Imd Weather Forecast: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರಭಾವ: ಈ ವಾರ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ
Imd Weather Forecast: ಕರ್ನಾಟಕ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಉತ್ತರ ಜಾರ್ಖಂಡ್ ಮತ್ತು ಪಕ್ಕದ ನೈಋತ್ಯ ಬಿಹಾರದಲ್ಲಿ ಗಂಟೆಗೆ 18 ಕಿ.ಮೀ ವೇಗದಲ್ಲಿ ವಾಯುವ್ಯ-ಪಶ್ಚಿಮಕ್ಕೆ ಚಲಿಸಿದ ವಾಯುಭಾರ ಕುಸಿತವು ಆಗಸ್ಟ್ 19 ರಂದು ಬೆಳಿಗ್ಗೆ 8.30 ಗಂಟೆಗೆ ಉತ್ತರ ಜಾರ್ಖಂಡ್ ಮತ್ತು ಪಕ್ಕದ ನೈಋತ್ಯ ಬಿಹಾರ ಮತ್ತು ಆಗ್ನೇಯ ಉತ್ತರ ಪ್ರದೇಶದ ಮೇಲೆ ಕೇಂದ್ರೀಕೃತವಾಗಿತ್ತು. ಬಂಗಾಳಕೊಲ್ಲಿಯ ಈಶಾನ್ಯದಲ್ಲಿ ಉಂಟಾಗಿರುವ ಬದಲಾವಣೆಯಿಂದ ಮುಂದಿನ ದಿನಗಳಲ್ಲಿ ಮಳೆ ಜೋರಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.
ಕಳೆದ ಮೂರು ನಾಲ್ಕು ದಿನಗಳಿಂದ ಮಳೆ ತುಸು ಬಿಡುವು ಕೊಟ್ಟಿದೆ. ಇದೀಗ ವಿವಿಧ ಪ್ರದೇಶಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ಭಾರತದ ಹೆಚ್ಚಿನ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ, ಹಲವಾರು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಕೆಲವು ಪ್ರದೇಶಗಳಲ್ಲಿ ಮಿಂಚು ಗುಡುಗು ಸಹಿತ ಹಾಗೂ ಬಿರುಗಾಳಿಯೊಂದಿಗೆ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಬುಧವಾರ ದೆಹಲಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿತ್ತು. ಉಳಿದಂತೆ ಪ್ರತ್ಯೇಕ ಜಾಗಗಳಲ್ಲಿ ಮಳೆ ಆಗಿದೆ. ದೆಹಲಿಯಲ್ಲಿ ಗರಿಷ್ಠ ತಾಪಮಾನವು 32 ರಿಂದ 34 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ. ಕನಿಷ್ಠ ತಾಪಮಾನವು 26 ರಿಂದ 28 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ.
Imd Weather Forecast: ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ
ಇನ್ನು ಆಗಸ್ಟ್ 24ರ ವರೆಗೆ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ. ಉತ್ತರ ಮತ್ತು ಮಧ್ಯ ಭಾರತದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ್, ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢ ಭಾಗದಲ್ಲಿ ಮಳೆ ಇರಲಿದೆ.
ಪಶ್ಚಿಮ ಹಿಮಾಲಯ ಮತ್ತು ಮಧ್ಯ ಪ್ರದೇಶಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಆಗಸ್ಟ್ 19 ರಿಂದ 21ರ ವರೆಗೆ ಹಿಮಾಚಲ ಪ್ರದೇಶ ಮತ್ತು ಆಗಸ್ಟ್ 20 ರಿಂದ 24 ರವರೆಗೆ ಉತ್ತರಾಖಂಡದಲ್ಲಿ ತೀವ್ರ ಮಳೆಯಾಗುವ ಸಾಧ್ಯತೆಯಿದೆ. ಮಧ್ಯ ಭಾರತದಾದ್ಯಂತ ಮಿಂಚು - ಗುಡುಗು ಸಹಿತ ಭಾರೀ ಮಳೆ ಬೀಸುವ ಸಾಧ್ಯತೆ ಇದೆ. ಮಧ್ಯಪ್ರದೇಶದಲ್ಲಿ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಆಗಸ್ಟ್ 24 ರವರೆಗೆ ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಒಡಿಶಾ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಹಾಗೂ ಭಾರತದ ಈಶಾನ್ಯ ಭಾಗದ ರಾಜ್ಯಗಳಲ್ಲೂ ಮಳೆ ಆಗಲಿದೆ. ಜಾರ್ಖಂಡ್, ಒಡಿಶಾ, ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿ ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಭಾರತದಲ್ಲೂ ಮಳೆ ಆರ್ಭಟ
ಇನ್ನು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲೂ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕೊಂಕಣ ಮತ್ತು ಗೋವಾ, ಕರಾವಳಿ ಕರ್ನಾಟಕ ಮತ್ತು ಕೇರಳದ ಕೆಲವು ಭಾಗಗಳಲ್ಲಿ ಆಗಸ್ಟ್ 24 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶ, ತೆಲಂಗಾಣ ಮತ್ತು ದಕ್ಷಿಣ ಭಾರತದ ಇತರ ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಹಲವಾರು ಪ್ರದೇಶಗಳಲ್ಲಿ ಮಿಂಚು - ಗುಡುಗು ಸಹಿತ ಬಿರುಗಾಳಿಯೊಂದಿಗೆ ಭಾರೀ ಮಳೆ ಆಗಲಿದೆ. ಕರ್ನಾಟಕ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.


Click it and Unblock the Notifications
