Maharashtra Assembly elections 2024 ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಏಕಕಾಲಕ್ಕೆ ನಡೆಯುತ್ತಾ ಚುನಾವಣೆ
ದೇಶದ ಪ್ರಮುಖ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಈಗಾಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದೆ. ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ನಲ್ಲಿ ಇನ್ನಷ್ಟೇ ಚುನಾವಣಾ ದಿನಾಂಕ ನಿಗದಿಯಾಗಬೇಕಿದೆ. ಇದೀಗ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ನಲ್ಲಿ ಏಕಕಾಲಕ್ಕೆ ವಿಧಾನಸಭೆ ಚುನಾವಣೆ ನಿಗದಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿ ಭಾರತೀಯ ಚುನಾವಣಾ ಆಯೋಗವು ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ವರದಿಯಾಗಿದೆ.
ಭಾರತೀಯ ಚುನಾವಣಾ ಆಯೋಗವು ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಎರಡೂ ರಾಜ್ಯಗಳಿಗೂ ಚುನಾವಣಾ ಅಧಿಕಾರಿಗಳು ಭೇಟಿ ನೀಡಿ, ಈ ರಾಜ್ಯಗಳಲ್ಲಿ ಚುನಾವಣೆ ಪ್ರಕ್ರಿಯೆ ಹೇಗೆ ನಡೆಯಬೇಕು ಎನ್ನುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರು ಇದೇ ತಿಂಗಳು ಭೇಟಿ ನೀಡಲಿದ್ದಾರೆ. ಮಹಾರಾಷ್ಟ್ರಕ್ಕೆ ಸೆಪ್ಟೆಂಬರ್ 27 ಹಾಗೂ 28ಕ್ಕೆ ಹಾಗೂ ಜಾರ್ಖಂಡ್‌ಗೆ ಸೆಪ್ಟೆಂಬರ್ 23-24 ರಂದು ಭೇಟಿ ನೀಡಲಿದ್ದಾರೆ. ಈ ವೇಳೆ ಎರಡೂ ರಾಜ್ಯಗಳಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ಚರ್ಚೆ ನಡೆಯಲಿದೆ.

ಕಳೆದ ಬಾರಿ ಹರಿಯಾಣ ಹಾಗೂ ಮಹಾರಾಷ್ಟ್ರದಲ್ಲಿ ಏಕಕಾಲಕ್ಕೆ ವಿಧಾನಸಭೆ ಚುನಾವಣೆಯನ್ನು ನಡೆಸಲಾಗಿತ್ತು. ಆದರೆ, ಈ ಬಾರಿ ಈಗಾಗಲೇ ಹರಿಯಾಣದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಆದರೆ, ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ನ ಚುನಾವಣಾ ದಿನಾಂಕ ಇನ್ನಷ್ಟೇ ಘೋಷಣೆಯಾಗಬೇಕಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡನೇ ಹಂತದ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆದಿದೆ. ಅಕ್ಟೋಬರ್ 5 ರಂದು ಹರಿಯಾಣದಲ್ಲಿ ಚುನಾವಣೆ ನಡೆಯಲಿದೆ. ಇನ್ನು ಮಹಾರಾಷ್ಟ್ರದಲ್ಲಿ ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಜಾರ್ಖಂಡ್‌ನಲ್ಲಿ ಮುಂದಿನ ವರ್ಷ ಜನವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದೂ ಹೇಳಲಾಗಿದೆ. ಆದರೆ, ಈ ಬಗ್ಗೆ ಭಾರತೀಯ ಚುನಾವಣಾ ಆಯೋಗದಿಂದ ಯಾವುದೇ ನಿರ್ದಿಷ್ಟ ಮಾಹಿತಿ ಬಂದಿಲ್ಲ. ಬಹುಶಃ ಚುನಾವಣಾ ಆಯೋಗವು ಈ ಎರಡೂ ರಾಜ್ಯಗಳಿಗೂ ಭೇಟಿ ನೀಡಿದ ನಂತರ ಈ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ.
ದೆಹಲಿಯೂ ಚುನಾವಣೆ ಹೊಸ್ತಿಲಿನಲ್ಲಿದೆ
ದೇಶದ ಹಲವು ಪ್ರಮುಖ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಈ ವರ್ಷ ಹಾಗೂ ಮುಂದಿನ ವರ್ಷದ ಪ್ರಾರಂಭಿಕ ಮಾಸದಲ್ಲಿ ಮಹಾರಾಷ್ಟ್ರ, ಹರಿಯಾಣ, ಜಾರ್ಖಂಡ್, ಜಮ್ಮು ಮತ್ತು ಕಾಶ್ಮೀರ ಹಾಗೂ ದೆಹಲಿ ಚುನಾವಣೆಗಳು ನಡೆಯಲಿವೆ. ನಾಲ್ಕು ರಾಜ್ಯಗಳಲ್ಲಿ ಈ ವರ್ಷವೇ ಚುನಾವಣೆ ನಡೆಯುವ ಸಾಧ್ಯತೆ ಇದೆ. ಆದರೆ, ದೆಹಲಿ ವಿಧಾನಸಭೆ ಚುನಾವಣಾ ಅವಧಿಯು ಫೆಬ್ರವರಿಗೆ ಮುಕ್ತಾಯವಾಗಲಿದ್ದು, ಫೆಬ್ರವರಿಯಲ್ಲಿ ಇಲ್ಲಿ ಚುನಾವಣೆ ನಡೆಯಲಿದೆ.
ಇನ್ನು ದೆಹಲಿಯಲ್ಲಿ ಈಚೆಗಷ್ಟೇ ಮುಖ್ಯಮಂತ್ರಿಯ ಬದಲಾವಣೆ ಆಗಿದೆ. ಹೀಗಾಗಿ, ಈ ರಾಜ್ಯದಲ್ಲಿ ಚುನಾವಣೆ ಕಾವು ಹೆಚ್ಚಾಗಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎನ್‌ಡಿಎ ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ಸು ಕಂಡಿಲ್ಲ. ಹೀಗಾಗಿ, ಮುಂಬರುವ ವಿಧಾನಸಭೆ ಚುನಾವಣೆಗಳನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಆದರೆ, ಕಾಂಗ್ರೆಸ್ ಸಹ ಬಿಜೆಪಿಯ ದಂಡಯಾತ್ರೆಯನ್ನು ಕಟ್ಟಿಹಾಕಲು ಸೆಣೆಸುತ್ತಿದೆ.












Click it and Unblock the Notifications