ಆರು ರಾಜ್ಯಗಳಲ್ಲಿ ಭಾರೀ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ
ನವದೆಹಲಿ, ಆಗಸ್ಟ್ 07: ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಮುಂಗಾರು ಆರ್ಭಟ ಮುಂದುವರೆದಿದೆ. ಕಳೆದ ಒಂದು ವಾರದಿಂದಲೂ ಅಧಿಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪಶ್ಚಿಮ ಬಂಗಾಳ, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಒಡಿಶಾದಲ್ಲಿ ಕಳೆದ ನಾಲ್ಕೈದು ದಿನಗಳಿಂದಲೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ.
ಇನ್ನಷ್ಟು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಆರು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮಧ್ಯಪ್ರದೇಶದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯುತ್ತದೆ. ಆಗಸ್ಟ್ 7ರ ನಂತರ ಮಳೆ ಕ್ರಮೇಣ ತಗ್ಗುತ್ತದೆ ಎಂದು ಮಾಹಿತಿ ನೀಡಿದೆ. ಪಶ್ಚಿಮ ಬಂಗಾಳದಲ್ಲಿ ಶನಿವಾರ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತದೆ. ಜಾರ್ಖಂಡ್‌ನಲ್ಲಿ ಆಗಸ್ಟ್ 8ರಿಂದ 10ರವರೆಗೂ ಅಧಿಕ ಮಳೆಯಾಗುತ್ತದೆ ಎಂದು ಸೂಚನೆ ನೀಡಿದೆ.
ಆಗಸ್ಟ್ 9ರವರೆಗೂ ದೇಶದ ಈಶಾನ್ಯ ಭಾಗದ ರಾಜ್ಯಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ತಿಳಿಸಿದೆ. ಇತರೆ ಯಾವ್ಯಾವ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ? ಮುಂದೆ ಓದಿ...

ಆರು ರಾಜ್ಯಗಳಲ್ಲಿ ಮಳೆ ಮುನ್ಸೂಚನೆ
ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಅಸ್ಸಾಂ ಹಾಗೂ ಮೇಘಾಲಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ. ಈ ರಾಜ್ಯಗಳಲ್ಲಿ ಹೆಚ್ಚಿನ ಮಳೆಯಾಗುವುದಾಗಿ ತಿಳಿಸಿದೆ. ಉತ್ತರಾಖಂಡ ಹಾಗೂ ಉತ್ತರ ಪ್ರದೇಶದಲ್ಲಿ ಕೂಡ ಮಳೆ ಮುಂದುವರೆಯುವುದಾಗಿ ತಿಳಿಸಿದೆ.

ಮಹಾರಾಷ್ಟ್ರ, ಗುಜರಾತ್‌ನಲ್ಲಿಯೂ ಸಾಧಾರಣ ಮಳೆ
ಆಗಸ್ಟ್ 10ರವರೆಗೂ ರಾಜಸ್ಥಾನ, ಹರಿಯಾಣ, ಜಮ್ಮು ಕಾಶ್ಮೀರದಲ್ಲಿ ಚದುರಿದ ಮಳೆಯಾಗಲಿದ್ದು, ಶನಿವಾರ ರಾಜಸ್ಥಾನದ ಪೂರ್ವ ಭಾಗದಲ್ಲಿ ಅಧಿಕ ಮಳೆಯಾಗುವುದಾಗಿ ತಿಳಿಸಿದೆ. ಕಳೆದ ಒಂದು ವಾರದಿಂದಲೂ ರಾಜಸ್ಥಾನದಲ್ಲಿ ಅಧಿಕ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಮುಂದಿನ ನಾಲ್ಕೈದು ದಿನಗಳ ಕಾಲ ಮಹಾರಾಷ್ಟ್ರ ಹಾಗೂ ಗುಜರಾತ್‌ನಲ್ಲಿ ಮಳೆ ಮುಂದುವರೆಯುವುದಾಗಿ ತಿಳಿಸಿದೆ.

ಮಧ್ಯಪ್ರದೇಶದ 23 ಜಿಲ್ಲೆಗಳಿಗೆ ಅಲರ್ಟ್
ಮಧ್ಯಪ್ರದೇಶದಲ್ಲಿ ಹೆಚ್ಚಿನ ಮಟ್ಟದಲ್ಲಿ ಮಳೆಯಾಗುತ್ತಿದ್ದು, ಮಧ್ಯಪ್ರದೇಶದ 23 ಜಿಲ್ಲೆಗಳಲ್ಲಿ ಶನಿವಾರ ಭಾರೀ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ. ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದ್ದು, ಮಳೆ ಸಂಬಂಧಿ ಅವಘಡಗಳಲ್ಲಿ ಇದುವರೆಗೂ ಹನ್ನೆರಡು ಮಂದಿ ಸಾವನ್ನಪ್ಪಿದ್ದಾರೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸುವ ಕಾರ್ಯ ಮುಂದುವರೆದಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 11ರವರೆಗೂ ಹೆಚ್ಚಿನ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶನಿವಾರವೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಆಗಸ್ಟ್, ಸೆಪ್ಟೆಂಬರ್‌ನಲ್ಲಿ ಅಧಿಕ ಮಳೆ
ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ದಾಖಲಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳ ಮಳೆ ಸಾಮಾನ್ಯಕ್ಕಿಂತ ಸ್ವಲ್ಪ ಅಧಿಕವಿರಲಿದೆ. ಸೆಪ್ಟೆಂಬರ್‌ನಲ್ಲಿಯೂ ಹೆಚ್ಚಿನ ಮಳೆ ದಾಖಲಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮಹೋಪಾತ್ರಾ ತಿಳಿಸಿದ್ದಾರೆ. ದೇಶದ ಉತ್ತರ ಹಾಗೂ ಮಧ್ಯ ಭಾಗದಲ್ಲಿ ಸಾಮಾನ್ಯ ಹಾಗೂ ಸಾಮಾನ್ಯಕ್ಕಿಂತ ಕಡಿಮೆ ಮಳೆ ಬೀಳಬಹುದಾಗಿದೆ ಎಂದು ತಿಳಿಸಿದ್ದಾರೆ.












Click it and Unblock the Notifications