Breaking: ಇಡಿ ಬಂಧನದ ವಿರುದ್ಧ ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೆನ್‌ಗೆ ಮೊದಲ ಜಯ!?
ಕಳೆದ ಕೆಲವು ದಿನಗಳಿಂದ ಜಾರ್ಖಂಡ್ ರಾಜ್ಯ ಸಕತ್ ಸುದ್ದಿಯಲ್ಲಿದೆ. ಆಪಾದಿತ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಳು ಹರಿದಡುತ್ತಲೇ ಇವೆ. ಜಾರ್ಖಂಡ್ ಮುಖ್ಯಮಂತ್ರಿ ಮನೆ ಮೇಲೆ ದಾಳಿ, ಬಂಧನದ ಸುದ್ದಿಗಳು ದೇಶದಲ್ಲಿ ಬಿಸಿ ಬಿಸಿ ಚರ್ಚೆಯ ವಿಷಯಗಳಾಗುತ್ತಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್ ಸೊರೆನ್ ರಾಜೀನಾಮೆ ನೀಡಿದ್ದಾರೆ. ಅವರನ್ನು ಇಡಿ ಬಂಧಿಸಿದೆ.

ಆದರೆ, ಜಾರಿ ನಿರ್ದೇಶನಾಲಯ (ಇಡಿ) ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹಿರಿಯ ವಕೀಲ ಕಪಿಲ್ ಸಿಬಲ್, ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಅವರೊಂದಿಗೆ ತುರ್ತು ವಿಚಾರಣೆಗಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದರು.
ಮಾಜಿ ಸಿಎಂ ಹೇಮಂತ್ ಸೊರೆನ್ ಅವರ ವಿಷಯವನ್ನು ಹಿರಿಯ ವಕೀಲ ಕಪಿಲ್ ಸಿಬಲ್ ಪ್ರಸ್ತಾಪಿಸಿದರು. ಇದಕ್ಕೆ ಮೊದಲ ಜಯ ಸಿಕ್ಕಿದ್ದು, ವಿಷಯವನ್ನು ನಾಳೆ (ಫೆಬ್ರವರಿ 2) ವಿಚಾರಣೆ ನಡೆಸುವುದಾಗಿ ಸಿಜೆಐ ಡಿವೈ ಚಂದ್ರಚೂಡ್ ಒಪ್ಪಿಕೊಂಡಿದ್ದಾರೆ.
ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಜಾರ್ಖಂಡ್ ಹೈಕೋರ್ಟ್‌ನಲ್ಲಿ ಇದೇ ರೀತಿಯ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ಸಿಜೆಐ ಡಿವೈ ಚಂದ್ರಚೂಡ್ ಪೀಠಕ್ಕೆ ತಿಳಿಸಿದರು. ಇದನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸುತ್ತಿದೆ ಎಂದಿದ್ದಾರೆ. ಇದಕ್ಕೆ ಉತ್ತರಿಸಿರುವ ಕಪಿಲ್ ಸಿಬಲ್ ಅವರು ಅರ್ಜಿಯನ್ನು ಹೈಕೋರ್ಟ್‌ನಿಂದ ಹಿಂಪಡೆಯುವುದಾಗಿ ಮಾಹಿತಿ ನೀಡಿದ್ದಾರೆ.
ಕಳೆದ ರಾತ್ರಿ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಹೇಮಂತ್ ಸೋರೆನ್ ಅವರನ್ನು ಬಂಧಿಸಿದೆ. ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಬಂಧಿಸಲಾಗಿದೆ.












Click it and Unblock the Notifications