ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಗೆ ಪ್ರಿಯಾಂಕಾ ಗಾಂಧಿ
ನವದೆಹಲಿ, ನವೆಂಬರ್ 4: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಕಾಂಗ್ರಾ ಜಿಲ್ಲೆಯ ನಗ್ರೋಟಾ ಬಾಗ್ವಾನ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
"ಮಾಜಿ ಕಾಂಗ್ರೆಸ್ ನಾಯಕಿ ಹಾಗೂ ಸಚಿವ ಜಿ.ಎಸ್.ಬಾಲಿ ಹುಟ್ಟೂರಿಗೆ ಪ್ರಿಯಾಂಕಾ ಗಾಂಧಿ ಆಗಮಿಸುತ್ತಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ. ಅವರ ಭೇಟಿಯು ಜಿ.ಎಸ್.ಬಾಲಿ ಅಭಿವೃದ್ಧಿ ಕಾರ್ಯಗಳಿಗೆ ಸಲ್ಲಿಸುವ ಗೌರವವಾಗಿದೆ," ಎಂದು ನಗ್ರೋಟಾ ಬಾಗ್ವಾನ್‌ನ ಕಾಂಗ್ರೆಸ್ ಅಭ್ಯರ್ಥಿ ಮತ್ತು ಪಕ್ಷದ ಕಾರ್ಯದರ್ಶಿ ಆರ್ಎಸ್ ಬಾಲಿ ಹೇಳಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಿದ ನಂತರದಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರಾ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.

ಹಳೆಯ ಪಿಂಚಣಿ ಯೋಜನೆ ಮರುಸ್ಥಾಪಿಸುವ ಭರವಸೆ:
ಕಳೆದ ತಿಂಗಳು, ಸೋಲನ್‌ನಲ್ಲಿ 'ಪರಿವರ್ತನ್ ಪ್ರತಿಜ್ಞಾ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕರು ಮುಂಬರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದರೆ, ಮೊದಲ ಸಂಪುಟ ಸಭೆಯಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು.
"ಇಲ್ಲಿ ಸರ್ಕಾರ ರಚಿಸಿದ ನಂತರ ಮೊದಲ ಸಂಪುಟ ಸಭೆಯಲ್ಲಿ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ನಾನು ಇಂದು ನಿಮಗೆ ಭರವಸೆ ನೀಡುತ್ತಿದ್ದೇನೆ. ಮೊದಲನೆಯದು ಒಂದು ಲಕ್ಷ ಸರ್ಕಾರಿ ಉದ್ಯೋಗಗಳನ್ನು ನೀಡುವುದು ಮತ್ತು ಎರಡನೆಯದು ಹಳೆಯ ಪಿಂಚಣಿ ಯೋಜನೆಯನ್ನು (OPS) ಜಾರಿಗೊಳಿಸುವುದು," ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದರು.
ಹಿಮಾಚಲ ಪ್ರದೇಶದಲ್ಲಿ 5 ಲಕ್ಷ ಮಂದಿಗೆ ಉದ್ಯೋಗ:
ಹಿಮಾಚಲ ಪ್ರದೇಶದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರವನ್ನು ನೀಡಿದರೆ ನಿರುದ್ಯೋಗ ಸಮಸ್ಯೆಯನ್ನು ಹೊರಲಾಡಿಸಲಾಗುವುದು. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದರೆ, ರಾಜ್ಯದಲ್ಲಿ 5 ಲಕ್ಷ ಮಂದಿಗೆ ಸರ್ಕಾರಿ ಉದ್ಯೋಗವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿದೆ.
ಈ ಬಾರಿ ಹಿರಿಯ ನಾಯಕರೊಬ್ಬರ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ಚುನಾವಣೆಯನ್ನು ಎದುರಿಸಬೇಕಾಗಿದೆ. ಕಳೆದ ವರ್ಷ ಪಕ್ಷದ ಹಿರಿಯ ನಾಯಕ ವೀರಭದ್ರ ಸಿಂಗ್ ವಿಧಿವಶರಾಗಿದ್ದರು.
ಹಿಮಾಚಲ ಪ್ರದೇಶ 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್ 12ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 8ರಂದು ಮತಗಳ ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನಾಂಕವಾಗಿದ್ದು, ಅಕ್ಟೋಬರ್ 27 ನಾಮಪತ್ರ ಪರಿಶೀಲನೆ ನಡೆಯಲಿದೆ, ನಾಮಪತ್ರ ವಾಪಸ್ ಪಡೆಯುವುದಕ್ಕೆ ಅಕ್ಟೋಬರ್ 29 ಕೊನೆಯ ದಿನವಾಗಿದೆ.
ಈ ಹಿಂದೆ ನಡೆದ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 44 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ 21 ಸ್ಥಾನಗಳನ್ನು ಗೆದ್ದುಕೊಂಡಿತ್ತು.












Click it and Unblock the Notifications