ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಂಧ್ರ, ತೆಲಂಗಾಣದಲ್ಲಿ ಸಂಕಷ್ಟ !
ಆಂಧ್ರಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ತೆಲಂಗಾಣ ಹಾಗೂ ಆಂಧ್ರಪ್ರದೇಶ ಎರಡೂ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ತೆಲುಗುಭಾಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೇ ಭಾರೀ ಮಳೆಯಿಂದಾಗಿ ಆಂಧ್ರಪ್ರದೇಶದಲ್ಲಿ 9 ಜನ ಸಾವನ್ನಪ್ಪಿರುವುದು ವರದಿಯಾಗಿದೆ. ಈ ನಡುವೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ಅವರು ಆಂಧ್ರಪ್ರದೇಶದಲ್ಲಿ ಮಳೆ ಅನಾಹುತ ತಪ್ಪಿಸಲು ಹಾಗೂ ಈಗಾಗಲೇ ಮಳೆಯಿಂದ ಹಾನಿಗೆ ಒಳಗಾಗಿ ಸಮಸ್ಯೆಯಲ್ಲಿ ಇರುವವರನ್ನು ರಕ್ಷಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಉಭಯ ರಾಜ್ಯಗಳಲ್ಲಿ ಭಾರೀ ಮಳೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಆಂಧ್ರಪ್ರದೇಶ ಹಾಗೂ ತೆಲಂಗಾಣ ಎರಡೂ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದ್ದು, ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಪ್ರತ್ಯೇಕವಾಗಿ ಸಭೆ ನಡೆಸಿದ್ದಾರೆ. ತೆಲಂಗಾಣದ ರಾಜಧಾನಿ ಹೈದರಾಬಾದ್ ಸೇರಿದಂತೆ ತೆಲಂಗಾಣದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ತುರ್ತು ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದರೆ. ಅಲ್ಲದೇ ಮಳೆ ಅನಾಹುತ ತಪ್ಪಿಸಲು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ತೆಲಂಗಾಣದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ವಿಜಯವಾಡ, ಗುಂಟೂರಿನಲ್ಲಿ 37 ಸೆಂ.ಮೀ ಮಳೆ!
ಆಂಧ್ರಪ್ರದೇಶದಲ್ಲಿ ಕೆಲವೇ ನಿಮಿಷಗಳ ಅಂತರದಲ್ಲಿ ಭಾರೀ ಮಳೆಯಾಗಿದ್ದು, ಆಂಧ್ರದ ಕೆಲವು ಪ್ರದೇಶಗಳು ದ್ವೀಪದಂತೆ ಬದಲಾಗಿವೆ. ನಿರಂತರ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ಹಾಗೂ ನದಿ ಮೂಲಗಳು ತುಂಬಿ ಹರಿಯುತ್ತಿವೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಜನರ ಜೀವ ಕಾಪಾಡುವುದು ನಮ್ಮ ಕರ್ತವ್ಯವಾಗಿದೆ. ಜನರನ್ನು ಕಾಪಾಡಲು ಅವಶ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಪ್ರವಾಹ ಪರಿಸ್ಥಿತಿ ಇರುವುದರಿಂದ ವಿಪತ್ತು ನಿರ್ವಹಣಾ ಕಚೇರಿಯ ಅಧಿಕಾರಿಗಳೊಂದಿಗೆ ಅವರು ಮಳೆ ಅನಾಹುತ ಸಂಭವಿಸಿದ ಪ್ರದೇಶದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಂಧ್ರಪ್ರದೇಶದ ಕಾಜಾ ಸುಂಕದಕಟ್ಟೆ ಮತ್ತು ಜಗ್ಗಯ್ಯಪೇಟೆ ಜಲಾವೃತವಾಗಿದೆ. ವಿಜಯವಾಡ ಹಾಗೂ ಗುಂಟೂರಿನಲ್ಲಿ 37 ಸೆಂ.ಮೀ ಮಳೆ ಆಗಿರುವುದು ವರದಿಯಾಗಿದೆ. ಈ ರೀತಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಇನ್ನಷ್ಟು ಪ್ರದೇಶಗಳು ಜಲವೃತವಾಗುವ ಸಾಧ್ಯತೆ ಇದೆ. ಹಾಗಾಗಿ, ಅಗತ್ಯ ಮುಂಜಾಗ್ರತಾ ಕ್ರಮ ವಹಿಸುತ್ತಿರುವುದಾಗಿ ಆಂಧ್ರ ಸಿ.ಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಭಾರೀ ಮಳೆ: ಆಂಧ್ರಪ್ರದೇಶದಲ್ಲಿ 9 ಜನ ಸಾವು
ಎರಡೂ ರಾಜ್ಯಗಳಲ್ಲೂ ಭಾರೀ ಮಳೆಯಾಗುತ್ತಿರುವುದರಿಂದ ಜನ ಜೀವನ ಅಸ್ತವ್ಯಸ್ಥವಾಗಿರುವುದು ಒಂದು ಕಡೆಯಾದರೆ. ಮಳೆಯಿಂದ ಆಂಧ್ರಪ್ರದೇಶದಲ್ಲಿ ಇಲ್ಲಿಯವರೆಗೆ 9 ಜನ ಸಾವನ್ನಪ್ಪಿರುವುದು ವರದಿಯಾಗಿದೆ. ಅಲ್ಲದೇ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಅವರನ್ನು ಹುಡುಕುವ ಕಾರ್ಯಾಚರಣೆ ಮುಂದುವರಿದೆ.
ಭಾರೀ ಮಳೆಯಿಂದ ಸಂಭವಿಸಿದ ಭೂಕುಸಿತವೂ ಸಂಭವಿಸಿದೆ. ಇಲ್ಲಿಯವರೆಗೂ 17 ಸಾವಿರ ಜನರನ್ನು ಸ್ಥಳಾಂತರಿಸಲಾಗಿದ್ದು, ಮಳೆಯಿಂದ ನಿರಾಶ್ರಿತರಾದವರ ವಸತಿ ಹಾಗೂ ಊಟದ ವ್ಯವಸ್ಥೆ ದೃಷ್ಟಿಯಿಂದ 107 ಶಿಬಿರಗಳನ್ನು ತೆರೆಯಲಾಗಿದೆ. ಮಳೆ ಅವಘಡಗಳು ಸಂಭವಿಸದ ರೀತಿಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ರಕ್ಷಣೆಗಾಗಿ ದೋಣಿ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಚಂದ್ರಬಾಬು ತಿಳಿಸಿದ್ದಾರೆ.
ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ
ಆಂಧ್ರಪ್ರದೇಶ ಹಾಗೂ ತೆಲಂಗಾಣ ಎರಡೂ ರಾಜ್ಯಗಳಲ್ಲೂ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ತೆಲಂಗಾಣ ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿಗಳು ಆಯಾ ರಾಜ್ಯದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.












Click it and Unblock the Notifications