Vinesh Phogat: ಹರ್ಯಾಣದಿಂದ ವಿನೇಶ್ ಫೋಗಟ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ?
ನವದೆಹಲಿ, ಸೆಪ್ಟೆಂಬರ್ 04: ಹರ್ಯಾಣ ವಿಧಾನಸಭೆ ಚುನಾವಣೆ 2024ರ ದಿನಾಂಕ ಘೋಷಣೆಯಾಗಿದೆ. ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳ ತಯಾರಿಯೂ ಜೋರಾಗಿದೆ. ಇಂತಹ ಸಂದರ್ಭದಲ್ಲಿಯೇ ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಇಬ್ಬರೂ ಸಹ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ಮಾಡಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡಿದೆ. ಅಕ್ಟೋಬರ್ 5ರಂದು ಹರ್ಯಾಣ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

90 ಸದಸ್ಯ ಬಲದ ವಿಧಾನಸಭೆ ಚುನಾವಣೆ ದೇಶದಾದ್ಯಂತ ಕುತೂಹಲ ಮೂಡಿಸಿದೆ. 2024ರ ಲೋಕಸಭೆ ಚುನಾವಣೆ ಬಳಿಕ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆ ಇದಾಗಿದೆ. ಹರ್ಯಾಣ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಯುತ್ತಿದೆ, ಪಕ್ಷ ಅಭ್ಯರ್ಥಿಗಳ ಆಯ್ಕೆಗೆ ಸೋಮವಾರ ಸಭೆಯನ್ನೂ ನಡೆಸಿದೆ.
ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ರಾಹುಲ್ ಗಾಂಧಿ ಭೇಟಿಯಾದ ಚಿತ್ರಗಳನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ, ಹರ್ಯಾಣ ಕಾಂಗ್ರೆಸ್ ಉಸ್ತುವಾರಿ ದೀಪಕ್ ಬಬಾರಿಯಾ ಪೂನಿಯಾ, ವಿನೇಶ್ ಫೋಗಟ್ ಪಕ್ಷದ ಅಭ್ಯರ್ಥಿಗಳಾಗಿ ವಿಧಾನಸಭೆ ಚುನಾವಣೆ ಕಣಕ್ಕಿಳಿಯುವ ಕುರಿತು ಗುರುವಾರದ ಹೊತ್ತಿಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಹೇಳಿದ್ದಾರೆ.
ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಲವು ದಿನಗಳಿಂದ ಹಬ್ಬಿತ್ತು. ಆದರೆ ಈಗ ಅವರು ರಾಹುಲ್ ಗಾಂಧಿ ಭೇಟಿಯಾಗಿದ್ದು, ಹರ್ಯಾಣ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೇ ಭಾರೀ ಚರ್ಚೆಗೆ ಕಾರಣವಾಗಿದೆ.
ಹರ್ಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ 90 ಸ್ಥಾನಗಳ ಪೈಕಿ 66 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಹಾಲಿ 31 ಶಾಸಕರ ಪೈಕಿ 28 ಶಾಸಕರಿಗೆ ಟಿಕೆಟ್ ಖಚಿತ ಎಂಬ ಸುದ್ದಿಗಳು ಹಬ್ಬಿವೆ. ಪಕ್ಷ ಎಎಪಿ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲಿದ್ದು, ಎಷ್ಟು ಸೀಟು ಪಕ್ಷಕ್ಕೆ ಬಿಟ್ಟುಕೊಡಲಾಗುತ್ತದೆ? ಎಂದು ಕಾದು ನೋಡಬೇಕಿದೆ.
ಮಂಗಳವಾರ ರಾತ್ರಿ ನಡೆದ ಎಎಪಿ, ಕಾಂಗ್ರೆಸ್ ನಾಯಕರ ಮೊದಲ ಸುತ್ತಿನ ಮಾತುಕತೆಯಲ್ಲಿ ಎಎಪಿಗೆ 10 ಸೀಟುಗಳನ್ನು ಬಿಟ್ಟುಕೊಡುವ ಕುರಿತು ಚರ್ಚೆಗಳು ನಡೆದಿವೆ. 'ಇಂಡಿಯಾ' ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್, ಎಎಪಿ ಒಟ್ಟಾಗಿ ವಿಧಾನಸಭೆ ಚುನಾವಣೆ ಎದುರಿಸುವುದು ಬಹುತೇಕ ಅಂತಿಮವಾಗಿದೆ.
ಬಜರಂಗ್ ಪೂನಿಯಾ, ವಿನೇಶ್ ಫೋಗಟ್ 2023ರಲ್ಲಿ ಬಿಜೆಪಿಯ ಮಾಜಿ ಸಂಸದ ಮತ್ತು ಆಗಿನ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಕಾಂಗ್ರೆಸ್ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.












Click it and Unblock the Notifications