಮಾ, ತೆಲಂಗಾಣ, ಕರ್ನಾಟಕ, ತಮಿಳುನಾಡಿನ ಪುದುಚೇರಿ, ಕಾರೈಕಲ್, ಕೇರಳದ ಮಾಹೆಯಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ವಾಯುವ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಮೇ 18ರಂದು ಪಂಜಾಬ್, ಹರಿಯಾಣ, ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್-ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಮುಂದಿನ ಎರಡ್ಮೂರು ದಿನ ಬಿಹಾರ, ಪೂರ್ವ ಉತ್ತರ ಪ್ರದೇಶ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ತಾಪಮಾನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಹವಾಮಾನ ಇಲಾಖೆ ತಜ್ಞರು ಚಂಡಮಾರುತದ ಅಲೆಗಳು ತೀವ್ರಗೊಂಡು ಕರ್ನಾಟ ಸೇರಿದಂತೆ ದೇಶದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಮೇ 16ರಿಂದ 26ರ ವರೆಗೂ ಈ ಚಂಡಮಾರುತದ ಪ್ರಭಾವ ಇರಲಿದ ಎಂದು ಮುನ್ನೆಚ್ಚರಿಕೆಯನ್ನು ಸಹ ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಈ ಚಂಡಮಾರುತ ತೀವ್ರಗೊಂಡರೆ ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ ಅಂತಲೂ ಎಚ್ಚರಿಕೆ ಸಂದೇಶ ರವಾನಿಸಿದೆ. ಮೇ 26ರ ವರೆಗೂ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳ ಮೇಲೆ ಇದು ಹೆಚ್ಚಾಗಿ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ, ಕರ್ನಾಟಕದ ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಮೇ 16ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಆಂಧ್ರಪ್ರದೇಶ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆ, ಮಧ್ಯ ಮಹಾರಾಷ್ಟ್ರ ಹಾಗೂ ತಮಿಳುನಾಡಿನ ಹಲವು ಭಾಗಗಳಲ್ಲಿ ಮುಂದಿನ 5 ದಿನ ರಣಮಳೆ ಸುರಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಮತ್ತೊಂದೆಡೆ ಈ ಬಾರಿಯೂ ಕೂಡ ಕಳೆದ ಬಾರಿಯಂತೆ ಮುಂಗಾರು ಆರ್ಭಟಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ












Click it and Unblock the Notifications