Himachal Election Result 2022; ಸಿಎಂ ಜೈರಾಮ್ ಠಾಕೂರ್ ಮುನ್ನಡೆ
ನವದೆಹಲಿ, ಡಿಸೆಂಬರ್ 08; ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ರಾಜ್ಯದ 68 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 12ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು, ಶೇ 75.6ರಷ್ಟು ಮತದಾನವಾಗಿತ್ತು.
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಗುರುವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 35.
ಅಂಚೆ ಮತಗಳ ಎಣಿಕೆಯಲ್ಲಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮಂಡಿ ಜಿಲ್ಲೆಯ ಸಿರಾಜ್ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರ ಪಡೆಯುವ ಉತ್ಸಾಹದಲ್ಲಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಪಕ್ಷ ಮತ್ತೆ ಅಧಿಕಾರ ಪಡೆಯುವುದಿಲ್ಲ ಎಂಬ ಮಾತನ್ನು ಸುಳ್ಳಾಗಿಸಲು ಬಿಜೆಪಿ ಚುನಾವಣಾ ರಣತಂತ್ರ ರಚನೆ ಮಾಡಿತ್ತು. ಬಿರುಸಿನಿಂದ ಪ್ರಚಾರ ನಡೆಸಿತ್ತು.
ರಾಜ್ಯದಲ್ಲಿ ನಡೆದ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಸರಳ ಬಹುಮತದ ಮೂಲಕ ಅಧಿಕಾರ ಹಿಡಿಯಲಿದೆ ಎಂದು ಹೇಳಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ಇರಲಿದೆ ಎಂದು ಸಹ ಕೆಲವು ಸಮೀಕ್ಷೆಗಳು ಹೇಳಿವೆ.
ಬೆಳಗ್ಗೆ 8.37ರ ಸಮಯದಲ್ಲಿನ ಟ್ರೆಂಡ್‌ನಂತೆ ರಾಜ್ಯದಲ್ಲಿ ಬಿಜೆಪಿ 33 ಮತ್ತು ಕಾಂಗ್ರೆಸ್ 33 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಎಎಪಿ ಯಾವುದೇ ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿಲ್ಲ.
ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ದಿ. ವೀರಭದ್ರ ಸಿಂಗ್ ಪುತ್ರ ವಿಕ್ರಮಾದಿತ್ಯ ಸಿಂಗ್ ಶಿಮ್ಲಾ ಗ್ರಾಮೀಣ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ.
ಇನ್ನೂ ಹಿಮಾಚಲ ಪ್ರದೇಶದಲ್ಲಿ 2017ರ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಬಿಜೆಪಿ ಅಧಿಕಾರ ಪಡೆದಿತ್ತು. 2012ರ ಚುನಾವಣೆಯಲ್ಲಿ ಕಾಂಗ್ರೆಸ್ 36 ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚನೆ ಮಾಡಿತ್ತು.
ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳು ರಾಜ್ಯದಲ್ಲಿ ಬಿಜೆಪಿ ಅಧಿಕಾರ ಪಡೆಯಲಿದೆ ಎಂದು ಹೇಳಿವೆ. ಈ ಬಾರಿ ಬಿಜೆಪಿಗೆ ಕಾಂಗ್ರೆಸ್ ಜೊತೆಗೆ ಎಎಪಿ ಸಹ ಎದುರಾಳಿಯಾಗಿದೆ.












Click it and Unblock the Notifications