ಆಪರೇಷನ್ ಕಮಲಕ್ಕೆ ಕಾಂಗ್ರೆಸ್ ಸಿಟ್ಟು: ಐಟಿಸಿ ಹೋಟೆಲ್ ಮುಂದೆ ಪ್ರತಿಭಟನೆ
ಗುರುಗ್ರಾಮ, ಜನವರಿ 16: ಹರಿಯಾಣದ ಗುರುಗ್ರಾಮದ ಐಟಿಸಿ ಗ್ರ್ಯಾಂಡ್ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಬಿಜೆಪಿ ಶಾಸಕರ ವಿರುದ್ಧ ಅಲ್ಲಿನ ಸ್ಥಳೀಯ ಕಾಂಗ್ರೆಸ್ಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಶಾಸಕರನ್ನು ತಮ್ಮ ಕಡೆಗೆ ಸೆಳೆದುಕೊಂಡು ಆಪರೇಷನ್ ಕಮಲಕ್ಕೆ ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಶಾಸಕರು ಗುರುಗ್ರಾಮದ ಐಟಿಸಿ ಗ್ರ್ಯಾಂಡ್ ಹೋಟೆಲ್‌ನಲ್ಲಿ ಬೀಡುಬಿಟ್ಟಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್‌ನ ಕೆಲವು ಅತೃಪ್ತ ಶಾಸಕರು ಮುಂಬೈನಲ್ಲಿ ಸೇರಿಕೊಂಡಿದ್ದಾರೆ. ಕಾಂಗ್ರೆಸ್ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಅವರನ್ನು ಪಕ್ಷದಿಂದ ಹೊರಬಂದು ತನ್ನೊಂದಿಗೆ ಕೈಜೋಡಿಸುವಂತೆ ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ.
ಹೀಗಾಗಿ ಬಿಜೆಪಿಯ ಆಪರೇಷನ್ ಕಮಲದ ವಿರುದ್ಧ ಸಿಟ್ಟಿಗೆದ್ದಿರುವ ಹರಿಯಾಣದ ಯುವ ಕಾಂಗ್ರೆಸ್ ಕಾರ್ಯಕರ್ತರು ಹೋಟೆಲ್ ಹೊರಭಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆ ನಡೆಸುತ್ತಿದೆ. ಜನರು ಆರಿಸಿದ ಸರ್ಕಾರವನ್ನು ಬೀಳಿಸಲು ಶಾಸಕರಿಗೆ ಹಣದ ಆಮಿಷವೊಡ್ಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಐಟಿಸಿ ಗ್ರ್ಯಾಂಡ್ ಹೋಟೆಲ್ ಮುಂದೆ ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ಇತ್ತ ಮುಂಬೈನಲ್ಲಿರುವ ಕಾಂಗ್ರೆಸ್ ಶಾಸಕರನ್ನು ಪಕ್ಷಕ್ಕೆ ಕರೆತರುವ ಜವಾಬ್ದಾರಿಯನ್ನು ಮಲ್ಲೇಶ್ವರದ ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಅವರಿಗೆ ಒಪ್ಪಿಸಿದೆ. ಅಶ್ವತ್ಥ್ ನಾರಾಯಣ ಅವರು ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.
ಹೀಗಾಗಿ ಅಶ್ವತ್ಥ್ ನಾರಾಯಣ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯ ಜೆಡಿಎಸ್ ಕಾರ್ಯಕರ್ತರು ಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆ ಎದುರಿನಿಂದ ಶಾಸಕರ ಕಚೇರಿವರೆಗೆ ಪ್ರತಿಭಟನಾ ಪಾದಯಾತ್ರೆ ನಡೆಸಿದ್ದಾರೆ.












Click it and Unblock the Notifications