Imd Weather Forecast: ಚಂಡಮಾರುತ ಪ್ರಸರಣ: ದಕ್ಷಿಣ ಭಾರತದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ: ಐಎಂಡಿ ಮುನ್ಸೂಚನೆ
ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಇನ್ನೂ ಎರಡರಿಂದ ಮೂರು ದಿನ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕೇರಳ ಕರಾವಳಿ ಮತ್ತು ಅದರ ಪಕ್ಕದ ಪ್ರದೇಶಗಳಲ್ಲಿದ್ದ ಮೇಲೆ ಸುಳಿಗಾಳಿಯು (upper air cyclonic circulation), ಇದೀಗ ಅಗ್ನೇಯ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪದ ಪಕ್ಕದ ಪ್ರದೇಶಗಳ ಮೇಲೆ, ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ನೆಲೆಗೊಂಡಿದೆ. ಮನ್ನಾರ್ ಕೊಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಂದು ಮೇಲ್ಮ ಸುಳಿಗಾಳಿಯು ನೆಲೆಗೊಂಡಿದ್ದು, ಇದು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದವರೆಗೆ ವಿಸ್ತರಿಸಿದೆ ಎಂದೂ ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.

ನವೆಂಬರ್ 11ರ ಬುಧವಾರ ದಕ್ಷಿಣ ಭಾರತವೂ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ಆರ್ಭಟ ಇರಲಿದೆ. ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಮತ್ತು ಪಶ್ಚಿಮ ಹಿಮಾಲಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಮಧ್ಯ ಮತ್ತು ಪಶ್ಚಿಮ ಭಾರತದ ಹೆಚ್ಚಿನ ಭಾಗಗಳಲ್ಲಿ ಯಾವುದೇ ಗಮನಾರ್ಹ ಹವಾಮಾನ ಬದಲಾವಣೆ ಇಲ್ಲ.
ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬುಧವಾರ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡನ್ನು ಹೊರತುಪಡಿಸಿ, ಕೇರಳ ಮತ್ತು ಮಾಹೆ, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕೆಲವು ಭಾಗಗಳಲ್ಲಿ ಪ್ರತ್ಯೇಕ ಅಥವಾ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 16ರವರೆಗೆ ದಕ್ಷಿಣ ಭಾರತದ ವಿವಿಧ ಪ್ರದೇಶಗಳಲ್ಲಿ ಮಳೆ ಇರಲಿದೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆ ಇರಲಿದೆ. ಈ ಹವಾಮಾನ ವ್ಯವಸ್ಥೆಯು ನವೆಂಬರ್ 13 ರವರೆಗೆ ದಕ್ಷಿಣ ಭಾರತದ ವಿವಿಧ ಪ್ರದೇಶಗಳಲ್ಲಿ ಸಕ್ರಿಯವಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ. ಏತನ್ಮಧ್ಯೆ, ಉತ್ತರಾಖಂಡದಲ್ಲಿ ನವೆಂಬರ್ 12 ಮತ್ತು 13 ರಂದು ಮಳೆಯಾಗುವ ಸಾಧ್ಯತೆಯಿದೆ.
ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಸೇರಿದಂತೆ ಪೂರ್ವ ಭಾರತದ ಕೆಲವು ಭಾಗಗಳಲ್ಲಿಯೂ ಪ್ರತ್ಯೇಕವಾಗಿ ಅಥವಾ ಚದುರಿದಂತೆ ಮಳೆ ಆಗಲಿದೆ ಎಂದೂ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಈಶಾನ್ಯದಲ್ಲಿ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಮತ್ತು ಇತರ ಈಶಾನ್ಯ ರಾಜ್ಯಗಳಲ್ಲಿ ಇದೇ ರೀತಿಯ ಪರಿಸ್ಥಿತಿಗಳು ಮುಂದುವರಿದಿದೆ. ಈ ವಾರದಲ್ಲಿ ಪಶ್ಚಿಮ ಮತ್ತು ಮಧ್ಯ ಭಾರತದಲ್ಲಿ ಯಾವುದೇ ಗಮನಾರ್ಹ ಹವಾಮಾನ ಬದಲಾವಣೆ ಇಲ್ಲ ಎಂದು ಐಎಂಡಿ ವರದಿ ಉಲ್ಲೇಖಿಸಿದೆ.
Imd Weather Forecast: ಬಂಗಾಳಕೊಲ್ಲಿಯಲ್ಲಿ ಮತ್ತೆ ಚಂಡಮಾರುತ ಪ್ರಸರಣ
ಇನ್ನು ನವೆಂಬರ್ 13ರ ಸುಮಾರಿಗೆ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುವ ಸಾಧ್ಯತೆ ಇದೆ. ಈ ವ್ಯವಸ್ಥೆಯು ವಾಯುವ್ಯ ದಿಕ್ಕಿಗೆ ಚಲಿಸುವ ಮತ್ತು ಮುಂದಿನ 24 ಗಂಟೆಗಳಲ್ಲಿ ಸ್ಪಷ್ಟವಾಗಿ ಗುರುತಿಸಲ್ಪಟ್ಟ ಕಡಿಮೆ ಒತ್ತಡದ ಪ್ರದೇಶವಾಗುವ ನಿರೀಕ್ಷೆಯಿದೆ.
ಇದರ ಬೆಳವಣಿಗೆಯು ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮಳೆಯ ಮೇಲೆ ಪ್ರಭಾವ ಬೀರಬಹುದು. ನವೆಂಬರ್ 15 ರಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ನವೆಂಬರ್ 16 ರಂದು ಕೇರಳದಲ್ಲಿ ಭಾರೀ ಮಳೆ ಆಗಲಿದೆ ಎಂದೂ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.


Click it and Unblock the Notifications
