Weather Forecast: ಮುಂದಿನ 6 ದಿನ ಗುಡುಗು ಸಹಿತ ರಣಮಳೆ ಮುನ್ಸೂಚನೆ
Weather Forecast: ಈಗಾಗಲೇ ದೇಶದ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದೆ. ಇದೀಗ ಚಳಿಗಾಲ ಆರಂಭವಾಗಿದ್ದು, ಇದರ ನಡುವೆಯೇ ಕೆಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ 6 ದಿನ ಈ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೀಗ ಚಳಿಗಾಲ ಆರಂಭವಾಗಿದ್ದು, ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿಗಾಲದ ಅನುಭವ ಶುರುವಾಗಿದೆ. ಹಾಗಾದರೆ ಯಾವ್ಯಾವ ರಾಜ್ಯಗಳಲ್ಲಿ ಹೆಚ್ಚು ಚಳಿ ಹಾಗೂ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಮಧ್ಯಪ್ರದೇಶದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಕುಸಿತ ಕಂಡುಬಂದಿದ್ದು, ಚಳಿಯ ಪ್ರಮಾಣ ಹೆಚ್ಚಾಗಿದೆ. ಭೋಪಾಲ್, ಗ್ವಾಲಿಯರ್ ಮತ್ತು ಇಂದೋರ್‌ನಂತಹ ಪ್ರಮುಖ ನಗರಗಳಲ್ಲಿ ತಾಪಮಾನ ಕಡಿಮೆಯಾಗಿದೆ. ರಾಜಸ್ಥಾನದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಇಲ್ಲಿನ ಜನ ಚಳಿ ಹಿನ್ನೆಲೆ ಬೆಳಗ್ಗೆ 10 ಗಂಟೆಯಾದರೂ ಮನೆಯಿಂದ ಹೊರಗಡೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ನವದೆಹಲಿ ಹವಾಮಾನದ ವಿವರ: ಇಂದು (ನವೆಂಬರ್ 09) ರಾತ್ರಿ ವೇಳೆಗೆ ಈ ಪ್ರದೇಶಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಗುಡ್ಡಗಾಡು ಪ್ರದೇಶಗಳಲ್ಲಿ ಹಿಮದಂತಹ ವಾತಾವರಣ ನಿರ್ಮಾಣ ಆಗುತ್ತಿದೆ. ನವದೆಹಲಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಮಂಜು ಕವಿದಿದ್ದು, ಮಧ್ಯಾಹ್ನದ ವೇಳೆಗೆ ವಾಯುಮಾಲಿನ್ಯ ಹೆಚ್ಚಳ ಆಗಿದೆ. ಸಂಜೆ ವೇಳೆಗೆ ಮತ್ತೆ ಮಂಜಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇಂದು ಎಲ್ಲೆಲ್ಲಿ ಮಳೆ?: ದಕ್ಷಿಣ ಭಾರತದ ಹಲವೆಡೆ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯು ಇಂದು (ನವೆಂಬರ್ 09) ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಣಾಮ ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ನವೆಂಬರ್ 14ರ ವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ನವೆಂಬರ್ 11 ರಿಂದ 14ರ ವರೆಗೆ ದಕ್ಷಿಣ ಕರಾವಳಿ ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೇರಳದ ತಿರುವನಂತಪುರಂ, ಕೊಲ್ಲಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.











Click it and Unblock the Notifications